ಸರ್ಕಾರ ಉರುಳಿದರೂ ಯಡಿಯೂರಪ್ಪ ಸಿಎಂ ಆಗಲ್ಲ: ಹೆಚ್.ಡಿ.ರೇವಣ್ಣ
ಒಂದು ವೇಳೆ ಸಮ್ಮಿಶ್ರ ಸರ್ಕಾರ ಉರುಳಿದರೂ ಬಿ.ಎಸ್.ಯಡಿಯೂರಪ್ಪ ಸಿಎಂ ಆಗುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಉರುಳಿದರೂ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರನ್ನು ಸೆಳೆದುಕೊಳ್ಳಲು ತಂತ್ರ ರೂಪಿಸಿದ್ದಾರೆ. ಸರ್ಕಾರ ಇನ್ನೆರಡು ದಿನಗಳಲ್ಲಿ ಉರುಳಿ ಬೀಳಲಿದೆ ಎಂಬ ವದಂತಿಗೆ ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಉತ್ತರಿಸಿದ ಅವರು, ಒಂದು ವೇಳೆ ಸಮ್ಮಿಶ್ರ ಸರ್ಕಾರ ಉರುಳಿದರೂ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಲು ಸಾಧ್ಯವಿಲ್ಲ. ಏಕೆಂದರೆ ಅವರೇ ತಾವು ಸಿಎಂ ಆಗಲ್ಲ ಎಂದು ಹೇಳಿಕೆ ನೀಡಿದ್ದಾರೆ. ಹಾಗಾಗಿ ರಾಷ್ಟ್ರಪತಿ ಆಡಳಿತ ಬರಬಹುದೇ ಹೊರತು ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಲ್ಲ ಎಂದರು.
ಮತ್ತೊಂದೆಡೆ, ರಾಜ್ಯ ಮೈತ್ರಿ ಸರ್ಕಾರದಲ್ಲಿ ಭುಗಿಲೆದ್ದಿರುವ ಅಸಮಾಧಾನಕ್ಕೆ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರು ಮುಲಾಮು ಹಚ್ಚುವ ಕೆಲಸ ಆರಂಭಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಈಶ್ವರ್ ಖಂಡ್ರೆ ಸೇರಿದಂತೆ ಜಾರಕಿಹೊಳಿ ಸೋದರರು ಮತ್ತು ಅತೃಪ್ತ ಶಾಸಕರ ತಂಡ ಮಂಗಳವಾರ ಸಂಜೆ ದೆಹಲಿಗೆ ತೆರಳಲಿದ್ದು, ಬುಧವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಮಹತ್ವದ ಸಭೆ ನಡೆಯಲಿದೆ.