ಪಕ್ಷದಿಂದ ಶಾಸಕ ಎನ್.ಮಹೇಶ್ ಉಚ್ಛಾಟಿಸಿ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಆದೇಶ
ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರನ್ನು ಪಕ್ಷದಿಂದಲೇ ಉಚ್ಚಾಟಿಸಿ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡದೆ ವಿಶ್ವಾಸಮತ ಯಾಚನೆಗೆ ಹಾಜರಾಗದೆ ಪಕ್ಷದ ಆದೇಶವನ್ನು ಉಲ್ಲಂಘಿಸಿದ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರನ್ನು ಪಕ್ಷದಿಂದಲೇ ಉಚ್ಚಾಟಿಸಿ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಹಿಂದಿಯಲ್ಲಿ ಟ್ವೀಟ್ ಮಾಡಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ರಾಜ್ಯದಲ್ಲಿ ಕರ್ನಾಟಕದ ಕುಮಾರಸ್ವಾಮಿ ಸರ್ಕಾರವನ್ನು ಬೆಂಬಲಿಸಿ ಮತ ಚಲಾಯಿಸುವಂತೆ ಪಕ್ಷದ ಹೈಕಮಾಂಡ್‌ನ ಸೂಚನೆಗಳನ್ನು ಉಲ್ಲಂಘಿಸಿ, ಬಿಎಸ್‌ಪಿ ಶಾಸಕ ಎನ್.ಮಹೇಶ್ ಇಂದಿನ ವಿಶ್ವಾಸ ಮತದಾನಕ್ಕೆ ಗೈರುಹಾಜರಾಗಿದ್ದಾರೆ. ಇದನ್ನು ಗಂಭಿರವಾಗಿ ಪರಿಗಣಿಸಿರುವ ಪಕ್ಷವು ಶಾಸಕ ಎನ್.ಮಹೇಶ್ ಅವರನ್ನು ಪಕ್ಷದಿಂದ ಉಚ್ಛಾಟಿಸಿ, ಈ ಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ನೀಡಲಾಗಿದೆ" ಎಂದಿದ್ದಾರೆ.
ರಾಜ್ಯದಲ್ಲಿ ಜೆಡಿಎಸ್ ಪಕ್ಷದೊಂದಿಗಿನ ಮೈತ್ರಿಯೊಂದಿಗೆ ಬಿಎಸ್ಪಿ ಅಭ್ಯರ್ಥಿಯಾಗಿ ಕೊಳ್ಳೇಗಾಲ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸಿಎಂ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸರ್ಕಾರದಲ್ಲಿ ಸಚಿವ ಸ್ಥಾನವನ್ನೂ ಪಡೆದಿದ್ದರು.