ಬೆಂಗಳೂರು: ತಮ್ಮ ಅಧಿಕಾರಾವಧಿಯ ಕೊನೆಯ ಬಜೆಟ್‍ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರು ರೈತರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ಶೂನ್ಯ ಬಡ್ಡಿದರಲ್ಲಿ ರೈತರಿಗೆ 5 ಲಕ್ಷ ರೂ. ಸಾಲವನ್ನು ಒದಗಿಸುವುದಾಗಿ ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
ಈ ವರ್ಷದಿಂದ ರೈತರಿಗೆ ನೀಡುವ ಬಡ್ಡಿರಹಿತ ಅಲ್ಪಾವಧಿ ಸಾಲದ ಮಿತಿಯನ್ನು 3 ಲಕ್ಷ ರೂ. ಗಳಿಂದ 5 ಲಕ್ಷ ರೂ. ಗಳಿಗೆ ಹೆಚ್ಚಿಸಲಾಗುವುದು. ಇದರಿಂದ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ರೈತರಿಗೆ ಸುಲಭವಾಗಿ ಹಾಗೂ ಅಗತ್ಯಕ್ಕೆ ತಕ್ಕಂತೆ ಸಾಲ ಸೌಲಭ್ಯ ದೊರಕಿಸಿದಂತಾಗುತ್ತದೆ. ಈ ವರ್ಷ 30 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25,000 ಕೋಟಿ ರೂ. ಗಳಷ್ಟು ಸಾಲ ವಿತರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್‌ನಲ್ಲಿ ಘೋಷಿಸಿದ್ದಾರೆ.
ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ 'ಭೂ ಸಿರಿ'' ಎಂಬ ನೂತನ ಯೋಜನೆ:
ಇದರೊಂದಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ 'ಭೂ ಸಿರಿ'' ಎಂಬ ನೂತನ ಯೋಜನೆಯಡಿ 2023-24ನೇ ಸಾಲಿನಿಂದ 10 ಸಾವಿರ ರೂ. ಗಳ ಹೆಚ್ಚುವರಿ ಸಹಾಯಧನ ನೀಡಲು ನಿರ್ಧರಿಸಿದ್ದೇವೆ. ತುರ್ತು ಸಂದರ್ಭಗಳಲ್ಲಿ ರೈತರಿಗೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಮುಂತಾದ ಪರಿಕರಗಳನ್ನು ಖರೀದಿಸಲು ಇದರಿಂದ ಅನುಕೂಲವಾಗಲಿದೆ. ಈ ಮೊತ್ತದಲ್ಲಿ ರಾಜ್ಯ ಸರ್ಕಾರದ 2,500 ರೂ. ಹಾಗೂ ನಬಾರ್ಡ್ ನ 7,500 ರೂ. ಸೇರಿದ್ದು, ರಾಜ್ಯದ ಸುಮಾರು 50 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇದನ್ನೂ ಓದಿ- Karnataka Budget 2023: ಕಿವಿ ಮೇಲೆ ಹೂವು ಇಟ್ಕೊಂಡು ಸದನಕ್ಕೆ ಬಂದ ಸಿದ್ದರಾಮಯ್ಯ.! ಏನಿದರ ತಾತ್ಪರ್ಯ?
ಸಣ್ಣ ಮತ್ತು ಅತಿಸಣ್ಣ ರೈತರ ಕುಟುಂಬಗಳಿಗೆ ಜೀವನ್‌ಜ್ಯೋತಿ ವಿಮಾ ನೆರವು:
ರಾಜ್ಯದ 56 ಲಕ್ಷ ಸಣ್ಣ ಮತ್ತು ಅತಿಸಣ್ಣ ರೈತರ ಕುಟುಂಬಗಳಿಗೆ 180 ಕೋಟಿ ರೂ. ವೆಚ್ಚದಲ್ಲಿ ಜೀವನ್‌ಜ್ಯೋತಿ ವಿಮಾ ಯೋಜನೆಯ ನೆರವಿನೊಂದಿಗೆ ಅವರ ಬದುಕಿಗೆ ಭದ್ರತೆ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.
ಅತ್ಯಾಧುನಿಕ ಕೃಷಿ ಯಂತ್ರೋಪಕರಣಗಳಿಗಾಗಿ 50 ಕೋಟಿ ರೂ. ಮೀಸಲು:
ರೈತರಿಗೆ ಅತ್ಯಾಧುನಿಕ ಕೃಷಿ ಯಂತ್ರೋಪಕರಣಗಳು ದೊರೆಯುವಂತೆ ಮಾಡಲು ಕೃಷಿ ಇಲಾಖೆಯು ಈಗಾಗಲೇ ನಿರ್ವಹಿಸುತ್ತಿರುವ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ 300 ಹೈಟೆಕ್ ಹಾರ್ವೆಸ್ಟರ್ ಗಳನ್ನು ಹಂತವಾಗಿ ಉದ್ದೇಶಿಸಲಾಗಿದೆ. 2023-24ನೇ ಸಾಲಿನಲ್ಲಿ 100 ಹೈಟೆಕ್ ಹಾರ್ವೆಸ್ಟರ್ ಗಳಿಗೆ ತಲಾ 50 ಲಕ್ಷ ರೂ. ನಂತೆ, ಈ ವರ್ಷ 50 ಕೋಟಿ ರೂ. ಒದಗಿಸಲಾಗುವುದು.
ಡಿಜಿಟಲ್ ಕೃಷಿಯಲ್ಲಿ ಜಿಯೋ-ಸ್ಟೇಷಿಯಲ್ ತಾಂತ್ರಿಕತೆ:
ಇಸ್ರೋ ಸಂಸ್ಥೆ ಸಹಯೋಗದೊಂದಿಗೆ ಡಿಜಿಟಲ್ ಕೃಷಿಯಲ್ಲಿ ಜಿಯೋ-ಸ್ಟೇಷಿಯಲ್ ತಾಂತ್ರಿಕತೆಗಳನ್ನು ಅಳವಡಿಸಲು 50 ಕೋಟಿ ರೂ. ವೆಚ್ಚದಲ್ಲಿ ಒಂದು ಹೊಸ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಈ ಯೋಜನೆಯಿಂದ ದೊರಕುವ ಮಾಹಿತಿಗಳನ್ನು ಉಪಯೋಗಿಸಿ, Precision Farming ಸೇರಿದಂತೆ ತಮ್ಮ ಉತ್ಪಾದನೆಯನ್ನು ಹೆಚ್ಚಿಸಲು ತಿಳಿವಳಿಕೆಯುಳ್ಳ ಸೂಕ್ತ ನಿರ್ಧಾರಗಳನ್ನು ಕೈಗೊಳ್ಳಲು ರೈತರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಇದನ್ನೂ ಓದಿ- Karnataka Budget 2023 Live: ಬಜೆಟ್ ನಲ್ಲಿ ರೈತರಿಗೆ ಬಂಪರ್ ಗಿಫ್ಟ್ ನೀಡಿದ ಸಿಎಂ ಬೊಮ್ಮಾಯಿ
ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ರೈತ ಉತ್ಪಾದಕ ಸಂಸ್ಥೆಗಳನ್ನು (FPO) ಪ್ರೋತ್ಸಾಹಿಸಲು ತಲಾ 10 ಲಕ್ಷ ರೂ. ವರೆಗಿನ ಬಂಡವಾಳಕ್ಕೆ 5 ವರ್ಷಗಳ ಅವಧಿಗೆ ಬ್ಯಾಂಕುಗಳ ಮೂಲಕ ಮುಖ್ಯಮಂತ್ರಿ ರೈತ ಉನ್ನತಿ ಯೋಜನೆಯಡಿ ಬಡ್ಡಿ ಸಹಾಯಧನ ಒದಗಿಸಲಾಗುವುದು ಎಂದು ಸಿಎಂ ತಮ್ಮ ಬಜೆಟ್‌ನಲ್ಲಿ ಘೋಷಿಸಿದರು.
ರೈತ ಉತ್ಪಾದಕ ಸಂಸ್ಥೆಗಳಿಗೆ ರೈತ ಉನ್ನತಿ ಯೋಜನೆಯಡಿ ಸಹಾಯಧನಕ್ಕೆ ಪ್ರಾಶಸ್ತ್ರ :
ಇದೇ ಸಂದರ್ಭದಲ್ಲಿ ರೈತ ಉತ್ಪಾದಕ ಸಂಸ್ಥೆಗಳಿಗೆ ರೈತ ಉನ್ನತಿ ಯೋಜನೆಯಡಿ ಸಹಾಯಧನಕ್ಕೆ ಪ್ರಾಶಸ್ತ್ರ ನೀಡಲಾಗುವುದು ಎಂದು ತಿಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಿರಿಧಾನ್ಯಗಳ ಉತ್ಪಾದನೆಯಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ. ಅಂತಾರಾಷ್ಟ್ರೀಯ ಸಿರಿಧಾನ್ಯಗಳು, ವರ್ಷ 2023ರ ಅಂಗವಾಗಿ ಕಿರುಧಾನ್ಯಗಳ ವಿಸ್ತೀರ್ಣ, ಉತ್ಪಾದನೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸಲು 'ರೈತಸಿರಿ' ಯೋಜನೆಯಡಿ ಕಿರುಧಾನ್ಯ ಬೆಳೆಗಾರರಿಗೆ ಪ್ರತಿ 10,000 ನೀಡಲಾಗುವುದು. ಅಲ್ಲದೆ ಸಿರಿಧಾನ್ಯಗಳನ್ನು ಕ್ಷೇತ್ರಮಟ್ಟದಲ್ಲಿ ಸಂಸ್ಕರಣೆ, ಗ್ರೇಡಿಂಗ್, ಪ್ಯಾಕಿಂಗ್ ಮಾಡುವ ರೈತ ಉತ್ಪಾದಕ ಸಂಸ್ಥೆಗಳಿಗೆ ಮುಖ್ಯಮಂತ್ರಿ ರೈತ ಉನ್ನತಿ ಯೋಜನೆಯಡಿ ಸಹಾಯಧನಕ್ಕೆ ಪ್ರಾಶಸ್ತ್ರ ನೀಡಲಾಗುವುದು. ಕೇಂದ್ರ ಸರ್ಕಾರವು ತನ್ನ ಆಯವ್ಯಯದಲ್ಲಿ ಒಂದು ಕೋಟಿ ರೈತರನ್ನು ನೈಸರ್ಗಿಕ ಕೃಷಿಗೆ ಆಕರ್ಷಿಸಲಾಗುವುದೆಂದು ಘೋಷಿಸಿದೆ. ಇದಕ್ಕೆ ಪೂರಕವಾಗಿ ಪ್ರತಿ ತಾಲ್ಲೂಕಿಗೆ ಒಂದರಂತೆ ತಲಾ 50 ಹೆಕ್ಟೇರ್ ಪ್ರದೇಶದಲ್ಲಿ ಗುಚ್ಛ ಮಾದರಿಯಲ್ಲಿ ಮುಂದಿನ 4 ವರ್ಷಗಳಲ್ಲಿ ಒಂದು ಲಕ್ಷ ಹೆಕ್ಟೇರ್ ಪ್ರದೇಶವನ್ನು ನೈಸರ್ಗಿಕ ಮತ್ತು ಸಮಗ್ರ ಕೃಷಿಗೆ ಒಳಪಡಿಸಲಾಗುವುದು ಎಂದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.