ಬೆಂಗಳೂರು: ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆದಂತಿದ್ದು, ಡಿ.9ಕ್ಕೆ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ.


COMMERCIAL BREAK
SCROLL TO CONTINUE READING

ಡಿಸೆಂಬರ್ 10ರಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮುನ್ನಾ ಸಂಪುಟ ವಿಸ್ತರಣೆ ಆಗಲಿದೆ ಎಂದು ಮೂಲಗಳು ತಿಳಿಸಿವೆ. ಸಮನ್ವಯ ಸಮಿತಿ ಅಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಡಿ.5 ರಂದು ಸಮನ್ವಯ ಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗುವ ಸಾಧ್ಯತೆ ಇದೇ ಎನ್ನಲಾಗಿದೆ. 


ಪ್ರಸ್ತುತ ಸಚಿವ ಸಂಪುಟದಲ್ಲಿ ಕಾಂಗ್ರೆಸ್ ಪಕ್ಷದಿಂದ ಆರು ಮತ್ತು ಜೆಡಿಎಸ್ ಕಡೆಯಿಂದ ಒಂದು ಸ್ಥಾನ ಸೇರಿದಂತೆ ಒಟ್ಟು ಏಳು ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಉಭಯ ಪಕ್ಷಗಳ ನಾಯಕರು ಸಮ್ಮತಿಸಿದ್ದಾರೆ ಎಂದು ಹೇಳಲಾಗಿದೆ. 


ಸಚಿವ ಸಂಪುಟ ವಿಸ್ತರಣೆಗೆ ನಿರಂತರವಾಗಿ ಒತ್ತಡ ಹೇರುತ್ತಿರುವ ಶಾಸಕರುಗಳು, ಒಂದೊಮ್ಮೆ ಅಧಿವೇಶನ ಆರಂಭಕ್ಕೂ ಮುನ್ನ ಈ ಕಾರ್ಯ ನಡೆಯದಿದ್ದರೆ ಅಧಿವೇಶನದ ಸಂದರ್ಭದಲ್ಲಿ ಸರ್ಕಾರಕ್ಕೆ ಮುಜುಗರವನ್ನುಂಟು ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆಗೆ ಉಭಯ ಪಕ್ಷಗಳ ನಾಯಕರು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.


ಇದರ ಬೆನ್ನಲ್ಲೇ ಬಂಡಾಯದ ಬಗ್ಗೆಯೂ ತಲೆಕೆಡಿಸಿಕೊಂಡಿರುವ ಪಕ್ಷದ ನಾಯಕರು ಅತೃಪ್ತ ಶಾಸಕರ ಮನವೊಲಿಸಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.