ನವದೆಹಲಿ: ಆಷಾಢ ಮಾಸದ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಸೋಮವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಈಗಾಗಲೇ ಸಚಿವ ಸಂಪುಟ ವಿಸ್ತರಣೆ ಮಾಡಬೇಕಿತ್ತು. ಆದರೆ ಆಷಾಢ ಮಾಸ ಬಂದದ್ದರಿಂದ ಮಾಡಲಾಗಲಿಲ್ಲ. ಆಷಾಢ ಮಾಸದ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಈ ಬಗ್ಗೆ ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸಿರುವುದಾಗಿ ತಿಳಿಸಿದರು. 


ಉಳಿದಂತೆ ಮೊದಲ ಹಂತದಲ್ಲಿ 30 ನಿಗಮ ಮತ್ತು ಮಂಡಳಿಗಳಿಗೆ ನೇಮಕಾತಿ ಮಾಡಲು ತಿರ್ಮಾನಿಸಲಾಗಿದ್ದು, ಕಾಂಗ್ರೆಸ್ಗೆ 20 ಮತ್ತು ಜೆಡಿಎಸ್ ಪಕ್ಷಕ್ಕೆ 10 ಸ್ಥಾನಗಳನ್ನು ನೀಡಲು ತೀರ್ಮಾನಿಸಲಾಗಿದೆ ಎಂದರು.


ಲೋಕಸಭೆ ಚುನಾವಣೆಯನ್ನು ಜೆಡಿಎಸ್-ಕಾಂಗ್ರೆಸ್ ಮೈತ್ರಿಯಾಗಿ ಎದುರಿಸಲಿವೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಲೋಕಸಭೆ ಚುನಾವಣೆಯನ್ನು ಕಾಂಗ್ರೆಸ್​ ಮತ್ತು ಜೆಡಿಎಸ್​ ಒಟ್ಟಾಗಿ ಎದುರಿಸಲು ಮಾಡಿಕೊಳ್ಳುತ್ತಿರುವ ಮೈತ್ರಿ ಬಗ್ಗೆ ಪಕ್ಷದಲ್ಲಿ ಯಾರ ಆಕ್ಷೇಪವೂ ಇಲ್ಲ. ಮೈತ್ರಿಗೆ ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಇನ್ನು ಪರಿಷತ್​ ಸಭಾಪತಿ ಸ್ಥಾನದ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.


ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಕಾರ್ಯಾಕಾರಿ ಸಮಿತಿ ಸಭೆಯಲ್ಲಿ ಭಾನುವಾರ ಭಾಗವಹಿಸಿದ್ದ ಸಿದ್ದರಾಮಯ್ಯ, ಮುಂಬರುವ ಲೋಕಸಭೆ ಚುನಾವಣೆ ಸಿದ್ಧತೆಗಳ ಬಗ್ಗೆ ಚರ್ಚಿಸಲು ಇಂದು ಬೆಳಿಗ್ಗೆ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದರು.