ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿಸುದ್ದಿ!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ದಾವೋಸ್ ಪ್ರವಾಸವನ್ನು ರದ್ದುಗೊಳಿಸಿದ್ದು, ಸಂಪುಟ ವಿಸ್ತರಣೆ ಸಂಬಂಧ ಪಕ್ಷದ ಹೈಕಮಾಂಡ್ ಜೊತೆ ಚರ್ಚಿಸಲು ಜನವರಿ 11, 12 ರಂದು ದೆಹಲಿಗೆ ತೆರಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

Last Updated : Jan 10, 2020, 07:05 AM IST
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿಸುದ್ದಿ! title=

ಬೆಂಗಳೂರು: ಉಪಚುನಾವಣೆಯಲ್ಲಿ 12 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು ಯಡಿಯೂರಪ್ಪ ನೇತೃತ್ವದ ಸರ್ಕಾರ ಸೇಫ್ ಆಗಿದೆ. ಈ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ(BS Yediyurappa) ರಾಜಕೀಯವಾಗಿ ಶಕ್ತಿಶಾಲಿಯಾಗಿರುವುದರಲ್ಲಿ ಸಂಶಯವಿಲ್ಲ. ಇದೀಗ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. 

ವಾಸ್ತವವಾಗಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ದಾವೋಸ್ ಪ್ರವಾಸವನ್ನು ರದ್ದುಗೊಳಿಸಿದ್ದು, ಸಂಪುಟ ವಿಸ್ತರಣೆ ಸಂಬಂಧ ಪಕ್ಷದ ಹೈಕಮಾಂಡ್ ಜೊತೆ ಚರ್ಚಿಸಲು ಜನವರಿ 11, 12 ರಂದು ದೆಹಲಿಗೆ ತೆರಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಪಕ್ಷದ ವರಿಷ್ಠರೊಂದಿಗೆ ಮಾತುಕತೆ ನಡೆಸಿದ ಸಂಕ್ರಾಂತಿ ಬಳಿಕ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಮಾಡುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ ಜನವರಿ 17 ಅಥವಾ 18 ರಂದು ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ.

ಸದ್ಯ ಯಡಿಯೂರಪ್ಪ ಸಂಪುಟದಲ್ಲಿ 16 ಸ್ಥಾನಗಳು ಖಾಲಿಯಿದ್ದು ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಶಾಸಕರಿಗೆ ಸಚಿವ ಸ್ಥಾನ ಸಿಗುವುದರಲ್ಲಿ ಸಂಶಯವಿಲ್ಲ. ಇನ್ನು ಮೂಲ ಬಿಜೆಪಿಗರಲ್ಲಿ 2-3 ಮಂದಿಗೆ ಅವಕಾಶ ಸಿಗುವ ನಿರೀಕ್ಷೆಯಿದೆ. ಬಿಜೆಪಿ ಸರ್ಕಾರ ಬರಲು ತಮ್ಮ ರಾಜಕೀಯ ಭವಿಷ್ಯವನ್ನೇ ಸವಾಲಾಗಿ ತೆಗೆದುಕೊಂಡು ಪ್ರಮುಖ ಪಾತ್ರ ನಿರ್ವಹಿಸಿದ್ದ ಹಿರಿಯ ನಾಯಕ ಹೆಚ್. ವಿಶ್ವನಾಥ್(H Vishwanath) ಹುಣಸೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದಾರೆ. ಇದೇ ವೇಳೆ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಕೋಟಿ ಒಡೆಯ ಎಂಟಿಬಿ ನಾಗರಾಜ್ (MTB Nagaraj) ಕೂಡ ಸೋಲುಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದವರಿಗೂ ಸಚಿವ ಸ್ಥಾನ ಸಿಗಲಿದೆಯೇ ಎಂಬುದು ಪ್ರಶ್ನೆಯಾಗಿದೆ.

ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ಸಾಕಷ್ಟು ಚಿಂತನೆ ನಡೆಸಿರುವ ಸಿಎಂ ಯಡಿಯೂರಪ್ಪ ಅಳೆದು-ತೂಗಿ ಯಾರಿಗೆ ಮಣೆ ಹಾಕುವರೋ? ಯಡಿಯೂರಪ್ಪ ಅವರ ನಿರ್ಧಾರಕ್ಕೆ ಹೈಕಮಾಂಡ್ ಸಮ್ಮತಿ ಸೂಚಿಸುವುದೇ? ಅಥವಾ ಬಿಜೆಪಿಯ ಮುಂದಿನ ನಡೆ ಯಾವ ರೀತಿ ಇರಬಹುದು ಎಲ್ಲವನ್ನೂ ಕಾದು ನೋಡಬೇಕಿದೆ.
 

Trending News