ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇಮಕ: ಮುಖ್ಯಮಂತ್ರಿಗೆ ಪರಮಾಧಿಕಾರ
ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅಧಿಕಾರಾವಧಿ ಇದೇ ತಿಂಗಳ 30ಕ್ಕೆ ಕೊನೆಗೊಳ್ಳಲಿದೆ.
ಬೆಂಗಳೂರು: ಇದೇ ಜೂನ್ 30 ರಂದು ತೆರವಾಗುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಅರ್ಹರನ್ನು ನೇಮಕ ಮಾಡುವ ಪರಮಾಧಿಕಾರವನ್ನು ರಾಜ್ಯ ಸಚಿವ ಸಂಪುಟ ಮುಖ್ಯಮಂತ್ರಿಯವರಿಗೆ ನೀಡಿದೆ.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಗುರುವಾರ ಸಂಜೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ನಂತರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ ಸುದ್ದಿಗಾರರಿಗೆ ಈ ವಿಷಯವನ್ನು ತಿಳಿಸಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರನ್ನು ಮತ್ತೆ ಮೂರು ತಿಂಗಳು ಅಧಿಕಾರದಲ್ಲಿ ಮುಂದುವರಿಸಲು ಕೇಂದ್ರಕ್ಕೆ ಬರೆದಿರುವ ಪತ್ರಕ್ಕೆ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ರತ್ನಪ್ರಭಾ ಅವರ ಅಧಿಕಾರಾವಧಿ ಮುಕ್ತಾಯಗೊಳ್ಳುವ ಮುನ್ನ ಅಂದರೆ ಜೂ. 30ರೊಳಗೆ ಕೇಂದ್ರದಿಂದ ಉತ್ತರ ಬರದಿದ್ದಲ್ಲಿ ಕಾರ್ಯಾಂಗದ ಈ ಅತ್ಯುನ್ನತ ಸ್ಥಾನಕ್ಕೆ ಅರ್ಹರನ್ನು ಆಯ್ಕೆ ಮಾಡಿ, ನೇಮಕ ಮಾಡುವ ಮಹತ್ತರ ಜವಾಬ್ದಾರಿಯನ್ನು ರಾಜ್ಯ ಸಚಿವ ಸಂಪುಟ ಮುಖ್ಯಮಂತ್ರಿಗೆ ನೀಡಿದೆ.
ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಅವರ ಅಧಿಕಾರಾವಧಿ ಮಾರ್ಚ್ ಅಂತ್ಯಕ್ಕೆ ಕೊನೆಗೊಂಡಿದ್ದು, ಚುನಾವಣೆ ಕಾರಣದಿಂದಾಗಿ ಅವರನ್ನೇ ಮೂರು ತಿಂಗಳ ಕಾಲ ಮುಂದುವರಿಸಲು ನಿರ್ಧರಿಸಿದ್ದ ಹಿಂದಿನ ಕಾಂಗ್ರೆಸ್ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿದ್ದಾಗ ಸ್ಪಂದನೆ ಸಿಕ್ಕಿತ್ತು. ಇದೀಗ ಸಮ್ಮಿಶ್ರ ಸರ್ಕಾರ ಮತ್ತೆ ಅವರನ್ನು ಮೂರು ತಿಂಗಳು ಮುಂದುವರಿಸಲು ಅವಕಾಶ ಕೋರಿ ರಾಜ್ಯ ಸರ್ಕಾರ 10 ದಿನಗಳ ಹಿಂದೆಯೇ ಕೇಂದ್ರಕ್ಕೆ ಪತ್ರ ಬರೆದಿದೆ. ಆದರೆ ಇದುವರೆಗೂ ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ.