ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದೆನ್ನುವುದೇ ನಮ್ಮ ಅನಿಸಿಕೆಯಾಗಿದೆ. ಇಂದು ಸಂಜೆ ತಜ್ಞರ ತಂಡದ ಜೊತೆಗಿನ ಸಭೆ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ರೈತ, ದಲಿತ, ಕಾರ್ಮಿಕ ಮತ್ತು ಕನ್ನಡ ಹೋರಾಟಗಾರರ ನಿಯೋಗಕ್ಕೆ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಕಾವೇರಿ ವಿವಾದ ಕುರಿತಂತೆ ರಾಜ್ಯ ಕಬ್ಬು ಬೆಳೆಗಾರರ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹಾಗೂ ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದ ಹೋರಾಟಗಾರರ ನಿಯೋಗದೊಂದಿಗೆ ನಡೆದ ಮಹತ್ವದ ಸಭೆಯಲ್ಲಿ ಅವರು ಮಾತನಾಡಿದರು.  


ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ 2 ಸಮಿತಿಗಳು ಪರಿಸ್ಥಿತಿ ಅವಲೋಕನ ಮಾಡಿ ಆದೇಶ ನೀಡುತ್ತವೆ. ಬಿಳಿಗುಂಡ್ಲುವಿನಲ್ಲಿ ನೀರು ಬಿಡಬೇಕೆಂದು ಆದೇಶವಾಗಿತ್ತು. ಸಾಮಾನ್ಯ ಪರಿಸ್ಥಿತಿಯಲ್ಲಿ 177.25 ಟಿಎಂಸಿ ನೀರನ್ನು 1 ವರ್ಷದಲ್ಲಿ ಬಿಡಬೇಕೆಂದು ಆದೇಶವಿದೆ. ನಮ್ಮ ರಾಜ್ಯಕ್ಕೆ 284. 85 ಟಿಎಂಸಿ ನೀರು ಅಗತ್ಯವಿದೆ. ಸುಪ್ರೀಂಕೋರ್ಟ್ ನಲ್ಲಿ ಸಂಕಷ್ಟ ಸೂತ್ರ ಸಿದ್ಧಪಡಿಸಿಲ್ಲ. 2 ಸಮಿತಿಗಳಾಗಬೇಕೆಂದು ನ್ಯಾಯಮಂಡಳಿಯೇ ತೀರ್ಮಾನ ಮಾಡಿದೆ ಎಂದು ವಿವರಿಸಿದರು. 


ಪ್ರತಿ ಬಾರಿ ಸಭೆ ಕರೆದಾಗಲೂ ಪ್ರತಿಭಟಿಸುತ್ತಲೇ ಬಂದಿದ್ದೇವೆ


ಈ ವರ್ಷ ಆಗಸ್ಟ್ ನಲ್ಲಿ ಮಳೆ ಕೈಕೊಟ್ಟಿದ್ದರಿಂದ ಸಮಸ್ಯೆ ಉಂಟಾಯಿತು. ಈ ತಿಂಗಳೂ ಕೂಡ ಮಳೆ ಅಷ್ಟೇನೂ ಆಗಿಲ್ಲ. ತಮಿಳುನಾಡಿಗೆ ಹಿಂಗಾರು ಮಳೆಯಿದೆ. ಈವರೆಗೆ 43 ಟಿಎಂಸಿ ನೀರು ಹೋಗಿದೆ. 123 ಟಿಎಂಸಿ ನೀರು ಬಿಡಬೇಕು ಎಂದು ಆದೇಶವಾಗಿದೆ. ಆದರೆ ನಾವು ನೀರು ಬಿಟ್ಟಿಲ್ಲ. ಕಾವೇರಿ ಪ್ರಾಧಿಕಾರ ಪ್ರತಿ ಬಾರಿ ಸಭೆ ಕರೆದಾಗಲೂ ನಾವು ಪ್ರತಿಭಟಿಸುತ್ತಲೇ ಬಂದಿದ್ದೇವೆ. ನೀರಿಲ್ಲ ಎಂದೇ ಹೇಳಿದ್ದೇವೆ. ಸುಪ್ರೀಂಕೋರ್ಟ್ ಮುಂದೆಯೂ ಅರ್ಜಿ ಹಾಕಿದ್ದೆವು. ನಮಗೆ ಬೆಳೆ ಉಳಿಸಿಕೊಳ್ಳಲು 70 ಟಿಎಂಸಿ ನೀರು ನೀರಾವರಿಗೆ ಅಗತ್ಯವಿದೆ.  30 ಟಿಎಂಸಿ ಕುಡಿಯುವ ನೀರಿಗೆ ಅಗತ್ಯ ಹಾಗೂ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯ. ಒಟ್ಟು 106 ಟಿಎಂಸಿ ಅವಶ್ಯಕತೆ ರಾಜ್ಯಕ್ಕೆ ಇದೆ. ಆದರೆ ನಮ್ಮ ಬಳಿ ಇರುವುದು ಕೇವಲ 50 ಟಿಎಂಸಿ ನೀರು. ನಮ್ಮ ಮೊದಲ ಆದ್ಯತೆ ಕುಡಿಯುವ ನೀರು ಎಂದು ವಿವರಿಸಿದರು.


ಇದನ್ನೂ ಓದಿ: ಬಂಧ್ ಬೆಂಬಲಿಸುವಂತೆ ಕರವೇ ಅಧ್ಯಕ್ಷರ ಮನವಿ


ಇಂದು ಸಂಜೆ ಸಭೆ


ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳೊಂದಿಗೆ ನೀರಾವರಿ ತಜ್ಞರು, ಮಾಜಿ ಅಡ್ವೊಕೇಟ್ ಜನರಲ್‍ಗಳೊಂದಿಗೆ ಇಂದು ಸಂಜೆ ಸಭೆ ಕರೆಯಲಾಗಿದ್ದು, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು. ನೀರು ಕೊಡಬಾರದೆಂದು ನಮ್ಮ ಅನಿಸಿಕೆ. ನೀರು ಬಿಡದಿದ್ದರೆ, ಜಲಾಶಯಗಳನ್ನು ಕೇಂದ್ರ ಸರ್ಕಾರ ವಶಕ್ಕೆ ಪಡೆಯಬಹುದು, contempt of court ಆಗುತ್ತದೆ, ಸರ್ಕಾರವನ್ನು ಡಿಸ್ಮಿಸ್ ಮಾಡಬಹುದು ಎಂದು ಪರಿಸ್ಥಿತಿಯನ್ನು ವಿವರಿಸಿದರು.


ಸಭೆಯಲ್ಲಿ ಮಾತನಾಡಿದ ಕುರುಬೂರು ಶಾಂತಕುಮಾರ್, ಕರ್ನಾಟಕದ ಜನರಿಗೆ ಪೆಟ್ಟು ಬೀಳುವ ಆದೇಶ ನೀಡಲಾಗುತ್ತಿದೆ. ಇದರಿಂದ ರಾಜ್ಯದ ಜನರು ಆತಂಕಗೊಂಡಿದ್ದಾರೆ. ರೈತರ ಪರವಾಗಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಸಂಘಟನೆಗಳು ಜನಪರವಾಗಿ ಹೋರಾಟ ಮಾಡಿದಾಗ ಅವರ ಮೇಲೆ ಹಾಕಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕೆಂದು ಮನವಿ ಮಾಡಿದ ಅವರು, ಮೇಕೆದಾಟು ಯೋಜನೆಗೆ ಶೀಘ್ರ ಕಾಯಕಲ್ಪ ನೀಡಬೇಕೆಂದು ಒತ್ತಾಯಿಸಿದರು.


ಮುಖ್ಯಮಂತ್ರಿ ಚಂದ್ರು ಮಾತನಾಡಿ, ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಬಂದ್ ಮಾಡಿದ್ದಾರೆ. ಪ್ರಾಧಿಕಾರದ ತೀರ್ಪು ಅವೈಜ್ಞಾನಿಕವಾಗಿದೆ. ಲೋಪ ಎಲ್ಲಿ ಆಗಿದೆ ಎಂದು ಸ್ಪಷ್ಟಪಡಿಸಬೇಕು. ನಮ್ಮ ಹಕ್ಕೊತ್ತಾಯವನ್ನು ತಮಿಳುನಾಡಿನಂತೆಯೇ ತೀವ್ರವಾಗಿ ಮಾಡಬೇಕು. ಸಂಕಷ್ಟ ಪರಿಹಾರ ಸೂತ್ರ ಇಲ್ಲದಿದ್ದರೂ ನೀರು ಬಿಡುವಂತೆ ಸೂಚಿಸುವುದು ತಪ್ಪು. ಆದೇಶ ಉಲ್ಲಂಘನೆ ಮಾಡಿದರೆ ಏನಾಗುತ್ತದೆ ಎಂದು ಪಟ್ಟಿ ಮಾಡಬೇಕು. ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ತಮಿಳುನಾಡು ಬೆಳೆಗೆ ನೀರು ಕೇಳುತ್ತಿದೆ. ತಕ್ಷಣ ಸದನ ಕರೆದು ಈ ಕುರಿತು ತೀರ್ಮಾನ ಕೈಗೊಳ್ಳಬೇಕೆಂದು ಒತ್ತಾಯಿಸಿದರು.


ಇದನ್ನೂ ಓದಿ: ಕರ್ನಾಟಕ ಬಂದ್, ಖಾಸಗಿ ಶಿಕ್ಷಣ ಸಂಸ್ಥೆಗಳಿನ ನೈತಿಕ ಬೆಂಬಲ


ನಿಮ್ಮ ಎಲ್ಲಾ ಬೇಡಿಕೆಗಳ ಬಗ್ಗೆ ಸಂಜೆ ತಜ್ಞರ ತಂಡದ ಜೊತೆಗೂ ಚರ್ಚಿಸಲಾಗುವುದು. ಬಳಿಕ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ನಿಯೋಗದಲ್ಲಿ ರೈತ, ದಲಿತ, ಕಾರ್ಮಿಕ ಮತ್ತು ಕನ್ನಡ ಸಂಘಟನೆಗಳ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.