ಮೈಸೂರು: ರಾಜ್ಯಕ್ಕೆ ಪ್ರವಾಹ ಪರಿಹಾರ ಬಿಡುಗಡೆಯಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂಬ ವಿರೋಧ ಪಕ್ಷಗಳ ಆರೋಪದ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.


COMMERCIAL BREAK
SCROLL TO CONTINUE READING

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ‌ ನೆರೆಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ಸ್ಪಂದಿಸಲಿದ್ದು, ಇನ್ನು ಮೂರರಿಂದ ನಾಲ್ಕು ದಿನಗಳಲ್ಲಿ ಪರಿಹಾರ ಬಿಡುಗಡೆಯಾಗಲಿದೆ ಎಂದು ಭರವಸೆ ನೀಡಿದ್ದಾರೆ.


ಪ್ರವಾಹ ಪೀಡಿತ ಯಾವ ‌ರಾಜ್ಯಕ್ಕೂ ಕೇಂದ್ರ ಸರ್ಕಾರ ಇನ್ನೂ ಹಣ ಬಿಡುಗಡೆ ಮಾಡಿಲ್ಲ. ವಿರೋಧ ಪಕ್ಷದ ನಾಯಕರು ಈ ವಿಷಯದಲ್ಲಿ ಅನಗತ್ಯ ಗೊಂದಲ ‌ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಅದರ ಅಗತ್ಯವಿಲ್ಲ. ಏಕೆಂದರೆ ರಾಜ್ಯ ಸರ್ಕಾರ ಪ್ರವಾಹ ಸಂತ್ರಸ್ತರನ್ನು ಎಂದೂ ಕಡೆಗಣಿಸಿಲ್ಲ.‌ ಈಗಾಗಲೇ, ‌ಪ್ರವಾಹ ಸಂತ್ರಸ್ತರಿಗೆ ಪರಿಹಾರ ಒದಗಿಸುವ ಕೆಲಸ ನಡೆದಿದೆ ಎಂದು ಯಡಿಯೂರಪ್ಪ ಹೇಳಿದರು. 


ಮುಂದುವರೆದು ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಈಗಷ್ಟೇ ವಿದೇಶ ಪ್ರವಾಸದಿಂದ ದೇಶಕ್ಕೆ ವಾಪಸ್ ಆಗಿದ್ದಾರೆ. ಮೋದಿಯವರಿಗೆ ಎಲ್ಲ ರಾಜ್ಯಗಳ ಪ್ರವಾಹ ಹಾನಿ ಪರಿಸ್ಥಿತಿ ಬಗ್ಗೆ ತಿಳಿದಿದೆ. ಈಗಾಗಲೇ ನಾನು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಎಲ್ಲವನ್ನೂ ಮನವರಿಕೆ ಮಾಡಿ ಬಂದಿದ್ದೇನೆ. ಇನ್ನೂ ಎರಡು-ಮೂರು ದಿನಗಳಲ್ಲಿ ಪರಿಹಾರ ಘೋಷಿಸುವ ಭರವಸೆ ಇದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.