ಬೆಂಗಳೂರು: ರಾಜ್ಯದ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆ ನಿರ್ಮಾಣಕ್ಕೆ ಕೇಂದ್ರ ಜಲ ಆಯೋಗ ಪ್ರಾಥಮಿಕ ಹಂತದ ಅನುಮತಿ ನೀಡಿದ್ದು, ಸಮಗ್ರ ಯೋಜನಾ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶನ ನೀಡಿದೆ. 


COMMERCIAL BREAK
SCROLL TO CONTINUE READING

ಮೇಕೆದಾಟು ಯೋಜನೆ ಕುರಿತ ರಾಜ್ಯದ ಪ್ರಿ-ಫೀಸಿಬಿಲಿಟಿ ವರದಿಗೆ ಕೇಂದ್ರದ ಜಲ ಸಂಪನ್ಮೂಲ ಇಲಾಖೆ ಒಪ್ಪಿಗೆ ನೀಡಿದ್ದು, ಯೋಜನೆ ವಿರೋಧಿಸಿದ್ದ ತಮಿಳುನಾಡಿಗೆ ಹಿನ್ನಡೆಯಾಗಿದೆ.


ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವುದರಿಂದ ರಾಜ್ಯಕ್ಕೆ ಮೊದಲ ಹಂತದ ಜಯ ಸಿಕ್ಕಂತಾಗಿದ್ದು, ಈ ಕುರಿತು ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ ಪತ್ರ ದೊರೆತ ತಕ್ಷಣ ರಾಜ್ಯ ಸರ್ಕಾರ ಸಮಗ್ರ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಿದೆ. ಈಗಾಗಲೇ ರಾಜ್ಯ ಸರ್ಕಾರ ಮೇಕೆದಾಟು ಯೋಜನೆಯ ಸಮಗ್ರ ವರದಿ ಸಿದ್ದಪಡಿಸಿದ್ದು, ಜಲ ಆಯೋಗದ ಸೂಚನೆಯಂತೆ ಪರಿಷ್ಕರಿಸಿ ಹೊಸದಾಗಿ ವರದಿ ಸಲ್ಲಿಸಲಾಗುವುದು ಎಂದು ಜಲ ಸಂಪನ್ಮೂಲ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.


ಏನಿದು ಮೇಕೆದಾಟು ಯೋಜನೆ?
ಮೇಕೆದಾಟು ಬಳಿ ಕುಡಿಯುವ ನೀರಿನ ಯೋಜನೆಗಾಗಿ ಕಾವೇರಿ ನದಿಗೆ ಅಡ್ಡಲಾಗಿ ಕಿರು ಅಣೆಕಟ್ಟು ಕಟ್ಟಲು ಕರ್ನಾಟಕ ಸರ್ಕಾರ ಮುಂದಾಗಿದೆ. ಮೇಕೆದಾಟುವಿನಲ್ಲಿ ಅಣೆಕಟ್ಟು ಕಟ್ಟಬೇಕೆಂಬ ಪ್ರಸ್ತಾಪ 1952ರಲ್ಲೇ ಚಿಗುರೊಡೆದಿತ್ತು. ಆದರೆ ಕೆಲ ಕಾರಣಗಳಿಂದ ಈ ಯೋಜನೆಯನ್ನು ಸರ್ಕಾರ ಕೈಬಿಟ್ಟಿತ್ತು. 1996ರಲ್ಲಿ ಮೇಕೆದಾಟುವಿನಲ್ಲಿ ವಿದ್ಯುತ್ ಉತ್ಪಾದನೆ ಮಾಡುವ ಯೋಜನೆಯನ್ನು ರಾಜ್ಯ ಸರ್ಕಾರ ರೂಪಿಸಿ ಕೇಂದ್ರ ವಿದ್ಯುತ್ ಪ್ರಾಧಿಕಾರಕ್ಕೆ ಅನುಮೋದನೆಗೆ ಕಳುಹಿಸಿಕೊಟ್ಟಿತ್ತು. ಆದರೆ ಇದೇ ಸಮಯದಲ್ಲಿ ಕಾವೇರಿ ವಿವಾದ ನ್ಯಾಯಾಧಿಕರಣ ಮುಂದೆ ಇದ್ದ ಕಾರಣ ಮೊದಲು ಈ ವಿವಾದವನ್ನು ಬಗೆಹರಿಸಿಕೊಳ್ಳಿ, ನಂತರ ಈ ವಿಚಾರವನ್ನು ಪ್ರಸ್ತಾಪ ಮಾಡಿ ಎಂದು ಹೇಳುವ ಮೂಲಕ ವಿದ್ಯುತ್ ಪ್ರಾಧಿಕಾರ ಉಪಾಯದಿಂದ ಜಾರಿಕೊಂಡಿತ್ತು. 2007ರಲ್ಲಿ ನ್ಯಾಯಾಧಿಕರಣ ಅಂತಿಮ ತೀರ್ಪು ಪ್ರಕಟಿಸಿದ ಬಳಿಕ ಮತ್ತೆ ಮೇಕೆದಾಟು ಯೋಜನೆ ಗರಿಗೆದರತೊಡಗಿತು. ಅಂತಿಮವಾಗಿ 2013ರಲ್ಲಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮೇಕೆದಾಟು ಯೋಜನೆ ನಿರ್ಮಿಸಲು ಮಹತ್ವದ ಹೆಜ್ಜೆ ಇಟ್ಟಿತು. ಯೋಜನೆಗೆ ಅನುಮತಿ ನೀಡುವಂತೆ ಕೇಂದ್ರ ಜಲ ಆಯೋಗಕ್ಕೂ ಮನವಿ ಮಾಡಿತ್ತು.
ಆದರೆ, ತಮಿಳುನಾಡಿನ ಆಗಿನ ಸಿಎಂ ದಿ.ಜಯಲಲಿತಾ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದರಿಂದ ಒಪ್ಪಿಗೆ ಸಿಕ್ಕಿರಲಿಲ್ಲ.


ಸಮ್ಮಿಶ್ರ ಸರ್ಕಾರದಲ್ಲಿ ರಾಮನಗರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕನಕಪುರದವರಾದ ಡಿ.ಕೆ. ಶಿವಕುಮಾರ್ ಅವರಿಂದಾಗಿ ಮತ್ತೆ ಈ ಯೋಜನೆ ಮುನ್ನೆಲೆಗೆ ಬಂದಿತು. ಕೇಂದ್ರ ಸರ್ಕಾರದ ಒಪ್ಪಿಗೆ ದೊರೆತರೆ ಯೋಜನೆ ಆರಂಭಿಸುವುದಾಗಿ ಬಜೆಟ್‌ನಲ್ಲೇ ಘೋಷಿಸಿದ್ದರು. ಇದರಂತೆ ಯೋಜನೆಯ ಸಾಧ್ಯತೆಯ ವರದಿಯನ್ನು ರಾಜ್ಯ ಸರ್ಕಾರಕ್ಕೆ ಕೇಂದ್ರ ಜಲ ಆಯೋಗಕ್ಕೆ ಸಲ್ಲಿಕೆ ಮಾಡಿತ್ತು.


ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ, ಸಚಿವ ರೇವಣ್ಣ ಅವರು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ಮೇಕೆದಾಟು ಯೋಜನೆಗೆ ಅನುಮತಿ ಪಡೆಯಲು ಮಾತುಕತೆ ನಡೆಸಿದ್ದರು. ಈ ವೇಳೆ ಮೇಕೆದಾಟು ಯೋಜನೆಗೆ ಸಮುದ್ರಕ್ಕೆ ವ್ಯರ್ಥವಾಗಿ ಸೇರುತ್ತಿರುವ ಕಾವೇರಿ ನೀರನ್ನು ಬಳಸಿಕೊಂಡರೆ ಉಂಟಾಗುವ ಪ್ರಯೋಜನೆಗಳ ಬಗ್ಗೆ ವಿವರವಾಗಿ ಚರ್ಚಿಸಿದ್ದರು. ಈ ವೇಳೆ ಸಕಾರಾತ್ಮಕವಾಗಿ ಸ್ಪಂಧಿಸಿದ್ದ ಸಚಿವ ನಿತಿನ್ ಗಡ್ಕರಿ ಕರ್ನಾಟಕ ಸರ್ಕಾರಕ್ಕೆ ಎಲ್ಲ ರೀತಿಯ ಅಗತ್ಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದ್ದರು.



ಇದರ ಬೆನ್ನಲ್ಲೇ ಖ್ಯಾತೆ ತೆಗೆದಿದ್ದ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಡಿ ಎಂದು ಈ ಹಿಂದೆ ಪತ್ರ ಬರೆದು ಯೋಜನೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿದ್ದ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ, ನಂತರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ತಮಿಳುನಾಡಿನ ಜೊತೆ ಚರ್ಚಿಸದೆ ಯಾವುದೇ ತೀರ್ಮಾನ ಮಾಡಬೇಡಿ ಎಂದು ಮನವಿ ಮಾಡಿದ್ದರು.