ಬೆಂಗಳೂರು: ಎಂಜಿನಿಯರಿಂಗ್, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮತ್ತು ಇತರ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶಕ್ಕಾಗಿ ಇಂದಿನಿಂದ (ಜೂನ್ 16) ಮೂರು ದಿನಗಳ ಕಾಲ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಆರಂಭವಾಗಲಿದೆ. ವೃತ್ತಿಪರ ಕೋರ್ಸುಗಳಿಗೆ ಇಂದು (ಜೂ.16) ಮತ್ತು ನಾಳೆ (ಜೂ.17ರಂದು ) ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಮತ್ತು ಜೂನ್ 18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಸಿಇಟಿ ಪರೀಕ್ಷಾ ಕೇಂದ್ರಗಳ ಸಿದ್ಧತೆಗಳ ಬಗ್ಗೆ ಮಾತನಾಡಿರುವ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ್, ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರಗಳನ್ನು ವೀಡಿಯೊಗ್ರಾಫ್ ಮಾಡಲಾಗುವುದು. ಇದು ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿದೆ ಎಂದು ಹೇಳಿದ್ದಾರೆ.
ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಸಿಇಟಿ ಪರೀಕ್ಷೆಯಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ಸಕಲ ಸಿದ್ಧತೆ ಮಾಡಿಕೊಂಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಟ್ಟುನಿಟ್ಟಿನ ನಿರ್ಬಂಧ ಹೇರಿದೆ. ಪರೀಕ್ಷಾ ಕೇಂದ್ರಗಳಿಗೆ ಯಾವುದೇ ರೀತಿಯ ಧರ್ಮ ಸೂಚಕ ವಸ್ತ್ರ ಧರಿಸಿ ಬರುವವರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಈ ಬಾರಿ ಒಟ್ಟು 2,16,525 ವಿದ್ಯಾರ್ಥಿಗಳು ಸಿಇಟಿ ಬರೆಯಲಿದ್ದಾರೆ. ಜೂನ್ 16ರಂದು ಬೆಳಿಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತ ಪರೀಕ್ಷೆಗಳು ನಡೆಯಲಿವೆ. ಜೂನ್ 17ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆ ಜರುಗಲಿದೆ. ಜೂನ್ 18ರ ಬೆಳಿಗ್ಗೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಬೆಂಗಳೂರು, ಬೀದರ್, ಬೆಳಗಾವಿ, ವಿಜಯಪುರ, ಬಳ್ಳಾರಿ ಮತ್ತು ಮಂಗಳೂರುಗಳಲ್ಲಿ ಕನ್ನಡ ಭಾಷಾಪರೀಕ್ಷೆ ನಡೆಯಲಿದ್ದು, ಈ ಸಲ 1,708 ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯುತ್ತಿದ್ದಾರೆ.
ಇದನ್ನೂ ಓದಿ- ಪಿಎಸ್ಐ ನೇಮಕಾತಿ ಅಕ್ರಮ.. ಸಬ್ಇನ್ಸ್ಪೆಕ್ಟರ್ ಅರೆಸ್ಟ್
ಸಿಇಟಿ ಪರೀಕ್ಷಾ ಕೇಂದ್ರಗಳ ಸಿದ್ಧತೆಗಳ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಈ ಬಾರಿ ಒಟ್ಟು 486 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಪೈಕಿ 87 ಕೇಂದ್ರಗಳು ಬೆಂಗಳೂರಿನಲ್ಲಿವೆ. ಯಾವುದೇ ಅಕ್ರಮಕ್ಕೆ ಅವಕಾಶ ನೀಡಬಾರದೆಂಬ ಉದ್ದೇಶದಿಂದ ಈ ಬಾರಿ ಪ್ರತಿಯೊಂದು ಕೇಂದ್ರದ ಪರೀಕ್ಷಾ ಪ್ರಕ್ರಿಯೆಯನ್ನೂ ಸಮಗ್ರವಾಗಿ ವಿಡಿಯೋ ಚಿತ್ರೀಕರಣ ಮಾಡಲಾಗುವುದು. ಜತೆಗೆ ಪ್ರಶ್ನೆಪತ್ರಿಕೆ ಪೂರೈಕೆ ಇತ್ಯಾದಿಗಳನ್ನು ಹದ್ದಿನ ಕಣ್ಣಿನ ಪಹರೆಯಲ್ಲಿ ನಡೆಸಲಾಗುವುದು ಎಂದಿದ್ದಾರೆ. ಇದೇ ವೇಳೆ, ಈ ಸಲದ ಸಿಇಟಿ ಪರೀಕ್ಷೆಯಲ್ಲಿ ಪ್ರಶ್ನೆ ಮತ್ತು ಉತ್ತರಗಳನ್ನು ಇಂಗ್ಲಿಷ್ ಹಾಗೂ ಕನ್ನಡ ಎರಡರಲ್ಲೂ ಕೊಡಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಪ್ರತಿಯೊಂದು ಕೇಂದ್ರಕ್ಕೂ ಸಹಾಯಕ ಆಯುಕ್ತರ ದರ್ಜೆಯ ಅಧಿಕಾರಿಯೊಬ್ಬರನ್ನು ಪರೀಕ್ಷಾ ವೀಕ್ಷಕರಾಗಿ ನೇಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಒಟ್ಟಾರೆ, 486 ವೀಕ್ಷಕರು, 972 ವಿಶೇಷ ತಪಾಸಣಾ ದಳದ ಸದಸ್ಯರು, 486 ಪ್ರಶ್ನೆಪತ್ರಿಕೆ ಪಾಲಕರು, 9,600 ಕೊಠಡಿ ಮೇಲ್ವಿಚಾರಕರು ಮತ್ತು 20 ಸಾವಿರಕ್ಕೂ ಹೆಚ್ಚು ಅಧಿಕಾರಿಗಳನ್ನು ಸಿಇಟಿ ಪರೀಕ್ಷಾ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸಲು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಇದನ್ನೂ ಓದಿ- Karnataka MLC Election Results 2022 : ವಿಧಾನ ಪರಿಷತ್ ಫಲಿತಾಂಶ : 8ನೇ ಬಾರಿ ಗೆದ್ದು ಬೀಗಿದ ಬಸವರಾಜ್ ಹೊರಟ್ಟಿ
ಇದೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮ ಮತ್ತು ಅವರಿಗೆ ವಿಧಿಸಿರುವ ನಿರ್ಬಂಧಗಳ ಬಗ್ಗೆಯೂ ಮಾಹಿತಿ ನೀಡಿದ ಉನ್ನತ ಶಿಕ್ಷಣ ಸಚಿವರು, ಸಿಇಟಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದ್ದು, ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದರು.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಈ ನಿಯಮಗಳನ್ನು ಪಾಲಿಸುವುದು ಕಡ್ಡಾಯ:
* ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
* ಓಎಂಆರ್ ಉತ್ತರ ಪತ್ರಿಕೆಯಲ್ಲಿ ತಮ್ಮ ಹೆಸರು, ಸಿಇಟಿ ಸಂಖ್ಯೆ, ಪ್ರಶ್ನೆ ಪತ್ರಿಕೆಯ ವರ್ಶನ್ ಕೋಡ್ ನಮೂದಿಸಬೇಕು.
* ಮೊದಲ ಗಂಟೆ ಬಾರಿಸಲಿರುವ ನಿಗದಿತ ಅವಧಿಗಿಂತಲೂ ಅರ್ಧ ಗಂಟೆ ಮುಂಚೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.
* ವಿದ್ಯಾರ್ಥಿಗಳು ತಮ್ಮ ಪ್ರವೇಶಪತ್ರ (ಅಡ್ಮಿಶನ್ ಟಿಕೆಟ್) ಮತ್ತು ಯಾವುದಾದರೂ ಒಂದು ಸೂಕ್ತ ಗುರುತಿನ ಪತ್ರವನ್ನು ತರಬೇಕು (ಕಾಲೇಜಿನ ಗುರುತುಪತ್ರ, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಆಧಾರ್/ಪ್ಯಾನ್ ಕಾರ್ಡ್, ದ್ವಿತೀಯ ಪಿಯುಸಿ/12ನೇ ತರಗತಿಯ ಪ್ರವೇಶ ಪತ್ರ ಇತ್ಯಾದಿಗಳ ಪೈಕಿ ಒಂದು).
* ಯಾವುದೇ ತರಹದ ಕೈಗಡಿಯಾರಗಳನ್ನು ಕಟ್ಟಿಕೊಂಡು ಬರುವಂತಿಲ್ಲ.
* ಟ್ಯಾಬ್, ಮೊಬೈಲ್, ಕ್ಯಾಲ್ಕುಲೇಟರುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.