ಕಾಂಗ್ರೆಸ್ ನಾಯಕ ಡಿಕೆಶಿ ಬಂಧನದ ಬಗ್ಗೆ ಸಿಎಂ ಯಡಿಯೂರಪ್ಪ ಹೇಳಿದ್ದೇನು?
ಡಿ.ಕೆ.ಶಿವಕುಮಾರ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಡಿಕೆಶಿ ಬೇಗ ಬಿಡುಗಡೆಯಾಗಿ ಬರಲೆಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಡಿಕೆಶಿ ಬೇಗ ಬಿಡುಗಡೆಯಾಗಿ ಬರಲೆಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ನೆಪವೊಡ್ಡಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ರಾತ್ರಿ ದೆಹಲಿಯಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದ್ದು, ಈ ಬಗ್ಗೆ ಸಿಎಂ ಯಡಿಯೂರಪ್ಪ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನ ತಮ್ಮ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಅವರ ಬಂಧನ ನಮಗೇನೂ ಸಂತೋಷ ತಂದಿಲ್ಲ. ನಾನು ಜೀವನದಲ್ಲಿ ಯಾರಿಗೂ ಕೆಟ್ಟದ್ದನ್ನು ಮಾಡಿಲ್ಲ. ಕೆಲವು ಸಂದರ್ಭಗಳಲ್ಲಿ ಕಾನೂನು ತನ್ನದೇ ಆದ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಹಾಗಾಗಿ ಅವರು ಆದಷ್ಟು ಬೇಗ ಹೊರಬರಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಮತ್ತೊಂದೆಡೆ ಡಿ.ಕೆ.ಶಿವಕುಮಾರ್ ಅವರ ಬಂಧನಕ್ಕೆ ಬಿಜೆಪಿಯೇ ಕಾರಣ, ಇದೆಲ್ಲಾ ಬಿಜೆಪಿಯ ರಾಜಕೀಯ ಷಡ್ಯಂತ್ರ ಎಂದು ವಿಪಕ್ಷ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.