ಬೆಳಗಾವಿ: ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನವನ್ನು ಪ್ರಸ್ತುತವಿರುವ 1,500ಕೋಟಿ ರೂ.ನಿಂದ 2ಸಾವಿರ ಕೋಟಿಗಳಿಗೆ ಹೆಚ್ಚಿಸಬೇಕೆಂದು ಆ ಭಾಗದ ಶಾಸಕರು ಮಾಡಿದ ಮನವಿಗೆ ಮುಖ್ಯಮಂತ್ರಿ ಹೆಚ್‍.ಡಿ. ಕುಮಾರಸ್ವಾಮಿ ಸಕರಾತ್ಮಕವಾಗಿ ಸ್ಪಂದಿಸಿದ್ದು, 2ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚನೆ ನೀಡಿದರು.


COMMERCIAL BREAK
SCROLL TO CONTINUE READING

ಬುಧವಾರ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಹೈದ್ರಾಬಾದ್ ಕರ್ನಾಟಕ ಭಾಗದ ಶಾಸಕರೊಂದಿಗೆ ಆ ಭಾಗದ ಸಮಸ್ಯೆಗಳ ಬಗ್ಗೆ ಸಮಾಲೋಚನಾ ಸಭೆ ನಡೆಸಿದರು. ಸಭೆಯಲ್ಲಿ ಹೆಚ್‍ಕೆಡಿಬಿಗೆ ಪ್ರಸ್ತುತ ಬಜೆಟ್‍ನಲ್ಲಿ 1500ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ. ಆದರೆ ಒಂದು ಸಾವಿರ ರೂ. ಕಾಮಗಾರಿಗಳಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಅನುದಾನವನ್ನು ಮುಂದಿನ ಬಜೆಟ್‍ನಲ್ಲಿ 2ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸಬೇಕು ಎಂದು ಶಾಸಕರು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದರು.


ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, 2ಸಾವಿರ ಕೋಟಿ ರೂ.ಗಳಿಗೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಸಲ್ಲಿಸಿ. ಪ್ರಸ್ತುತ ಸಾಲಿನಲ್ಲಿ ಇದುವರೆಗೆ ಹೈದ್ರಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ 692 ಕೋಟಿ ರೂ. ವೆಚ್ಚ ಮಾಡಲಾಗಿದೆ. ಮುಂದಿನ ಮೂರು ತಿಂಗಳ ಅವಧಿಯಲ್ಲಿ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಿ ಹಣ ಬಳಕೆ ಪ್ರಮಾಣ ಪತ್ರ ಸಲ್ಲಿಸಿದಂತೆ ಉಳಿದ ಅನುದಾನವನ್ನು ಬಿಡುಗಡೆ ಮಾಡಲು ಸಿದ್ಧ ಎಂದು ಉತ್ತರಿಸಿದರು.


ಹೆಚ್‍ಕೆಡಿಬಿ ಅನುದಾನದಲ್ಲಿ ನಗರ ಪ್ರದೇಶಗಳಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಕೆಲವು ಶಾಸಕರು ತಿಳಿಸಿದ್ದು, ಇದನ್ನು ಸರಿಪಡಿಸಲಾಗುವುದು. ನಂಜುಂಡಪ್ಪ ವರದಿ ಅನುಷ್ಟಾನದ ಬಳಿಕ ಆ ಭಾಗದಲ್ಲಿ ಉಂಟಾಗಿರುವ ಅಭಿವೃದ್ಧಿಗಳನ್ನು ಪರಿಶೀಲಿಸಿ, ಇನ್ನೂ ಅಭಿವೃದ್ಧಿ ಹೊಂದಬೇಕಾದ ಪ್ರದೇಶಗಳಿಗೆ ಹೆಚ್ಚಿನ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.


ಹೆಚ್‍ಕೆಡಿಬಿ ಕಾರ್ಯದರ್ಶಿ ಅವರು ಆ ಭಾಗದಲ್ಲಿ ಹಲವಾರು ಹುದ್ದೆಗಳು ಖಾಲಿಯಿರುವುದಾಗಿ ಪ್ರಸ್ತಾಪಿಸಿದ್ದು, ಅಗತ್ಯ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಮುಂದಿನ ವರ್ಷದ ಬಜೆಟ್‍ನಲ್ಲಿ ಈ ಭಾಗದಲ್ಲಿ ಶಾಲೆ, ಪಿಯು ಹಾಗೂ ಪದವಿ ಕಾಲೇಜುಗಳ ಸ್ಥಾಪನೆಗೆ ಹೆಚ್ಚಿನ ಅನುದಾನನವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.


ಲೋಕೋಪಯೋಗಿ ಇಲಾಖೆ ವತಿಯಿಂದ 2013ರಿಂದ 2018ರ ಮಾರ್ಚ್‍ವರೆಗೆ ರಸ್ತೆ ಕಾಮಗಾರಿಗಳಿಗೆ ಉತ್ತರ ಮತ್ತು ಈಶಾನ್ಯ ವಲಯಗಳಿಗೆ ಒಟ್ಟು 14369 ಕೋಟಿ ರೂ. ವೆಚ್ಚ ಮಾಡಲಾಗಿದೆ. ಪ್ರಸ್ತುತ ಸಾಲಿನಲ್ಲಿ ನವೆಂಬರ್ ಅಂತ್ಯದವರೆಗೆ 3039ಕೋಟಿ ರೂ. ವೆಚ್ಚ ಮಾಡಲಾಗಿದೆ. ಪ್ರಸ್ತುತ ಸಾಲಿನಲ್ಲಿ ಬಜೆಟ್‍ನಲ್ಲಿ 1375ಕೋಟಿ ರೂ. ಒದಗಿಸಲಾಗಿದ್ದರೂ, ಈಗಾಗಲೇ 3173 ಕೋಟಿ ರೂ.ಗಳಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಅವರು ಹೇಳಿದರು.


ಉಪಮುಖ್ಯಮಂತ್ರಿ ಡಾ.ಪರಮೇಶ್ವರ್, ಹೆಚ್‍ಕೆಡಿಬಿ ಅಧ್ಯಕ್ಷ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ್, ಸಚಿವರಾದ ಪ್ರಿಯಾಂಕ ಖರ್ಗೆ, ಹೆಚ್.ಡಿ.ರೇವಣ್ಣ, ಡಿ.ಕೆ.ಶಿವಕುಮಾರ್, ಬಂಡೆಪ್ಪ ಖಾಶೆಂಪುರ, ಆರ್.ಶಂಕರ್, ವೆಂಕಟರಾವ್ ನಾಡಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್, ಹೈದ್ರಾಬಾದ್ ಕರ್ನಾಟಕ ಭಾಗದ ಎಲ್ಲಾ ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು.