ಧಾರವಾಡ ಕಟ್ಟಡ ಕುಸಿದ ಸ್ಥಳಕ್ಕೆ ಮುಖ್ಯಮಂತ್ರಿ ಭೇಟಿ
ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವ ಬಗ್ಗೆ ಮುಖ್ಯಕಾರ್ಯದರ್ಶಿಗಳು ನಿಯಮಾನುಸಾರ ತೀರ್ಮಾನ ಕೈಗೊಳ್ಳಲಿದ್ದಾರೆ- ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
ಧಾರವಾಡ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಸಂಜೆ ಧಾರವಾಡಕ್ಕೆ ಭೇಟಿ ನೀಡಿ ಕಟ್ಟಡ ಕುಸಿದ ಸ್ಥಳ ಪರಿಶೀಲನೆ ನಡೆಸಿದರು.
ಧಾರವಾಡದಲ್ಲಿ ಕಟ್ಟಡ ಕುಸಿದ ಸ್ಥಳ ಪರಿಶೀಲನೆ ನಂತರ ಪರಿಹಾರ ಕಾರ್ಯಾಚರಣೆಯಲ್ಲಿ ಭಾಗಿಯಾದ ತಂಡಗಳೊಂದಿಗೆ ಮಾತುಕತೆ ನಡೆಸಿ ವಿವರಗಳನ್ನು ಪಡೆದುಕೊಂಡರು. ಬಳಿಕ ಅವರು ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿಯಾಗಿ ಸಾಂತ್ವನ ಹೇಳಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಜಿಲ್ಲಾಧಿಕಾರಿಗಳು ಈಗಾಗಲೇ ಪ್ರಕರಣದಲ್ಲಿ ಮೃತಪಟ್ಟವರಿಗೆ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವ ಬಗ್ಗೆ ಮುಖ್ಯಕಾರ್ಯದರ್ಶಿಗಳು ನಿಯಮಾನುಸಾರ ತೀರ್ಮಾನ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ಯಾವಭಾಗದಲ್ಲಿಯೂ ಮುಂದೆ ಇಂತಹ ಘಟನೆ ಸಂಭವಿಸದಂತೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಚುನಾವಣೆ ನಂತರ ಉನ್ನತ ಮಟ್ಟದ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ತಿಳಿಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರನ್ನು ರಕ್ಷಿಸುವ ಪ್ರಮೇಯವೇ ಇಲ್ಲ. ಈಗಾಗಲೇ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ. ಬೇರೆ ರೀತಿಯಲ್ಲಿ ತನಿಖೆ ನಡೆಸುವಂತೆ ಒತ್ತಡವಿದ್ದು ಸೂಕ್ತ ಸಮಯದಲ್ಲಿ ಅಗತ್ಯ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.
ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್, ಅಗ್ನಿಶಾಮಕ ದಳದ ಡಿಜಿಪಿ ಎಂ.ಎನ್. ರೆಡ್ಡಿ , ಡಿಐಜಿ ರವಿಕಾಂತೇಗೌಡ, ಪೊಲೀಸ್ ಆಯುಕ್ತ ನಾಗರಾಜ್, ಶಾಸಕರು, ಇತರ ಜನಪ್ರತಿನಿಧಿಗಳು ಹಾಜರಿದ್ದರು.