ಹಾಲಕೆರೆ ಶ್ರೀಗಳು ಲಿಂಗೈಕ್ಯ: ಸಿಎಂ ಬೊಮ್ಮಾಯಿ ಸೇರಿದಂತೆ ಗಣ್ಯರ ಸಂತಾಪ

ಡಾ.ಅಭಿನವ ಅನ್ನದಾನ ಸ್ವಾಮೀಜಿಗಳು ಕಳೆದ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

Written by - Zee Kannada News Desk | Last Updated : Nov 22, 2021, 12:44 PM IST
  • ಹಾಲಕೆರೆಯ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಡಾ.ಸಂಗನಬಸವ ಮಹಾಸ್ವಾಮಿಗಳ ನಿಧನ
  • ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ
  • ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ವಾಮೀಜಿ
ಹಾಲಕೆರೆ ಶ್ರೀಗಳು ಲಿಂಗೈಕ್ಯ: ಸಿಎಂ ಬೊಮ್ಮಾಯಿ ಸೇರಿದಂತೆ ಗಣ್ಯರ ಸಂತಾಪ title=
ಡಾ.ಸಂಗನಬಸವ ಸ್ವಾಮೀಜಿಗಳು ಲಿಂಗೈಕ್ಯ

ಬೆಂಗಳೂರು: ಗದಗ ಜಿಲ್ಲೆ ಗಜೇಂದ್ರಗಡದ ಹಾಲಕೆರೆಯ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಅಭಿನವ ಅನ್ನದಾನೇಶ್ವರ ಡಾ.ಸಂಗನಬಸವ ಮಹಾಸ್ವಾಮಿ(Dr Abhinav Sanganabasava Mahaswamiji )ಗಳ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಡಾ.ಅಭಿನವ ಅನ್ನದಾನ ಸ್ವಾಮೀಜಿಗಳು ಕಳೆದ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗ್ಗೆ ಲಿಂಗೈಕ್ಯ(Sanganabasava Mahaswamiji Died)ರಾಗಿದ್ದಾರೆ. ಹಲವು ದಶಕಗಳ ಕಾಲ ಕನ್ನಡ ನಾಡು-ನುಡಿ, ಲಿಂಗಾಯತ ಧರ್ಮಕ್ಕೆ ಸ್ವಾಮೀಜಿಗಳು ಅಪಾರ ಸೇವೆ ಸಲ್ಲಿಸಿದ್ದರು. ಅವರ ನಿಧನದಿಂದ ಅಪಾರ ಭಕ್ತ ಸಮೂಹ ಅನಾಥವಾದಂತಾಗಿದೆ.

ಇದನ್ನೂ ಓದಿ: ಎಪಿಎಂಸಿ ಮತ್ತು ಭೂ ಸುಧಾರಣಾ (ತಿದ್ದುಪಡಿ) ಕಾಯ್ದೆ ಹಿಂಪಡೆಯಲು ಸಿದ್ಧರಾಮಯ್ಯ ಆಗ್ರಹ 

ಸ್ವಾಮೀಜಿಯವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai) ಟ್ವೀಟ್ ಮಾಡಿದ್ದು, ‘ಗದಗ ಜಿಲ್ಲೆ ಗಜೇಂದ್ರಗಡದ ಹಾಲಕೆರೆಯ ಶ್ರೀ  ಅನ್ನದಾನೇಶ್ವರ ಸಂಸ್ಥಾನ ಮಠದ ಅಭಿನವ ಅನ್ನದಾನೇಶ್ವರ ಡಾ.ಸಂಗನಬಸವ ಮಹಾಸ್ವಾಮಿಗಳು ಲಿಂಗೈಕ್ಯರಾದ ವಿಷಯ ತಿಳಿದು ತುಂಬಾ ದುಃಖಿತನಾಗಿದ್ದೇನೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಅವರ ಭಕ್ತ ಸಮೂಹಕ್ಕೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಇತ್ತೀಚೆಗಷ್ಟೇ ಹಾಲಕೆರೆ ಮಠದ ಸಮಾರಂಭದಲ್ಲಿ ಭಾಗವಹಿಸಿ, ಶ್ರೀಗಳ ಆಶೀರ್ವಾದ ಪಡೆದುಕೊಂಡಿದ್ದೆ. ಆದರೆ ಇಷ್ಟು ಬೇಗ ಅವರನ್ನು ಕಳೆದುಕೊಳ್ಳುತ್ತೇವೆ ಎಂಬ ಕಲ್ಪನೆ ಇರಲಿಲ್ಲ. ಅವರ ಅಗಲಿಕೆಯು ನನಗೆ ವೈಯಕ್ತಿಕವಾಗಿ ಬಹಳ ದುಃಖ ತರಿಸಿದೆ’ ಎಂದು ಹೇಳಿದ್ದಾರೆ.

‘ಗದಗ ಜಿಲ್ಲೆಯ ಹಾಲಕೇರಿ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಡಾ. ಸಂಗನಬಸವ ಸ್ವಾಮೀಜಿಗಳು ಲಿಂಗೈಕ್ಯ(Abhinav Sanganabasava Mahaswamiji Died)ರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ಆಸ್ಪತ್ರೆಗೆ ತೆರಳಿ ಪೂಜ್ಯರ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಲಾಯಿತು. ಅವರ ನಿಧನದಿಂದ ನಾಡು ಒಬ್ಬ ಮಾರ್ಗದರ್ಶಕ ಗುರುಗಳನ್ನು ಕಳೆದುಕೊಂಡಂತಾಗಿದೆ. ಆಧ್ಯಾತ್ಮಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅವರ ಕೊಡುಗೆಗಳು ಅಪಾರ. ಪರಮಪೂಜ್ಯರ ಶ್ರೀಚರಣಗಳಿಗೆ ಅಂತಿಮ ನಮನಗಳನ್ನು ಸಲ್ಲಿಸುತ್ತಾ, ಅವರ ಆತ್ಮಕ್ಕೆ ಸದ್ಗತಿಯನ್ನು, ಭಕ್ತರಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ’ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:  JOB: ಕೋರ್ಟ್ ಪ್ರೋಸೆಸ್ ಸರ್ವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಪಕ್ಷ ನಾಯಕ ಸಿದ್ದರಾಮಯ್ಯ(Sddaramaiah) ಟ್ವೀಟ್ ಮಾಡಿದ್ದು, ‘ಹಾಲಕೆರೆ ಮಠ, ಬಾದಾಮಿ ಶಿವಯೋಗ ಮಂದಿರದ ಪೀಠಾಧ್ಯಕ್ಷರಾದ ಜಗದ್ಗುರು ಡಾ. ಅಭಿನವ ಸಂಗನಬಸವ ಮಹಾಸ್ವಾಮಿಗಳು ಲಿಂಗೈಕ್ಯರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಶ್ರೀಗಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಮಠದ ಅನುಯಾಯಿಗಳಿಗೆ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ.

‘ಹಾಲಕೆರೆಯ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಅಭಿನವ ಅನ್ನದಾನೇಶ್ವರ ಡಾ.ಸಂಗನಬಸವ ಮಹಾಸ್ವಾಮಿಗಳು ಲಿಂಗೈಕ್ಯರಾಗಿರುವ ವಿಷಯ ತಿಳಿದು ದುಃಖವಾಗಿದೆ. ಭೌತಿಕವಾಗಿ ಶ್ರೀಗಳು ಮರೆಯಾದರೂ ಅವರ ವಿಚಾರಧಾರೆಗಳು ಮಾರ್ಗದರ್ಶನ ನೀಡಲಿವೆ. ಶ್ರೀಗಳ ಭಕ್ತವೃಂದಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News