ಟಿಪ್ಪು ಜಯಂತಿ ಆಚರಣೆ ರದ್ದುಗೊಳಿಸಿ ಸಿಎಂ ಬಿಎಸ್ವೈ ಆದೇಶ
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಪ್ರತಿ ವರ್ಷ ನವೆಂಬರ್ 10 ರಂದು ಟಿಪ್ಪು ಜಯಂತಿ ಆಚರಿಸುವ ಪದ್ಧತಿಯನ್ನು 2016ರಲ್ಲಿ ಆರಂಭಿಸಿದ್ದರು.
ಬೆಂಗಳೂರು: ಟಿಪ್ಪು ಜಯಂತಿಯನ್ನು ರದ್ದು ಗೊಳಿಸಿ ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಇನ್ನು ಮುಂದೆ ಟಿಪ್ಪು ಜಯಂತಿ ಆಚರಣೆ ಮಾಡದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ರಾಜ್ಯ ಸರ್ಕಾರದಿಂದ ಸೂಚನೆ ನೀಡಲಾಗಿದೆ.
ಮಾಜಿ ಸ್ಪೀಕರ್ ಬೋಪಯ್ಯನವರು ಟಿಪ್ಪು ಜಯಂತಿಯನ್ನು ರದ್ದುಗೊಳಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದೀಗ ಬೋಪಯ್ಯನವರ ಮನವಿಗೆ ಸ್ಪಂದಿಸಿದ ಸಿಎಂ ಬಿ.ಎಸ್ ಯಡಿಯೂರಪ್ಪನವರು ಟಿಪ್ಪು ಜಯಂತಿ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಪ್ರತಿ ವರ್ಷ ನವೆಂಬರ್ 10 ರಂದು ಟಿಪ್ಪು ಜಯಂತಿ ಆಚರಿಸುವ ಪದ್ಧತಿಯನ್ನು 2016ರಲ್ಲಿ ಆರಂಭಿಸಿದ್ದರು. ಇದು ಹಲವರ ಕೆಂಗಣ್ಣಿಗೆ ಗುರಿಯಾಗಿತ್ತು. ಸಿದ್ದರಾಮಯ್ಯ ನಂತರ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ. ಕುಮಾರಸ್ವಾಮಿ ಅವರ ಸರ್ಕಾರದಲ್ಲಿ ಬಿಜೆಪಿ ನಾಯಕರು ಟಿಪ್ಪು ಜಯಂತಿ ಆಚರಣೆಯನ್ನು ಕೈಬಿಡಬೇಕೆಂದು ಒತ್ತಡ ಹಾಕುತ್ತಿದ್ದರೂ, ಆಚರಣೆ ಮುಂದುವರೆದಿತ್ತು.
ಟಿಪ್ಪು ಜಯಂತಿ ಸಂದರ್ಭದಲ್ಲಿ ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿತ್ತು. ಕೋಮು ಸಂಘರ್ಷವನ್ನು ತಪ್ಪಿಸಲು ಸರ್ಕಾರ ಮುಂಜಾಗ್ರತೆ ಕ್ರಮ ಕೈಗೊಳ್ಳುತ್ತಿತ್ತು.
ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿಯನ್ನು ರದ್ದುಗೊಳಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಬಿಜೆಪಿ, ಇದೀಗ ನೀಡಿದ್ದ ಭರವಸೆಯಂತೆ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿದೆ.