ವಿಷಪೂರಿತ ಪ್ರಸಾದ ದುರಂತ: ಮೃತರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಣೆ
ವಿಷಪೂರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಕುಟುಂಬಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು 5 ಲಕ್ಷ ರೂ.ಗಳ ಪರಿಹಾರ ಘೋಷಣೆ ಮಾಡಿದ್ದಾರೆ.
ಚಾಮರಾಜನಗರ: ಮಾರಮ್ಮನ ದೇಗುಲದ ವಿಷಪೂರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಕುಟುಂಬಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು 5 ಲಕ್ಷ ರೂ.ಗಳ ಪರಿಹಾರ ಘೋಷಣೆ ಮಾಡಿದ್ದಾರೆ.
ಶುಕ್ರವಾರ ರಾತ್ರಿ ಮೈಸೂರಿನ ಕೆಆರ್ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಸ್ವಸ್ಥರಾದವರು ಹಾಗೂ ಅವರ ಕುಟುಂಬದವರಿಗೆ ಧೈರ್ಯ ತುಂಬಿದರು. ಅಲ್ಲದೆ, ಅಸ್ವಸ್ಥರಿಗೆ ನೀಡುತ್ತಿರುವ ಚಿಕಿತ್ಸೆಯ ಬಗ್ಗೆ ಆಸ್ಪತ್ರೆಯ ಸಿಬ್ಬಂದಿಗಳೊಂದಿಗೆ ಚರ್ಚಿಸಿದರು. ಇದೇ ವೇಳೆ ಮೃತರ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಅಲ್ಲದೆ, ಅಸ್ವಸ್ಥಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವಂತೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾಧಿಕಾರಿ ಗಳಿಗೆ ಸಿಎಂ ಸೂಚನೆ ನೀಡಿದ್ದಾರಲ್ಲದೆ, ಘಟನೆಯ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ ಸಿಎಂ, "ದೇವಾಲಯದಲ್ಲಿ ಇಂತಹ ಘಟನೆ ನಡೆದರೆ ಯಾರನ್ನು ನಂಬುವುದು. ಯಾರೇ ಇಂತಹ ಘಟನೆಗಳ ಹಿಂದೆ ಇದ್ದರೂ ಕಠಿಣ ಕ್ರಮ ಜರುಗಿಸುತ್ತೇವೆ. ಎಲ್ಲಾ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವವರಿಗೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಮರಣ ಹೊಂದಿರುವವರ ಅಂತ್ಯಕ್ರಿಯೆಗೆ ಸರ್ಕಾರದಿಂದ ವ್ಯವಸ್ಥೆ ಕಲ್ಪಿಸುತ್ತೇವೆ" ಎಂದು ಹೇಳಿದ್ದಾರೆ.