ಸಿದ್ಧಗಂಗಾ ಶ್ರೀಗೆ ಭಾರತರತ್ನ ಪ್ರಶಸ್ತಿ ವಿಚಾರ: ಪ್ರಧಾನಿ, ರಾಷ್ಟ್ರಪತಿ ಭೇಟಿಗೆ ಸಿಎಂ ನಿರ್ಧಾರ
ಹಲವು ಬಾರಿ ಭಾರತ ರತ್ನ ಪ್ರಶಸ್ತಿಗೆ ಮನವಿ ಮಾಡಿ ಕೇಂದ್ರ ಸರ್ಕಾರಕ್ಕೆ ಪತ್ರಗಳನ್ನು ಬರೆಯಲಾಗಿದೆ. ಈ ಬಗ್ಗೆ ಮರಳಿ ಪ್ರಸ್ತಾಪಿಸಲಾಗುವುದು ಎಂದು ಸಿಎಂ ಹೇಳಿದರು.
ಬೆಂಗಳೂರು: ನಡೆದಾಡುವ ದೇವರು ಎಂದೇ ಪ್ರಸಿದ್ಧರಾದ ಶ್ರೀ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ನಗರದ ಕಿದ್ವಾಯಿ ಆಸ್ಪತ್ರೆಯಲ್ಲಿ ಬೋನ್ ಮ್ಯಾರೋ ಟ್ರಾನ್ಸ್‍ಪ್ಲಾಂಟ್(ಅಸ್ಥಿಮಜ್ಜೆ) ಘಟಕದ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು. ಈ ಬಗ್ಗೆ ರಾಷ್ಟ್ರಪತಿ ಮತ್ತು ಪ್ರಧಾನಿಯವರನ್ನು ಖುದ್ದಾಗಿ ಭೇಟಿ ಮಾಡಿ ಮಾತನಾಡುವುದಾಗಿ ಸಿಎಂ ಹೇಳಿದರು.
ಈಗಾಗಲೇ ಹಲವು ಬಾರಿ ಭಾರತ ರತ್ನ ಪ್ರಶಸ್ತಿಗೆ ಮನವಿ ಮಾಡಿ ಕೇಂದ್ರ ಸರ್ಕಾರಕ್ಕೆ ಪತ್ರಗಳನ್ನು ಬರೆಯಲಾಗಿದೆ. ಈ ಬಗ್ಗೆ ಮರಳಿ ಪ್ರಸ್ತಾಪಿಸಲಾಗುವುದು ಎಂದು ಸಿಎಂ ಹೇಳಿದರು.
ಮುಂದುವರೆದು ಮಾತನಾಡಿದ ಅವರು, ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಹೇಳಿದ್ದಾರೆ. ನಾಡಿನ ಜನರ ಆಶಯದಂತೆ ಅವರ ಆರೋಗ್ಯದಲ್ಲಿ ಚೇತರಿಕೆಯಾಗಲಿ ಎಂದು ಹಾರೈಸೋಣ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.