ಡಾ. ಶಿವಕುಮಾರ ಸ್ವಾಮೀಜಿಗಳಿಗೆ `ಭಾರತ ರತ್ನ` ನೀಡಿ: ಪ್ರಧಾನಿ ಮೋದಿಗೆ ಸಿಎಂ ಹೆಚ್ಡಿಕೆ ಪತ್ರ
ಸಿದ್ಧಗಂಗಾ ಮಠದ ಶ್ರೀಗಳಾದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಗಳಿಗೆ `ಭಾರತ ರತ್ನ` ಘೋಷಿಸುವಂತೆ ಕೋರಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಸಿದ್ಧಗಂಗಾ ಮಠದ ಶ್ರೀಗಳಾದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಮರಣೋತ್ತರ 'ಭಾರತ ರತ್ನ' ನೀಡುವಂತೆ ಮನವಿ ಮಾಡಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ಮುಖ್ಯಮಂತ್ರಿಗಳ ಕಚೇರಿ ಈ ಪತ್ರವನ್ನು ಬಿಡುಗಡೆ ಮಾಡಿದೆ.
ತುಮಕೂರಿನ ಸಿದ್ದಗಂಗಾ ಮಠಕ್ಕೆ ಸುಮಾರು 600 ವರ್ಷಗಳ ಪರಂಪರೆ ಇದೆ. 1941ರಲ್ಲಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರು ಮಠದ ಜವಾಬ್ದಾರಿಯನ್ನು ಸ್ವೀಕಾರ ಮಾಡಿದ್ದರು. ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಶ್ರೀ ಸಿದ್ದಗಂಗಾ ಶ್ರೀಗಳಿಗೆ ಪ್ರತಿಷ್ಠಿತ 'ಭಾರತ ರತ್ನ' ಪುರಸ್ಕಾರ ನೀಡಬೇಕೆಂಬ ಕೂಗು ಹಲವು ವರ್ಷಗಳಿಂದ ಕೇಳಿ ಬರುತ್ತಿದೆ. ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳ ಹೆಸರನ್ನು ಭಾರತ ರತ್ನ ಪ್ರಶಸ್ತಿಗೆ ಪರಿಗಣಿಸಬೇಕು ಎಂದು ಸಿಎಂ ಕುಮಾರಸ್ವಾಮಿ ತಮ್ಮ ಪತ್ರದ ಮೂಲಕ ಮನವಿ ಮಾಡಿದ್ದಾರೆ.