ಬಂಡೀಪುರದಲ್ಲಿ ಕಾಡ್ಗಿಚ್ಚು; ಬೆಂಕಿ ನಂದಿಸಲು ಹೆಲಿಕಾಪ್ಟರ್ ಬಳಸುವಂತೆ ಸಿಎಂ ಸೂಚನೆ
ಬಂಡೀಪುರ ಅರಣ್ಯ ಬೆಂಕಿ ನಂದಿಸಲು ವಾಯುಪಡೆಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು: ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಕಾಣಿಸಿಕೊಂಡಿರುವ ಬೆಂಕಿ ನಂದಿಸಲು ಹೆಲಿಕಾಪ್ಟರ್ ಬಳಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ.
ಬಂಡೀಪುರ ಮೀಸಲು ಅರಣ್ಯ ಪ್ರದೇಶದಲ್ಲಿನ ಅಗ್ನಿ ನಂದಿಸಲು ವಾಯುಪಡೆಯ ಅಧಿಕಾರಿಗಳೊಂದಿಗೆ ಸಿಎಂ ಮಾತುಕತೆ ನಡೆಸಿದ್ದು, ಈ ನಿಟ್ಟಿನಲ್ಲಿ ಹೆಲಿಕಾಪ್ಟರ್ ಬಳಸುವಂತೆ ಬಂಡೀಪುರ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ರೆಕ್ಕಿ ತಂತ್ರಜ್ಞಾನವನ್ನು ಬಳಸಿ ಹೆಲಿಕಾಪ್ಟರ್ ಗಳನ್ನು ಕಳುಹಿಸಿ ಎಚ್ ಡಿ ಕೋಟೆ ಸಮೀಪವಿರುವ ನುಗು ಜಲಾಶಯದಿಂದ ನೀರನ್ನು ಲಿಫ್ಟ್ ಮಾಡಿ ಬೆಂಕಿ ಹೊತ್ತಿಕೊಂಡಿರುವ ಅರಣ್ಯ ಪ್ರದೇಶಗಳಲ್ಲಿ ನೀರನ್ನು ಸಿಂಪಡಿಸುವ ಕೆಲಸವನ್ನು ಮಾಡುವ ತೀರ್ಮಾನಕ್ಕೆ ಬರಲಾಗಿದೆ.
ಇತಿಹಾಸದಲ್ಲಿ ಇದೇ ಮೊದಲ ಬಾರಿ ಬಂಡೀಪುರ ಅರಣ್ಯದಲ್ಲಿ ಇಷ್ಟು ಪ್ರಮಾಣದ ಬೆಂಕಿ ಆವರಿಸಿದೆ. ಬಂಡೀಪುರದ ಹುಲಿ ಸಂರಕ್ಷಿತ ಅಭಯಾರಣ್ಯದಲ್ಲಿ ಸಂಭವಿಸಿದ ಭಾರೀ ಕಾಡ್ಗಿಚ್ಚಿಗೆ ಸಾವಿರಾರು ಹೆಕ್ಟೇರ್ ಅರಣ್ಯ ನಾಶವಾಗಿದ್ದು, ನೂರಾರು ಕಾಡು ಪ್ರಾಣಿಗಳು ಸುಟ್ಟುಕರಲಾಗಿದ್ದವು. ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.
ಈ ಅಗ್ನಿ ನರ್ತನ ರಾಜ್ಯದ ಜನತೆಯಲ್ಲಿ ಆತಂಕವುಂಟು ಮಾಡಿದ್ದು, ಸದ್ಯ ಬೆಂಕಿ ನಂದಿಸಲು ಸಿಬ್ಬಂದಿಗಳೊಂದಿಗೆ ಸಾರ್ವಜನಿಕರೂ ಕೈ ಜೋಡಿಸಿದ್ದಾರೆ.