ಹುಬ್ಬಳ್ಳಿ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಾಲ ಮನ್ನಾ ಹೆಸರಿನಲ್ಲಿ ರೈತರಿಗೆ ಟೋಪಿ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. 


COMMERCIAL BREAK
SCROLL TO CONTINUE READING

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರೆಗೂ ಮುಖ್ಯಮಂತ್ರಿಗಳು ಸಾಲ ಮನ್ನಾ ಹೆಸರಿನಲ್ಲಿ ಏನೇನು ಮಾಡಿದ್ದಾರೆ ಎಂಬುದನ್ನು ಬೆಳಗಾವಿ ಅಧಿವೇಶನದಲ್ಲಿ ಎತ್ತಿ ತೋರಿಸಿದ್ದೇವೆ. ಹಲವು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಹೇಳಿದರು.


ಇದುವರೆಗೂ ರೈತಪರ ಸರ್ಕಾರ ಎಂದು ಹೇಳಿಕೊಳ್ಳುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರು, ಕಬ್ಬು ಬೆಳೆಗಾರರು ಮತ್ತು ಉತ್ತರ ಕರ್ನಾಟಕದ‌ ಜ್ವಲಂತ ಸಮಸ್ಯೆಗಳ ಬಗ್ಗೆ ಯಾವುದೇ ಪರಿಹಾರ ಕಾರ್ಯ ಕೈಗೊಂಡಿಲ್ಲ. ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಸಾಕಷ್ಟು ಚರ್ಚೆ ನಡೆಸಿದ್ದೇವೆ. ಈ ಬಗ್ಗೆ ನಾನೂ ಸಹ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸ ಮಾಡಿ ಪರಿಸ್ಥಿತಿ ಅರಿಯುತ್ತೇನೆ. ಸರ್ಕಾರ ಕೊಟ್ಟ ಅಂಕಿ ಅಂಶ ತಪ್ಪು ಎಂದು ಸಾಬೀತು ಮಾಡುತ್ತೇನೆ ಎಂದು ಯಡಿಯೂರಪ್ಪ ವಾಗ್ದಾಳಿ ನಡೆಸಿದರು.