ಪ್ರವಾಸೋದ್ಯಮ ಅಭಿವೃದ್ಧಿಗೆ ಕ್ರಮ ಕೈಗೊಳ್ಳಿ; ಅಧಿಕಾರಿಗಳಿಗೆ ಸಿಎಂ ಸೂಚನೆ
ಹೋಟೆಲ್ ಮತ್ತು ಉಪಹಾರ ಮಂದಿರಗಳ ಸಂಘದ ಪದಾಧಿಕಾರಿಗಳೊಂದಿಗೆ ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಭೆ ನಡೆಸಿದರು.
ಬೆಂಗಳೂರು: ಕರ್ನಾಟಕದಲ್ಲಿ ಹೋಟೆಲ್ ಉದ್ಯಮವಷ್ಟೇ ಅಲ್ಲದೆ ಪ್ರವಾಸೋದ್ಯಮಕ್ಕೂ ವಿಫುಲ ಅವಕಾಶವಿದ್ದು, ಪ್ರವಾಸೋದ್ಯಮದ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.
ಹೋಟೆಲ್ ಮತ್ತು ಉಪಹಾರ ಮಂದಿರಗಳ ಸಂಘದ ಪದಾಧಿಕಾರಿಗಳೊಂದಿಗೆ ಗುರುವಾರ ವಿಧಾನಸೌಧದಲ್ಲಿ ಸಭೆ ನಡೆಸಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ಹೋಟೆಲ್ ಉದ್ಯಮವಲ್ಲದೇ ಪ್ರವಾಸೋಧ್ಯಮಕ್ಕೂ ವಿಫುಲ ಅವಕಾಶಗಳಿವೆ ಎಂದರಲ್ಲದೆ, ಹೋಟೆಲ್ ಉದ್ಯಮದೊಂದಿಗೆ ಪ್ರವಾಸೋದ್ಯಮದ ಅಭಿವೃದ್ಧಿಗೂ ಆದ್ಯತೆ ನೀಡಲಾಗುವುದು ಎಂದರು.
ಸಾಂಸ್ಕೃತಿಕ ರಾಜಧಾನಿ ಎನಿಸಿರುವ ಮೈಸೂರು, ವಾಣಿಜ್ಯ ಕೇಂದ್ರವೆನಿಸಿದ ಹುಬ್ಬಳ್ಳಿ, ಕರಾವಳಿಯ ಮಂಗಳೂರು-ಉಡುಪಿ, ಮಲೆನಾಡಿನ ಶಿವಮೊಗ್ಗ, ಘಟ್ಟ ಪ್ರದೇಶವಾದ ಕೊಡಗು ಸೇರಿದಂತೆ, ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಗುಲ್ಬರ್ಗಾ ಮತ್ತಿತರ ಜಿಲ್ಲೆಗಳಲ್ಲೂ ಅನೇಕ ಪ್ರವಾಸಿ ಐತಿಹಾಸಿಕ ಮತ್ತು ಧಾರ್ಮಿಕ ಪ್ರೇಕ್ಷಣೀಯ ಸ್ಥಳಗಳಿವೆ. ಇವುಗಳ ಅಭಿವೃದ್ದಿಯನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.
ಶಿವಮೊಗ್ಗವನ್ನು ಕೇಂದ್ರವಾಗಿಟ್ಟುಕೊಂಡು ಸುತ್ತಲಿನ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳ ಪ್ರವಾಸಿ ತಾಣಗಳಲ್ಲಿ ಉತ್ತಮ ವ್ಯವಸ್ಥೆ, ಪ್ರವಾಸಿ ಗೈಡ್ ಗಳ ನೇಮಕ ಮುಂತಾದ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಒತ್ತು ನೀಡುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು.