ಮೇಕೆದಾಟು ಸೇರಿದಂತೆ ವಿವಿಧ ನೀರಾವರಿ ಯೋಜನೆ ಬಗ್ಗೆ ಪ್ರಧಾನಿ ಜೊತೆ ಸಿಎಂ ಚರ್ಚೆ

ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳು ಹಾಗೂ ಈ ಮಾರ್ಗದಲ್ಲಿರುವ ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆಗೆ ಬಹುಕಾಲದಿಂದ ನೆನೆಗುದಿಗೆ ಬಿದ್ದಿರುವ ಕಳಸಾ ಬಂಡೂರಿ ನಾಲಾ ಯೋಜನೆ ಮತ್ತು ಇತರ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕಾಗಿದೆ. 

Last Updated : Dec 28, 2018, 11:04 AM IST
ಮೇಕೆದಾಟು ಸೇರಿದಂತೆ ವಿವಿಧ ನೀರಾವರಿ ಯೋಜನೆ ಬಗ್ಗೆ ಪ್ರಧಾನಿ ಜೊತೆ ಸಿಎಂ ಚರ್ಚೆ title=

ನವದೆಹಲಿ: ನವದೆಹಲಿಯಲ್ಲಿ ಗುರುವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಮೇಕೆದಾಟು ಸೇರಿದಂತೆ ವಿವಿಧ ನೀರಾವರಿ ಯೋಜನೆ ಕುರಿತು ಚರ್ಚಿಸಿದರು.

ಕಾವೇರಿ ಜಲ ವಿವಾದ :
ಕಾವೇರಿ ಜಲ ವಿವಾದ ನ್ಯಾಯಾಧಿಕರಣದ ಆದೇಶ ಹಾಗೂ ನಂತರ ಸುಪ್ರೀಂ ಕೋರ್ಟಿನಲ್ಲಿ ಮಾರ್ಪಡಿಸಿದ ಆದೇಶಗಳ ಅನ್ವಯ ತಮಿಳುನಾಡಿಗೆ ಪ್ರತಿ ತಿಂಗಳು ನೀರು ಹರಿಸುವುದನ್ನು ಕ್ರಮಬದ್ಧವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಮೇಕೆದಾಟು ಯೋಜನೆಯು ನೆರವಾಗಲಿದೆ. ಈ ಯೋಜನೆಯು ಸುಮಾರು 67 ಟಿಎಂಸಿ ಸಾಮರ್ಥ್ಯ ಹೊಂದಿದ್ದು, ಸುಪ್ರೀಂ ಕೋರ್ಟ್ ಬೆಂಗಳೂರಿಗೆ ಹೆಚ್ಚುವರಿಯಾಗಿ ಹಂಚಿಕೆ ಮಾಡಿರುವ 4..75 ಟಿಎಂಸಿ ನೀರನ್ನು ಬಳಸಿಕೊಳ್ಳಲು ಹಾಗೂ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ಉದ್ದೇಶಿಸಲಾಗಿದೆ. ಇದಕ್ಕೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರಧಾನಮಂತ್ರಿಯವರು ಮಧ್ಯಪ್ರವೇಶಿಸುವಂತೆ ಸಿಎಂ ಮನವಿ ಮಾಡಿದರು.

ಕೃಷ್ಣ ಮೇಲ್ದಂಡೆ ಯೋಜನೆ : 
ಕೃಷ್ಣಾ ನ್ಯಾಯಾಧಿಕರಣ-2ರ ಅಡಿ ಕರ್ನಾಟಕಕ್ಕೆ ನೀರಾವರಿ ಉದ್ದೇಶಕ್ಕೆ 166 ಟಿಎಂಸಿ ನೀರು ಹಂಚಿಕೆಯಾಗಿದ್ದು, ಈ ನೀರಿನ ಬಳಕೆಗಾಗಿ ಕೃಷ್ಣ ಮೇಲ್ದಂಡೆ ಯೋಜನೆ- ಹಂತ 3 ಮತ್ತಿತರ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸರ್ಕಾರ ಈಗಾಗಲೇ ಈ ಯೋಜನೆಗಳಿಗೆ ಸಾಕಷ್ಟು ಹಣ ಹೂಡಿಕೆ ಮಾಡಿದ್ದು, ನ್ಯಾಯಾಧಿಕರಣದ ತೀರ್ಪು ನೀಡಿ 5 ವರ್ಷ ಕಳೆದರೂ ಇನ್ನೂ ಗೆಜೆಟ್ ಅಧಿಸೂಚನೆ ಹೊರಡಿಸಿಲ್ಲ. ಇದರಿಂದ ರಾಜ್ಯಕ್ಕೆ ಹಂಚಿಕೆಯಾದ ನೀರಿನ ಪಾಲನ್ನು ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಈ ಅಧಿಸೂಚನೆಯನ್ನು ಶೀಘ್ರವೇ ಹೊರಡಿಸುವಂತೆ ಕೇಳಿಕೊಂಡರು.

ಕೃಷ್ಣಾ ಮೇಲ್ದಂಡೆ ಯೋಜನೆ- ಮೂರನೇ ಹಂತವನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವಂತೆ ಮಾನ್ಯ ಪ್ರಧಾನಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಈ ಯೋಜನೆಯಿಂದ ಉತ್ತರ ಕರ್ನಾಟಕದ ವಿಜಯಪುರ, ರಾಯಚೂರು, ಕಲಬುರಗಿ, ಯಾದಗಿರಿ,, ಕೊಪ್ಪಳ ಹಾಗೂ ಬಾಗಲಕೋಟೆ ಜಿಲ್ಲೆಗಳ 5.30 ಲಕ್ಷ ಹೆಕ್ಟೇರ್‍ಗೂ ಹೆಚ್ಚು ಪ್ರದೇಶದ ನೀರಾವರಿ ಸೌಲಭ್ಯ ಒದಗಿಸುವ ನಿರೀಕ್ಷೆ ಇದ್ದು, ಇದು ರಾಷ್ಟ್ರೀಯ ಯೋಜನೆಯ ಮಾನದಂಡಕ್ಕಿಂತ ಹೆಚ್ಚಾಗಿದೆ. ಈ ಯೋಜನೆಯ ಅಂದಾಜು ವೆಚ್ಚ 51,148 ಕೋಟಿ ರೂ. ಗಳಾಗಿದ್ದು, ರಾಜ್ಯದ ಸಂಪನ್ಮೂಲವೊಂದರಿಂದಲೇ ಭರಿಸಿದರೆ ಯೋಜನೆ ಅನುಷ್ಠಾನದಲ್ಲಿ ವಿಳಂಬವಾಗಬಹುದು. ಭೂಸ್ವಾಧೀನಕ್ಕೆ ಇಂದು ಅತಿ ಹೆಚ್ಚು ಅನುದಾನದ ಅಗತ್ಯವಿರುವುದರಿಂದ ಇದನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸುವಂತೆ ಜಲಸಂಪನ್ಮೂಲ ಸಚಿವಾಲಯಕ್ಕೆ ಸೂಚನೆ ನೀಡುವಂತೆ ಪ್ರಧಾನಿಗಳಿಗೆ ಮನವಿ ಮಾಡಲಾಯಿತು.

ಮಹದಾಯಿ ಜಲ ವಿವಾದ: 
ಮಹದಾಯಿ ಜಲ ವಿವಾದ ನ್ಯಾಯಾಧಿಕರಣವು ತನ್ನ ಅಂತಿಮ ಆದೇಶದಲ್ಲಿ ಕರ್ನಾಟಕಕ್ಕೆ 13.42 ಟಿಎಂಸಿ ನೀರು ಹಂಚಿಕೆ ಮಾಡಿದ್ದು, ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳು ಹಾಗೂ ಈ ಮಾರ್ಗದಲ್ಲಿರುವ ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆಗೆ ಬಹುಕಾಲದಿಂದ ನೆನೆಗುದಿಗೆ ಬಿದ್ದಿರುವ ಕಳಸಾ ಬಂಡೂರಿ ನಾಲಾ ಯೋಜನೆ ಮತ್ತು ಇತರ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ನೀರು ಹಂಚಿಕೆಯ ಗೆಜೆಟ್ ನೋಟಿಫಿಕೇಷನ್ ಶೀಘ್ರವೇ ಹೊರಡಿಸುವಂತೆ ಕೋರಿದರು.

Trending News