ಕೆರೆಗಳಿಗೆ ನೀರು ತುಂಬಿಸಲು ಸಿಎಂ ಕುಮಾರಸ್ವಾಮಿ ಸೂಚನೆ

ಮಂಡ್ಯ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ರೈತರು ಯಾವ ಬೆಳೆಯನ್ನು ಬೆಳೆದರೆ ಆರ್ಥಿಕವಾಗಿ ಸಬಲರಾಗುತ್ತಾರೆ ಎಂಬ ವಿಷಯದ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ಸಿದ್ಧಪಡಿಸಿ ಶೀಘ್ರ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿ.
ಮಂಡ್ಯ: ಕುಡಿಯುವ ನೀರನ್ನು ಒದಗಿಸಲು ಹಾಗೂ ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ತತಕ್ಷಣ ಕ್ರಮವಹಿಸಬೇಕು. ಈ ನಿಟ್ಟಿನಲ್ಲಿ ನಿರ್ಲಕ್ಷ್ಯ ತೋರಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಮಂಡ್ಯ ಜಿಲ್ಲಾಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರನ್ನು ಪೂರೈಸಲು 1700 ಕೋಟಿ ರೂ.ಗಳ ಸಮಗ್ರ ಕುಡಿಯುವ ನೀರಿನ ಯೋಜನೆಯನ್ನು ಜಿಲ್ಲಾಡಳಿತ ಸಿದ್ದಪಡಿಸುವಂತೆ ತಿಳಿಸಿದರು.
ಮಂಡ್ಯ ನಗರದ ಸಮಗ್ರ ಅಭಿವೃದ್ಧಿಯ ಅನುದಾನಕ್ಕೆ ಕ್ರಿಯಾ ಯೋಜನೆ ಜಿಲ್ಲಾಡಳಿತ ಸಿದ್ದಪಡಿಸಿದ್ದು, ಅನುಮೋದನೆಗೆ ಅಗತ್ಯ ಕ್ರಮವಹಿಸಲಾಗುವುದು ಎಂದು ಅವರು ತಿಳಿಸಿದರು.
ಮಂಡ್ಯ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ರೈತರು ಯಾವ ಬೆಳೆಯನ್ನು ಬೆಳೆದರೆ ಆರ್ಥಿಕವಾಗಿ ಸಬಲರಾಗುತ್ತಾರೆ ಎಂಬ ವಿಷಯದ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ಸಿದ್ಧಪಡಿಸಿ ಶೀಘ್ರ ಸರ್ಕಾರಕ್ಕೆ ವರದಿಯನ್ನು ಸಲ್ಲಿಸುವಂತೆ ಸಿಎಂ ತಿಳಿಸಿದರು.
ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿ ರೈತರು ಆರ್ಥಿಕವಾಗಿ ಅಭಿವೃದ್ಧಿಯಾಗಲು ಹೆಚ್ಚಿನ ಅವಕಾಶವಿದ್ದು, ಇದರ ಸದ್ಬಳಕೆಯನ್ನು ರೈತರು ಮಾಡಿಕೊಳ್ಳಬೇಕು ಈ ನಿಟ್ಟಿನಲ್ಲಿ ಈ ಯೋಜನೆಯ ಸಮರ್ಪಕ ಅನುಷ್ಟಾನಕ್ಕೆ ಹೆಚ್ಚು ಒತ್ತು ನೀಡುವಂತೆ ತಿಳಿಸಿದ ಮುಖ್ಯಮಂತ್ರಿಗಳು ನರೇಗಾ ಯೋಜನೆಯಡಿ ಅನೇಕ ಕೆಲಸಗಳನ್ನು ಕೈಗೆತ್ತಿಕೊಳ್ಳಲು ಅವಕಾಶಗಳಿದ್ದು ಜಿಲ್ಲಾ ಪಂಚಾಯತ್ ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯನ್ಮೂಖರಾಗಬೇಕು ಎಂದರು.