ಕೊಡಗು ನೆರೆ ಪರಿಹಾರಕ್ಕೆ NDRF ನಿಧಿಯಿಂದ ನೆರವು ನೀಡಿ: ಕೇಂದ್ರ ಗೃಹ ಸಚಿವರಿಗೆ ಸಿಎಂ ಕುಮಾರಸ್ವಾಮಿ ಮನವಿ
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಕೊಡಗು ಪ್ರವಾಹ ಪರಿಹಾರಕ್ಕೆ ನೆರವು ನೀಡಬೇಕೆಂದು ಮನವಿ ಮಾಡಿದರು.
ನವದೆಹಲಿ: ರಾಜ್ಯದಲ್ಲಿ ಪ್ರವಾಹದಿಂದ ತೀವ್ರ ಸಂಕಷ್ಟಕ್ಕೆ ತುತ್ತಾಗಿರುವ ಕೊಡಗು ಜಿಲ್ಲೆಯ ನೆರೆ ಪರಿಹಾರಕ್ಕೆ ಎನ್ಡಿಆರ್ಎಫ್ ನಿಧಿಯಿಂದ ಪರಿಹಾರ ನೀಡುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ನವದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ನಿವಾಸದಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಕೊಡಗಿನಲ್ಲಿ ನೆರೆಯಿಂದ ಅಪಾರ ನಷ್ಟ ಉಂಟಾಗಿದ್ದು, ಸುಮಾರು ಮೂರು ಸಾವಿರ ಕೋಟಿ ರೂ.ಗಳಷ್ಟು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಹಾಗಾಗಿ ಕೊಡಗಿನಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಮತ್ತು ಜನತೆಗೆ ಪುನರ್ವಸತಿ ಕಲ್ಪಿಸಲು ನೆರವು ನೀಡುವಂತೆ ಮನವಿ ಮಾಡಿದರು.
ಇದಕ್ಕೂ ಮುನ್ನ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ದೂರು ಸಿಎಂ ಕುಮಾರಸ್ವಾಮಿ ದೂರು ನೀಡಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು, ಅವರಿಗೆ ದೂರು ನೀಡಿರುವ ಬಗ್ಗೆ ಮಾಹಿತಿ ಇಲ್ಲ. ಈ ವಿಷಯ ತಮ್ಮ ಗಮನಕ್ಕೆ ಬಂದರೆ ಅಭಿಪ್ರಾಯ ಹಂಚಿಕೊಳ್ಳುವುದಾಗಿ ಹೇಳಿದ್ದಾರೆ.