ಶಾಸಕ ಪ್ರೀತಂ ಗೌಡ ಮನೆ ಮುಂದೆ ಪ್ರತಿಭಟನೆ ನಡೆಸದಂತೆ ಪಕ್ಷದ ಕಾರ್ಯಕರ್ತರಿಗೆ ಸಿಎಂ ಮನವಿ
ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿರುವ ವ್ಯಕ್ತಿಗಳು ಯಾರೇ ಆಗಿದ್ದರೂ ನಿರ್ದಾಕ್ಷಿಣ್ಯವಾಗಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕೆಂದು ಸಿಎಂ ಸೂಚಿಸಿದ್ದಾರೆ.
ಬೆಂಗಳೂರು: ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಮನೆ ಮುಂದೆ ಪ್ರತಿಭಟನೆ ನಡೆಸದಂತೆ ಜೆಡಿಎಸ್ ಕಾರ್ಯಕರ್ತರಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಹಾಸನದ ಸ್ಥಳೀಯ ಶಾಸಕರ ವಿರುದ್ಧ ಯಾವುದೇ ಪ್ರತಿಭಟನೆ ಮಾಡದಿರುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ತಮ್ಮ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.
ಇಂದು ಕೆಲವು ವ್ಯಕ್ತಿಗಳು ಶಾಸಕರ ಮನೆಯ ಸಮೀಪ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದ ತಕ್ಷಣ ಹಾಸನ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿರುವ ವ್ಯಕ್ತಿಗಳು ಯಾರೇ ಆಗಿದ್ದರೂ ನಿರ್ದಾಕ್ಷಿಣ್ಯವಾಗಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.
ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹಾಗೂ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಹಾಸನದ ಬಿಜೆಪಿ ಶಾಸಕ ಪ್ರೀತಂ ಗೌಡ ನಿವಾಸದ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿರುವ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಸಿರುವ ಸಿಎಂ ಪರಿಸ್ಥಿತಿಗೆ ಅನುಗುಣವಾಗಿ ರಾಜಕೀಯ ವಿದ್ಯಮಾನಗಳನ್ನು ನಿರ್ವಹಿಸುವ ಶಕ್ತಿ ನನಗಿದೆ. ಪಕ್ಷದ ಕಾರ್ಯಕರ್ತರು ಯಾವುದೇ ಪ್ರಚೋದನೆಗೆ ಒಳಗಾಗಬಾರದು ಹಾಗೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಬಾರದು ಎಂದು ತಮ್ಮ ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದಾರೆ.