ಬೆಂಗಳೂರು: ಸಾಲಮನ್ನಾ ಯೋಜನೆ ಜಾರಿಗೆ ಸರ್ಕಾರ ಎಲ್ಲ ಸಿದ್ಧತೆಗಳನ್ನೂ ಪೂರ್ಣಗೊಳಿಸಿದೆ. ಅನುಷ್ಠಾನದ ಸಂದರ್ಭದಲ್ಲಿ ಮಧ್ಯವರ್ತಿಗಳು ಈ ಹಣವನ್ನು ದುರುಪಯೋಗ ಪಡಿಸಿಕೊಳ್ಳದಂತೆ ಎಚ್ಚರ ವಹಿಸಿ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.


COMMERCIAL BREAK
SCROLL TO CONTINUE READING

ಇಂದು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಸಿಎಂ, ಸಾಲ ಮನ್ನಾ ಸರ್ಕಾರದ ಅತ್ಯಂತ ಪ್ರಮುಖ ಕಾರ್ಯಕ್ರಮವಾಗಿದೆ. ಈಗಾಗಲೇ ಜಿಲ್ಲೆಗಳಲ್ಲಿ ಬ್ಯಾಂಕುಗಳು ಸಾಲ ಪಡೆದ ರೈತರ ಮಾಹಿತಿ ಒದಗಿಸಿರುವ ಬಗ್ಗೆ ಇಂದಿನ ಸಭೆಯಲ್ಲಿ ವಿವರಗಳನ್ನು ಒದಗಿಸುವಂತೆಯೂ ಸೂಚಿಸಿದರು.


ಸಣ್ಣ ವ್ಯಾಪಾರಿಗಳಿಗೆ ರಕ್ಷಣೆ ನೀಡಿ:
ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಬಡವರ ಬಂಧು. ಬೀದಿ ಬದಿ ವ್ಯಾಪಾರಿಗಳು ಖಾಸಗಿಯವರಿಂದ ಸಾಲ ಪಡೆದು ತೀರಿಸಲಾಗದೆ ದೌರ್ಜನ್ಯಕ್ಕೆ ಒಳಗಾಗುವ ನಿದರ್ಶನಗಳನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು ಇಂತಹ ಸಣ್ಣ ವ್ಯಾಪಾರಿಗಳಿಗೆ ರಕ್ಷಣೆ ನೀಡುವಂತೆ ನಿರ್ದೇಶನ ನೀಡಿದರು.


ರಾಜ್ಯದಲ್ಲಿ  ತೀವ್ರ ಬರಪರಿಸ್ಥಿತಿ:
ರಾಜ್ಯದಲ್ಲಿ ಅತಿವೃಷ್ಟಿ ತಲೆದೋರಿದಾಗ, ವಿವಿಧ ಸಮಮಸ್ಯೆಗಳು, ಸವಾಲುಗಳು ಎದುರಾದಾಗ ಜಿಲ್ಲಾಡಳಿತಗಳು ಪ್ರಾಮಾಣಿಕವಾಗಿ ಸ್ಪಂದಿಸಿ, ಶ್ರಮಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದ ಮುಖ್ಯಮಂತ್ರಿಗಳು, ಪ್ರಸ್ತುತ ರಾಜ್ಯದಲ್ಲಿ  ತೀವ್ರ ಬರಪರಿಸ್ಥಿತಿ ತಲೆದೋರಿದ್ದು, ಮುಂದಿನ 3-4 ತಿಂಗಳು ಪರಿಸ್ಥಿತಿ ಹದಗೆಡುವ ಸಾಧ್ಯತೆ ಇದೆ. ಈ ಸವಾಲನ್ನು ಜಿಲ್ಲಾಡಳಿತಗಳು ಸಮರ್ಥವಾಗಿ ಎದುರಿಸಬೇಕು ಎಂದು ಹೇಳಿದರು.


ಬರಪರಿಹಾರ ಕಾರ್ಯ:
ಬರ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾರ್ಯದರ್ಶಿಗಳ ಮಾರ್ಗದರ್ಶನದಲ್ಲಿ ಬರಪರಿಹಾರ ಕಾರ್ಯ ಚಟುವಟಿಕೆಗಳನ್ನು ರೂಪಿಸುವಂತೆ ತಿಳಿಸಿದರು. ಅಲ್ಲದೆ, ಅತಿವೃಷ್ಟಿ ಪರಿಹಾರಕ್ಕಾಗಿ ಕೇಂದ್ರದಿಂದ 546 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಈ ಅನುದಾನದ ಸದ್ಬಳಕೆಗೆ ಕ್ರಿಯಾ ಯೋಜನೆ ರೂಪಿಸಿಕೊಳ್ಳುವಂತೆಯೂ ಸೂಚಿಸಿದರು. 


ಬರ ಪರಿಹಾರ ಕಾರ್ಯಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿರುವ ಬಗ್ಗೆ ಗ್ರಾಮ ಪಂಚಾಯಿತಿ ಮಟ್ಟಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.


ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರ ಸಮಸ್ಯೆ:
ಸಾರ್ವಜನಿಕರಿಗೆ ಬಹಳಷ್ಟು ಸಮಸ್ಯೆಗಳಿರುವುದು ಕಂದಾಯ ಇಲಾಖೆಯಲ್ಲಿ. ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರ ಸಮಸ್ಯೆ ಬಗೆಹರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಒದಗಿಸುವಂತೆ ಸೂಚಿಸಿದರು.


ಆರ್ಥಿಕ ವರ್ಷದಲ್ಲಿ ಇನ್ನುಳಿದ 3 ತಿಂಗಳಲ್ಲಿ ಸರ್ಕಾರದ ಹಳೆಯ ಹಾಗೂ ಹೊಸ ಯೋಜನೆಗಳ ಅನುಷ್ಠಾನವನ್ನು ಯಶಸ್ವಿಗೊಳಿಸುವಂತೆ ಸೂಚಿಸಿದರು. ಅಲ್ಲದೆ ಪ್ರತಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸುವ ಅಧಿಕಾರವನ್ನು ನಿಮಗೆ ನೀಡಲಾಗಿದೆ.  ಇದನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು.


ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಕೃಷಿ ಸಚಿವ ಎನ್.ಎಚ್. ಶಿವಶಂಕರರೆಡ್ಡಿ, ತೋಟಗಾರಿಕಾ ಸಚಿವ ಎಂ.ಸಿ. ಮನಗೂಳಿ, ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ, ಆರೋಗ್ಯ ಸಚಿವ ಶಿವಾನಂದ ಪಾಟೀಲ್, ಕಾರ್ಮಿಕ ಸಚಿವ ವೆಂಕಟರಮಣಪ್ಪ, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ಅರಣ್ಯ ಸಚಿವ ಆರ್. ಶಂಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಮೊದಲಾದವರು ಹಾಜರಿದ್ದರು.