ಬೆಂಗಳೂರು: ರಾಜ್ಯದಲ್ಲಿ COVID 19 ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್.‌‌ ಯಡಿಯೂರಪ್ಪ (BS Yediyurappa) ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ  ಸಭೆ ನಡೆಸಿ COVID 19 ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳನ್ನು ಬಿಟ್ಟುಕೊಡುವಂತೆ ಮನವಿ ಮಾಡಿದರು. ಸರ್ಕಾರದ ಮನವಿಗೆ ಸ್ಪಂದಿಸಿದ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಕೋವಿಡ್-19 (COVID-19)  ವಿರುದ್ಧದ ಹೋರಾಟಕ್ಕೆ ನೆರವು ನೀಡುವುದಾಗಿ ತಿಳಿಸಿದರು.


COMMERCIAL BREAK
SCROLL TO CONTINUE READING

ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಬೆಂಗಳೂರಿನಲ್ಲಿ ಎರಡು ಸರ್ಕಾರಿ ಸಂಸ್ಥೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಪ್ರಸ್ತುತ ನಗರದ 11 ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ 2200 ಹಾಸಿಗೆಗಳನ್ನು ಅಧಿಸೂಚಿಸಲಾಗಿದೆ. ಆದರೆ ಪ್ರಸ್ತುತ ವರದಿಯಾಗುತ್ತಿರುವ ಪ್ರಕರಣಗಳನ್ನು ಗಮನಿಸಿದರೆ, 4,500 ಹಾಸಿಗೆಗಳನ್ನು ಖಾಸಗಿ ಕಾಲೇಜುಗಳಿಂದ ಸರ್ಕಾರ ನಿರೀಕ್ಷಿಸುತ್ತಿದೆ ಎಂದರು.


ಕರೋನಾ ಅಟ್ಟಹಾಸದ ನಡುವೆ ಬೆದರಿಕೆ ಒಡ್ಡಿದೆ ಮತ್ತೊಂದು ಹೊಸ ವೈರಸ್


ನಾಲ್ಕು ತಿಂಗಳಿಂದ ಹತ್ತು ವೈದ್ಯಕೀಯ ಕಾಲೇಜುಗಳು ಹೊರತು ಪಡಿಸಿ, ಇತರ ಎಲ್ಲಾ ಕಾಲೇಜುಗಳು ಪ್ರಯೋಗಾಲಯ ವ್ಯವಸ್ಥೆ ಮಾಡಿವೆ. ಸರ್ಕಾರಿ ಕಾಲೇಜುಗಳಲ್ಲಿ 2,000 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 4,500 ಸೇರಿದಂತೆ ಸುಮಾರು 6,500 ಹಾಸಿಗೆಗಳು ಬೆಂಗಳೂರಿನ ವೈದ್ಯಕೀಯ ಕಾಲೇಜುಗಳಲ್ಲಿಯೇ ಲಭ್ಯವಾಗುತ್ತಿವೆ. ಇದಕ್ಕೆ ಖಾಸಗಿ ವೈದ್ಯಕೀಯ ಕಾಲೇಜುಗಳು ಸಹಕರಿಸುವಂತೆ ಮನವಿ ಮಾಡಿದರು.


ಯಡಿಯೂರಪ್ಪ ಮಾತಿಗೆ ಸ್ಪಂದಿಸಿದ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು, ಸರ್ಕಾರದೊಂದಿಗೆ ಕೈಜೋಡಿಸಿ, ಕೋವಿಡ್ ಚಿಕಿತ್ಸೆಗೆ ಸಹಕರಿಸುವ ಭರವಸೆಯನ್ನು ನೀಡಿದರು. ಇದಕ್ಕೆ ಸಿದ್ಧತೆಗಳು ಮಾಡಿಕೊಳ್ಳಬೇಕಾಗಿರುವುದರಿಂದ ಹಂತ ಹಂತವಾಗಿ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

 ಕರೋನಾವೈರಸ್ (Coronavirus)  ಕೋವಿಡ್ ಚಿಕಿತ್ಸೆ ನೀಡುವ ಖಾಸಗಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಕೂಡ ವಿಮಾ ಸೌಲಭ್ಯ ಒದಗಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.


ಅನ್‌ಲಾಕ್ 2ವೇಳೆ ಯಾವ್ಯಾವುದಕ್ಕೆ ವಿನಾಯಿತಿ? ಯಾವುದಕ್ಕೆ ನಿರ್ಬಂಧ?


COVID 19 ರೋಗಿಗಳಿಗೆ ಹಾಸಿಗೆ ಹಂಚಿಕೆ ಕುರಿತಂತೆ ಕೇಂದ್ರೀಕೃತ ವ್ಯವಸ್ಥೆಯನ್ನು ಈಗಾಗಲೇ ಬಿಬಿಎಂಪಿ ಯಲ್ಲಿ ಮಾಡಲಾಗಿದ್ದು, ಎರಡು ಮೂರು ದಿನಗಳಲ್ಲಿ ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿದೆ. ಕೋವಿಡ್ ಚಿಕಿತ್ಸೆ ನೀಡುವ ಎಲ್ಲ ಆಸ್ಪತ್ರೆಗಳನ್ನು ಈ ವ್ಯವಸ್ಥೆಯ ವ್ಯಾಪ್ತಿಗೆ ತರಲಾಗುವುದು. ಖಾಸಗಿ ಆಸ್ಪತ್ರೆಗಳೊಂದಿಗೆ ಸಮನ್ವಯಕ್ಕೆ ಸಮಿತಿ ರಚನೆ ಮಾಡಲಾಗುವುದು. ಇದಲ್ಲದೆ ಟೆಲಿಮೆಡಿಸಿನ್ ಮೂಲಕ ಚಿಕಿತ್ಸೆ ನೀಡಲು ಸಹ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.


ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್. ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.