ಬಳ್ಳಾರಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. 


COMMERCIAL BREAK
SCROLL TO CONTINUE READING

ಬೆಂಗಳೂರಿನಿಂದ ಬಳ್ಳಾರಿಯ ತೋರಣಗಲ್ಲುವಿನ ಜಿಂದಾಲ್ ಏರ್ ಸ್ಟ್ರೀಪ್ ಗೆ ಆಗಮಿಸಿದ ಮುಖ್ಯಮಂತ್ರಿಗಳು ಮೊದಲು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಕುರ್ವಾಕುಲ, ಕುರ್ವಾಕುರ್ದಾ ಗ್ರಾಮದ ಬಳಿಯಲ್ಲಿ ಕೃಷ್ಣಾ ನದಿ ಪ್ರವಾಹ ವೀಕ್ಷಿಸಿದ ಸಿಎಂ ಬಳ್ಳಾರಿಯಿಂದ ಹೆಲಿಕಾಪ್ಟರ್ ಮುಖಾಂತರ ರಾಯಚೂರಿಗೆ ಆಗಮಿಸಿದರು. ರಾಯಚೂರು, ಯಾದಗಿರಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯ ವೈಮಾನಿಕ ಸಮೀಕ್ಷೆ ನಡೆಸಿದರು. 

ಇದೇ ಸಂದರ್ಭದಲ್ಲಿ ಉತ್ತರ ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ತುಂಗಭದ್ರಾ ಮತ್ತು ಕೃಷ್ಣಾ ನದಿಯನ್ನು ಜೋಡಿಸುವ ಯೋಜನೆಯನ್ನು ಕೈಗೊಳ್ಳಬೇಕೆಂದು ಶಾಸಕ ಸೋಮಶೇಖರ್ ರೆಡ್ಡಿ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಬಿ.ಎಸ್.ಯಡಿಯೂರಪ್ಪ ಅವರು, ಮುಂದಿನ ಬಜೆಟ್ ನಲ್ಲಿ ಈ ಬಗ್ಗೆ ಘೋಷಿಸಿ ಜಾರಿಗೊಳಿಸುವುದಾಗಿ ಭರವಸೆ ನೀಡಿದರು. 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ರೈತರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ನಮ್ಮ ಮೊದಲ ಆದ್ಯತೆ ರೈತರಿಗೆ. ಇಂದು ರಾತ್ರಿ ದೆಹಲಿಗೆ ಹೋಗಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗುತ್ತೇನೆ. ಪ್ರವಾಹ ಪರಿಹಾರಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡುತ್ತೇನೆ ಎಂದು ಹೇಳಿದರು.


ಇದೇ ವೇಳೆ ಮನೆಗಳ ನಿರ್ಮಾಣದ ಬಗ್ಗೆ ಪ್ರಸ್ತಾಪಿಸಿದ ಸಿಎಂ, 2009ರಲ್ಲಿ ಪ್ರವಾಹ ಉಂಟಾದ ಸಂದರ್ಭದಲ್ಲಿ ಸುಮಾರು 50 ಗ್ರಾಮಗಳಲ್ಲಿ ಪುನರ್ವಸತಿ ಕಲ್ಪಿಸಲಾಗಿತ್ತು. ಹಾಗಾಗಿ ಈ ಬಾರಿ ಹೆಚ್ಚು ಸಮಸ್ಯೆ ಕಂಡು ಬಂದಿಲ್ಲ. ಇನ್ನೂ ಸಾವಿರಾರು ಮನೆಗಳ ನಿರ್ಮಾಣ ಬಾಕಿ ಉಳಿದಿದ್ದು, ಶೀಘ್ರದಲ್ಲೆಯೇ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.