ಬೆಂಗಳೂರು: ಸ್ಥಳೀಯ ಸಂಸ್ಥೆಯಲ್ಲೂ ಕಾಂಗ್ರೆಸ್ ಹಾಗೂ ಜೆಡಿಎಸ್‌ ಮೈತ್ರಿ ಮುಂದುವರೆಸಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.


COMMERCIAL BREAK
SCROLL TO CONTINUE READING

ಸದಾಶಿವನಗರ ಬಿಡಿಎ ಕಚೇರಿಯಲ್ಲಿ ಎಲ್ಲ ಸಚಿವರು ಹಾಗೂ ಕಾಂಗ್ರೆಸ್ ಮುಖಂಡರು ಭೇಟಿ ಮಾಡಿ ಚರ್ಚಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸ್ಥಳೀಯ ಚುನಾವಣೆಯಲ್ಲಿ ಬಹುತೇಕ ಕಡೆ ಕಾಂಗ್ರೆಸ್ ಗೆಲುವು ಪಡೆದಿದೆ.‌ ಕೆಲವೆಡೆ ಅತಂತ್ರ ಸ್ಥಿತಿ ಇದೆ. ಹೀಗಾಗಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡು ಅಲ್ಲಿಯೂ ನಾವೇ ಅಧಿಕಾರ ರಚಿಸಲು ನಿರ್ಧರಿಸಿದ್ದೇವೆ ಎಂದರು.


ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ, ಎಲ್ಲಾ ಜಿಲ್ಲಾ ಸಚಿವರುಗಳು ತಮ್ಮ‌ ಕ್ಷೇತ್ರಗಳಿಗೆ ತೆರಳುವಂತೆಯೂ ಸೂಚನೆ ನೀಡಲಾಗಿದೆ. ಕೆಲ ಜಿಲ್ಲೆಗಳಲ್ಲಿ ಅತಿವೃಷ್ಠಿ, ಅನಾವೃಷ್ಠಿ ಇದೆ. ಈ ಬಗ್ಗೆ ಹೆಚ್ಚು ಗಮನ ನೀಡಿ, ಸಮಸ್ಯೆ ಆಲಿಸಲು ಜಿಲ್ಲೆಗಳಿಗೆ ತೆರಳುವಂತೆ ಹೇಳಲಾಗಿದೆ. ಅಂತೆಯೇ, ಚುನಾವಣೆ ಸಂಬಂಧ ಈಗಿಂದಲೇ ತಯಾರಿ ನಡೆಸಲು ನಿರ್ದೇಶನ ನೀಡಿದ್ದೇವೆ ಎಂದರು.


ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ಡಿ.ಕೆ. ಶಿವಕುಮಾರ್, ಜಮೀರ್ ಅಹಮದ್, ಶಿವಾನಂದ ಪಾಟೀಲ್, ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ ಇತರರು ಉಪಸ್ಥಿತರಿದ್ದರು.