ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜೀನಾಮೆ!?
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಆನಂದ್ ಸಿಂಗ್ ಬಿಜೆಪಿ ಸೇರಲಿದ್ದಾರೆ ಎನ್ನಲಾಗುತ್ತಿದೆ.
ಬೆಂಗಳೂರು: ದಿಢೀರ್ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ರೆಬೆಲ್ ಶಾಸಕ ಆನಂದ್ ಸಿಂಗ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ
ಬಳ್ಳಾರಿ ಜಿಲ್ಲೆಯ ವಿಜಯನಗರ ಕ್ಷೇತ್ರದ ಶಾಸಕರಾಗಿರುವ ಆನಂದ್ ಸಿಂಗ್ ಅವರು ಸೋಮವಾರ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾಗಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ. ಆದರೆ ರಾಜೀನಾಮೆಗೆ ನಿಖರ ಕಾರಣವೇನು ಎಂದು ತಿಳಿದುಬಂದಿಲ್ಲ.
ಇತ್ತೀಚೆಗಷ್ಟೇ ಜಿಂದಾಲ್ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಮೈತ್ರಿ ಸರಕಾರದ ವಿರುದ್ಧವೇ ವಾಗ್ದಾಳಿ ನಡೆಸಿದ್ದರು. ಆದರೀಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಆನಂದ್ ಸಿಂಗ್ ಬಿಜೆಪಿ ಸೇರಲಿದ್ದಾರೆ ಎನ್ನಲಾಗುತ್ತಿದೆ.
ಅತ್ತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಮೇರಿಕ ಪ್ರವಾಸದಲ್ಲಿರುವಾಗಲೇ ಮೈತ್ರಿ ಸರ್ಕಾರದ ಒಂದು ವಿಕೆಟ್ ಪತನವಾಗಿದೆ. ಓರ್ವ ಶಾಸಕನ ರಾಜೀನಾಮೆಯಿಂದ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಆದರೆ, ಆನಂದ್ ಸಿಂಗ್ ರಾಜೀನಾಮೆ ಬೆನ್ನಲ್ಲೇ ಮತ್ತಷ್ಟು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ದೊರೆತಿಲ್ಲ.