ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಕಾಂಗ್ರೆಸ್, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೂರು ದಿನಗಳ ಕಾಲ ಸಭೆ ನಡೆಸಲಿದೆ.
ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕುರಿತು ಸ್ಕ್ರೀನಿಂಗ್ ಸಮಿತಿ ಸಭೆ ಮಾ.27, 28, 29 ರಂದು ನಡೆಯಲಿದ್ದು, ಸ್ಕ್ರೀನಿಂಗ್ ಸಮಿತಿಯ ನೇತೃತ್ವವನನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ಅವರು ವಹಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರೊಂದಿಗೆ ಮಾತುಕತೆ ನಡೆಸಿದ್ದರು. ನಂತರ ರಾಜ್ಯಕ್ಕೆ ಹಿಂತಿರುಗಿ ಜಿ.ಪರಮೇಶ್ವರ್, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಇನ್ನಿತರ ನಾಯಕರೊಂದಿಗೆ ಸಭೆ ನಡೆಸಿದ್ದರು. ಈ ಸಭೆ ಬಳಿಕ ದೆಹಲಿಯಲ್ಲಿ ಮೂರು ದಿನಗಳ ಸಭೆ ನಡೆಸಲು ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.