ಇಂದು ಸಮನ್ವಯ ಸಮಿತಿ ಸಭೆ; ಗರಿಗೆದರಿದ ಸಚಿವ ಸ್ಥಾನದ ಆಕಾಂಕ್ಷಿಗಳ ನಿರೀಕ್ಷೆ
ಸಮನ್ವಯ ಸಮಿತಿ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ, ನಿಗಮ-ಮಂಡಳಿ ನೇಮಕ ಸೇರಿದಂತೆ ಇತರ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.
ಬೆಂಗಳೂರು: ಸುಮಾರು ಮೂರು ತಿಂಗಳ ಬಳಿಕ ಇಂದು ಸಂಜೆ 4 ಗಂಟೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯ ಜೆಡಿಎಸ್ -ಕಾಂಗ್ರೆಸ್ ಸಮನ್ವಯ ಸಮಿತಿಯ ಸಭೆ ನಡೆಯಲಿದೆ.
ಸಮನ್ವಯ ಸಮಿತಿ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ, ನಿಗಮ-ಮಂಡಳಿ ನೇಮಕ ಸೇರಿದಂತೆ ಇತರ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಬೆಳಗಾವಿ ಅಧಿವೇಶನಕ್ಕೆ ಮುನ್ನ ಸಂಪುಟ ವಿಸ್ತರಣೆ ಮಾಡಬೇಕೊ? ಬೇಡವೊ? ಎಂಬ ಬಗ್ಗೆ ಇಂದಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಒಂದು ವೇಳೆ ಸಹಮತ ಮೂಡಿದರೆ ಹೈಕಮಾಂಡ್‌ನೊಂದಿಗೆ ಸಮಾಲೋಚಿಸಲು ಕಾಂಗ್ರೆಸ್ ನಾಯಕರು ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮತಿಸಿದರೆ ಬಹು ನಿರೀಕ್ಷಿತ ಸಂಪುಟ ವಿಸ್ತರಣೆಗೂ ಶೀಘ್ರದಲ್ಲೇ ಮುಹೂರ್ತ ನಿಗದಿಯಾಗುವ ಸಾಧ್ಯತೆ ಇದೆ.
ಮತ್ತೊಂದೆಡೆ, ಅನುದಾನ ತಾರತಮ್ಯದ ಬಗ್ಗೆಯೂ ಕೇಳಿಬರುತ್ತಿದ್ದು, ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ. ಜೆಡಿಎಸ್ ಸಚಿವರು ಇರುವ ಕಡೆ ಕಾಂಗ್ರೆಸ್ ಶಾಸಕರ ಶಿಫಾ ರಸುಗಳಿಗೆ ಬೆಲೆ ಕೊಡುತ್ತಿಲ್ಲ. ಸಮ್ಮಿಶ್ರ ಸರಕಾರಕ್ಕೆ ಕಾಂಗ್ರೆಸ್ ಬೆಂಬಲ ಕೊಟ್ಟಿದ್ದರೂ ಸ್ಥಳೀಯ ಮಟ್ಟದಲ್ಲಿ ಜೆಡಿಎಸ್ ಪ್ರಾಬಲ್ಯ ಹೆಚ್ಚುತ್ತಿದೆ ಎಂಬುದರ ವಿಷಯ ಸಮನ್ವಯ ಸಮಿತಿ ಸಭೆಯಲ್ಲಿ ಸದ್ದು ಮಾಡಲಿದೆ.