ಇಂದು ನಲಪಾಡ್ ಜಾಮೀನು ಅರ್ಜಿ ತೀರ್ಪು
ಮೊಹಮದ್ ಹ್ಯಾರಿಸ್ ನಲಪಾಡ್ ಜಾಮೀನು ಅರ್ಜಿ ತೀರ್ಪನ್ನು ಇಂದು ಕೋರ್ಟ್ ಪ್ರಕಟಿಸಲಿದೆ.
ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ಹ್ಯಾರಿಸ್ ನಲಪಾಡ್ ಜಾಮೀನು ಅರ್ಜಿ ತೀರ್ಪನ್ನು ಇಂದು ಕೋರ್ಟ್ ಪ್ರಕಟಿಸಲಿದೆ.
ನಲಪಾಡ್ ಜಾಮೀನು ಅರ್ಜಿ ಕುರಿತು ಬುಧವಾರ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ಪೀಠ ಗುರುವಾರ ತೀರ್ಪು ಪ್ರಕಟಿಸುವುದಾಗಿ ಹೇಳಿತ್ತು. ಸದ್ಯ ನಲಪಾಡ್ ಸೇರಿದಂತೆ 7 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಫೆ.17 ರಂದು ಯುಬಿ ಸಿಟಿಯಲ್ಲಿರುವ ಫೆಗ್ರಿ ಕಫೆ ರೆಸ್ಟೋರೆಂಟ್ ನಲ್ಲಿ ಊಟ ಮಾಡುತ್ತಿದ್ದ ವೇಳೆ ಕಾಲು ತಗುಲಿತು ಎಂಬ ಕಾರಣಕ್ಕೆ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಮತ್ತು ಆತನ ಸ್ನೇಹಿತರು ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದರು. ನಂತರ ತಲೆಮರೆಸಿಕೊಂಡಿದ್ದ ನಲಪಾಡ್ ಫೆ.19ರಂದು ಪೊಲೀಸರಿಗೆ ಶರಣಾಗಿದ್ದರು.