ಬೆಂಗಳೂರು: ಬರ ನಿರ್ವಹಣೆ ಮಾಡುವಲ್ಲಿ ವಿಫಲವಾದರೆ ಜಿಲ್ಲಾಧಿಕಾರಿಗಳು ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳೇ ನೇರ ಹೊಣೆ ಹೊರಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಿಸುವ ಸಂಬಂಧ ಇಂದು ಅಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸಿದ ಸಿಎಂ, ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಷ್ಟೇ ಅಲ್ಲದೆ, ಕುಡಿಯುವ ನೀರಿನ ವ್ಯವಸ್ಥೆ, ಜಾನುವಾರು ಸಂರಕ್ಷಣೆಗಾಗಿ ಮೇವು ಲಭ್ಯತೆ, ಗೋಶಾಲೆ ಹಾಗೂ ಮೇವು ಬ್ಯಾಂಕ್, ಉದ್ಯೋಗ ಸೃಜನೆ ಕುರಿತು ಹಲವು ಕಾಮಗಾರಿಗಳ ಪ್ರಗತಿ ಕುರಿತು ಇದೇ ಸಂದರ್ಭದಲ್ಲಿ ಚರ್ಚಿಸಿದರು.
ಸರಕಾರದಲ್ಲಿ ಹಣಕಾಸಿಗೆ ಯಾವುದೇ ಕೊರತೆ ಇಲ್ಲ. ಈಗಾಗಲೇ ಡಿಸಿ ಅಕೌಂಟ್‌ಗಳಿಗೆ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಿ. ಬಿಡುಗಡೆಯಾಗಿರುವ ಹಣ ಸಂಪೂರ್ಣ ಖರ್ಚು ಮಾಡಿ. ಎಷ್ಟೇ ಹಣದ ಅವಶ್ಯಕತೆ ಇದ್ದರೂ ಹಣ ಬಿಡುಗಡೆಗೆ ಸರ್ಕಾರ ಸಿದ್ದವಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಮೇವು ಬ್ಯಾಂಕ್ ಸಮರ್ಪಕವಾಗಿ ನಿರ್ವಹಣೆ ಮಾಡಿ. ನೀರಿನ ವ್ಯವಸ್ಥೆ ಇಲ್ಲದ 2,999 ಗ್ರಾಮಗಳಿಗೆ ಟ್ಯಾಂಕರ್ ಹಾಗೂ ಖಾಸಗಿ ಬೋರ್ ವೆಲ್ ಮೂಲಕ ನೀರು ಪೂರೈಕೆ ಮಾಡಿ, ನಗರ ಪ್ರದೇಶಗಳಲ್ಲಿ 440 ವಾರ್ಡ್ 271 ಟ್ಯಾಂಕರ್ ಗಳ ಮೂಲಕ ನೀರು ಪೂರೈಕೆ ಮಾಡಿ, ಕೂಡಲೇ ಜಿಲ್ಲಾಧಿಕಾರಿಗಳು ಹಾಗೂ ಸಿಇಓಗಳು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವರದಿ ನೀಡುವಂತೆ ಸಿಎಂ ಕುಮಾರಸ್ವಾಮಿ ಸೂಚನೆ ನೀಡಿದರು.
ಸಚಿವರಾದ ಆರ್.ವಿ.ದೇಶಪಾಂಡೆ, ಕೃಷ್ಣ ಬೈರೇಗೌಡ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮಾ, ಕಂದಾಯ, ಆರ್ಥಿಕ, ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಜಲಸಂಪನ್ಮೂಲ, ಸಣ್ಣ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ವೀಡಿಯೋ ಕಾನ್ಫರೆನ್ಸ್ ನಲ್ಲಿ ಪಾಲ್ಗೊಂಡಿದ್ದರು.