ಕೋಮುಗಲಭೆಗೆ ಪ್ರಚೋದನೆ ನೀಡುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ- ಡಿಸಿಎಂ

ಕರ್ನಾಟಕ ಅಪರಾಧ ಸಂಖ್ಯೆಯಲ್ಲಿ ಹತ್ತನೇ ಸ್ಥಾನ ಪಡೆದುಕೊಂಡಿದ್ದೆ.. ಈ ಸಂಖ್ಯೆ ಇನ್ನಷ್ಟು ಕಡಿಮೆಯಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ- ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್

Last Updated : Jun 22, 2018, 05:12 PM IST
ಕೋಮುಗಲಭೆಗೆ ಪ್ರಚೋದನೆ ನೀಡುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ- ಡಿಸಿಎಂ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೋಮುಗಲಭೆಗೆ ಪ್ರಚೋದನೆ ನೀಡುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರೂ ಆಗಿರುವ ಡಾ.ಜಿ. ಪರಮೇಶ್ವರ್ ತಿಳಿಸಿದರು.

ಶುಕ್ರವಾರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಮು ಗಲಭೆ ಎಬ್ಬಿಸುವವರು ಯಾವುದೇ ಜಾತಿ, ಧರ್ಮ, ಸಮುದಾಯಕ್ಕೆ ಸೇರಿದ್ದರೂ ಸರಿಯೇ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದೇವೆ. ಅಲ್ಲದೆ, ಪ್ರಚೋದನಾತ್ಮಕ ಹೇಳಿಕೆ ನೀಡಿದರೆ, ಅಂತಹವರ ಮೇಲೆ ಕಣ್ಣಿಡಲಾಗುತ್ತದೆ. ಈ ಪ್ರವೃತ್ತಿ ಹೆಚ್ಚಿದರೆ ಅವರ ವಿರುದ್ಧ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇವೆ ಎಂದರು. 

ಇದೇ ಸಮಯದಲ್ಲಿ ಗೌರಿ ಲಂಕೇಶ್ ಹತ್ಯೆ ಪ್ರಕರಣ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ  ಯಶಸ್ವಿಯಾಗಿದ್ದು, ತನಿಖೆ ಮುಂದುವರೆದಿದೆ. ಈ ಪ್ರಕರಣ ಭೇದಿಸಿದ ತಂಡವನ್ನು ಸಿಎಂ ಕುಮಾರಸ್ವಾಮಿ ಅವರು ಅಭಿನಂದಿಸಿದ್ದು, ಇದಕ್ಕೆ ತಾರ್ಕಿಕ ಅಂತ್ಯ ಕಾಣಿಸುವಂತೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ಅಪರಾಧ ಸಂಖ್ಯೆಯಲ್ಲಿ ರಾಜ್ಯಕ್ಕೆ ಹತ್ತನೇ ಸ್ಥಾನ
ಅಪರಾಧ ಸಂಖ್ಯೆಯಲ್ಲಿ ಕರ್ನಾಟಕ ಹತ್ತನೇ ಸ್ಥಾನ ಪಡೆದುಕೊಂಡಿದೆ. ಈ ಸಂಖ್ಯೆ ಇನ್ನಷ್ಟು ಕಡಿಮೆಯಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ.  ಪೊಲೀಸರೆಂದರೆ ಜನರಲ್ಲಿ ಭಯ, ಆತಂಕವಿದೆ. ಈ ಮನೋಭಾವ ಅಳಿಸಿ, ಜನಸ್ನೇಹಿ ಪೊಲೀಸರಂತೆ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದೇವೆ. ಇನ್ನು, ನೇಮಕಾತಿ ವಿಚಾರದಲ್ಲಿ ಕಳೆದ ಐದು ವರ್ಷದಲ್ಲಿ 30,000 ಕಾನ್ಸ್‌ಟೇಬಲ್ ಹಾಗೂ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಆಗಿದೆ. ಇನ್ನೂ 14,000 ಕಾನ್ಸ್‌ಟೇಬಲ್ ಹುದ್ದೆ ಖಾಲಿ ಇದ್ದು, ಹಂತ ಹಂತವಾಗಿ ತುಂಬಲಾಗುತ್ತದೆ. ಅಲ್ಲದೆ, ನಿವೃತ್ತಿ ಹೊಂದುವ ಸ್ಥಾನಗಳಿಗೆ ಆಗಾಗ್ಗೆ ನೇಮಕಾತಿ ನಡೆಯಲಿದೆ ಎಂದು ತಿಳಿಸಿದರು. 

Trending News