ಭಾರಿ ಮಳೆಯಿಂದಾಗಿ ಧಾರವಾಡದ ರಸ್ತೆಗಳು ಜಲಾವೃತ
ಬೆಳಗಾವಿ ಜಿಲ್ಲೆಯಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯ ಸವದತ್ತಿ ತಾಲ್ಲೂಕಿನ ಹೊಸೂರ್ ಗ್ರಾಮದ ಸೇತುವೆ ಮುಳುಗಡೆಯಾಗಿದೆ.
ಧಾರವಾಡ: ನಗರದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅನೇಕ ಪ್ರದೇಶಗಳು ಜಲಾವೃತಗೊಂಡಿದ್ದು, ಸಂಚಾರ ದಟ್ಟಣೆ ಉಂಟಾಗಿದೆ.
ನಗರದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಅನೇಕ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿರುವುದು ಕಂಡು ಬಂದಿದೆ.
ಭಾರತದ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆಯ ಪ್ರಕಾರ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ್, ಹಾವೇರಿ, ಕಲಬುರ್ಗಿ, ವಿಜಯಪುರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸೋಮವಾರವೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಪ್ರಮಾಣವು 65 ಮಿ.ಮೀ ಇರುವ ಸಾಧ್ಯತೆ ಇದೆ ಎಂದು ಐಎಂಡಿ ಊಹಿಸಿದೆ.
ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಳಗಾವಿ ಜಿಲ್ಲೆಯಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯ ಸವದತ್ತಿ ತಾಲ್ಲೂಕಿನ ಹೊಸೂರ್ ಗ್ರಾಮದ ಸೇತುವೆ ಮುಳುಗಡೆಯಾಗಿದೆ. ಮುಳವಳ್ಳಿ, ಗೊಂಡ, ಕಾತ್ರಾಳ, ಯಕ್ಕುಂಡಿ, ಮಲ್ಲೂರ, ಸಾಗಲ ಸೋಮನಿಂಗ್ ದೇವಸ್ಥಾನಕ್ಕೆ ಸಂಪರ್ಕ ಸಾಧಿಸುವ ರಸ್ತೆ ಸಂಪರ್ಕ ಕಡಿತಗೊಂಡಿದೆ.