ಬೆಂಗಳೂರು: ಕೆಪಿಎಂಇ ಮಸೂದೆ ವಿರೋಧಿಸಿ ಖಾಸಗಿ ವೈದ್ಯರು ಮತ್ತು ಸರ್ಕಾರದ ನಡುವಿನ ಹಗ್ಗ ಜಗ್ಗಾಟ ತಾರಕಕ್ಕೇರಿದೆ. ಬುಧವಾರ ಸಹ ಖಾಸಗಿ ವೈದ್ಯರು ಮತ್ತು ಸಿಎಂ ಸಿದ್ದರಾಮಯ್ಯ ನಡುವಿನ ಸಂಧಾನ ಸಫಲವಾಗದ ಕಾರಣ ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ಖಾಸಗಿ ಆಸ್ಪತ್ರೆಗಳ ವೈದ್ಯರು ನಿರ್ಧರಿಸಿದ್ದಾರೆ.
ಇಂದಿನಿಂದ ಯಾವ ಖಾಸಗಿ ಆಸ್ಪತ್ರೆಗಳಲ್ಲೂ ಹೊರ ರೋಗಿಗಳ ವಿಭಾಗದಲ್ಲಿ ಚಿಕಿತ್ಸೆ ಬಂದ್ ಮಾಡಲು ಖಾಸಗಿ ಆಸ್ಪತ್ರೆಗಳ ಸಂಘ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಖಾಸಗಿ ಆಸ್ಪತ್ರೆಗಳ ಸಂಘದ ಪದಾಧಿಕಾರಿಗಳ ನಡುವೆ ಬೆಳಗಾವಿಯಲ್ಲಿ ಮಾತುಕತೆ ನಡೆದಿದ್ದು, ವಿಧೆಯಕದಲ್ಲಿ ಕೆಲವೊಂದು ಮಾರ್ಪಾಡು ಮಾಡುವಂತೆ ವೈದ್ಯರ ಸಂಘ ಪಟ್ಟು ಹಿಡಿದಿದೆ. ಆದರೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದ ಕಾರಣ ಖಾಸಗಿ ಆಸ್ಪತ್ರೆಗಳು ಹೊರ ಹೋಗಿಗಳ ವಿಭಾಗದಲ್ಲಿ ಚಿಕಿತ್ಸೆ ಬಂದ್ ಮಾಡಲು ಸಿದ್ಧವಾಗಿದೆ.
ಅದಾಗ್ಯೂ ತುರ್ತು ಸೇವೆ ಮತ್ತು ಒಳರೋಗಿಗಳ ವಿಭಾಗಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ಖಾಸಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಈ ಮಧ್ಯೆ ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ನೋಡಿಕೊಳ್ಳುವ ಸಲುವಾಗಿ ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ರಜೆ ಮುಂದೂಡಲಾಗಿದೆ. ಖಾಸಗಿ ಆಸ್ಪತ್ರೆಗಳು ಮುಷ್ಕರದಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ತಾಲೂಕು, ಜಿಲ್ಲೆ ಸೇರಿದಂತೆ ಯಾವ ಸರ್ಕಾರಿ ಆಸ್ಪತ್ರೆಗಳಲ್ಲೂ ವೈದ್ಯರು ಹಾಗೂ ಸಿಬ್ಬಂದಿ ರಜೆ ತೆಗೆದುಕೊಳ್ಳದೆ ಕರ್ತವ್ಯಕ್ಕೆ ಹಾಜರಾಗಬೇಕೆಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.