ಬೆಂಗಳೂರು: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಉಮೇಶ್ ಜಾಧವ್ ಅವರ ರಾಜೀನಾಮೆಯನ್ನು ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಸೋಮವಾರ ಅಂಗೀಕರಿಸಿದ್ದಾರೆ.
ಮಾರ್ಚ್ 4ರಂದು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಅವರ ನಿವಾಸಕ್ಕೆ ತೆರಳಿದ್ದ ಡಾ. ಉಮೇಶ್ ಜಾಧವ್ ತಮ್ಮ ಶಾಸಕ ರಾಜೀನಾಮೆ ಸಲ್ಲಿಸಿದ್ದರು. ಬಳಿಕ ಕಲಬುರಗಿಯಲ್ಲಿ ನಡೆದಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಭಾರತೀಯ ಜನತಾ ಪಕ್ಷ(ಬಿಜೆಪಿ) ಸೇರ್ಪಡೆಗೊಂಡಿದ್ದರು. ಅಷ್ಟೇ ಅಲ್ಲದೆ, ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎದುರೇ ಕಣಕ್ಕಿಳಿದಿದ್ದಾರೆ.
ರಾಜೀನಾಮೆ ಅಂಗೀಕಾರವಾಗದಿದ್ದರೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಹಿನ್ನೆಲೆಯಲ್ಲಿ ಅವರನ್ನು ಅನರ್ಹಗೊಳಿಸಬೇಕೆಂದು ಕಾಂಗ್ರೆಸ್ ಪಕ್ಷದ ನಿಯೋಗ ಸಭಾಪತಿ ರಮೇಶ್ ಕುಮಾರ ಅವರಿಗೆ ದೂರು ನೀಡಿತ್ತು. ನಂತರ ಜಾಧವ್ ವಿಚಾರಣೆ ನಡೆಸಿದ್ದ ಸ್ಪೀಕರ್ ರಮೇಶ್ ಕುಮಾರ್ ಸೋಮವಾರ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.