ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮಕ್ಕೆ ಬದ್ಧ, ಕನ್ನಡಕ್ಕೆ ಆದ್ಯತೆ ಬಗ್ಗೆ ರಾಜಿಯಿಲ್ಲ
ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಕಲ್ಪಿಸಲು, ಅವುಗಳನ್ನು ಮೇಲ್ದರ್ಜೆಗೇರಿ ಸಲು 450 ಕೋಟಿ ರೂ.ಗಳ ಯೋಜನೆ ರೂಪಿಸಿ ಹಣ ಬಿಡುಗಡೆ ಮಾಡಲಾಗಿದೆ.
ಬೆಂಗಳೂರು: ಬುಧವಾರ ಆರಂಭವಾದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ವಿರೋಧ ಪಕ್ಷ ಬಿಜೆಪಿಯ ಧಿಕ್ಕಾರ, ಧರಣಿ ಮಧ್ಯೆಯೇ ಸದನವನ್ನುದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲ ವಜುಭಾಯಿ ವಾಲಾ, 'ಸಮಾಜದ ಬಡ ವರ್ಗದ ಬುದ್ಧಿವಂತ ಮಕ್ಕಳು ಇಂಗ್ಲೀಷ್ ಜ್ಞಾನದ ಕೊರತೆಯಿಂದಾಗಿ ಹಿಂದುಳಿಯಬಾರದು ಎಂಬ ಉದ್ದೇಶದಿಂದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಆದರೂ ಕನ್ನಡಕ್ಕೆ ಆದ್ಯತೆ ನೀಡುವ ಬಗ್ಗೆ ಯಾವುದೇ ರಾಜಿಯಾಗುವುದಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.
2019-20ನೇ ಶೈಕ್ಷಣಿಕ ವರ್ಷದಿಂದ ಒಂದು ಸಾವಿರ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸುವುದಾಗಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬಜೆಟ್ ನಲ್ಲಿ ಪ್ರಕಟಿಸಿದ್ದರು. ಈ ನಿಲುವನ್ನು ಬಲವಾಗಿ ಪ್ರತಿಪಾದಿಸಿದ ರಾಜ್ಯಪಾಲರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಸಮರ್ಪಕ ಕೌಶಲ್ಯದೊಂದಿಗೆ ರಾಜ್ಯಮಟ್ಟದಲ್ಲಷ್ಟೇ ಅಲ್ಲದೆ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಅನುವಾಗುವಂತೆ ಸಜ್ಜುಗೊಳಿಸುವುದು ಅನಿವಾರ್ಯವಾಗಿದೆ ಎಂದರು.
ಪದವಿಪೂರ್ವ, ಪದವಿ ಹಾಗೂ ಸ್ನಾತಕೋತ್ತರ ವ್ಯಾಸಂಗದಲ್ಲಿ ಉನ್ನತ ಶಿಕ್ಷಣವನ್ನು ಪಡೆಯಲು 3 ಲಕ್ಷ ವಿದ್ಯಾರ್ಥಿನಿಯರನ್ನು ಪ್ರೋತ್ಸಾಹಿಸಲು ಶುಲ್ಕ ವಿನಾಯಿತಿ ನೀಡಲು 95 ಕೋಟಿ ರೂ. ಖರ್ಚು ಮಾಡಲಾಗಿದೆ. ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಿಸಲು ಸರ್ಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಮೂಲಸೌಕರ್ಯ ಸುಧಾರಿಸಲು ಅಂದಾಜು 750 ಕೋಟಿ ಖರ್ಚು ಮಾಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಕಲ್ಪಿಸಲು, ಅವುಗಳನ್ನು ಮೇಲ್ದರ್ಜೆಗೇರಿಸಲು 450 ಕೋಟಿ ರೂ.ಗಳ ಯೋಜನೆ ರೂಪಿಸಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು.