ಡಿ.ಕೆ.ಶಿವಕುಮಾರ್ ಹೇಳಿಕೆ ಅಪ್ರಭುದ್ಧತೆಯ ಪ್ರತೀಕ & ಪರಮ ಬಾಲಿಶ: ಎಚ್‌ಡಿಕೆ

ಪಕ್ಷದಲ್ಲಿ ನಿಮ್ಮ ಸ್ವಾತಂತ್ರ್ಯಹರಣ ಮಾಡುತ್ತಿರುವವರ ಕಡೆ ಗಮನ ಹರಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಎಚ್‍ಡಿಕೆ ಸಲಹೆ ನೀಡಿದ್ದಾರೆ.

Written by - Puttaraj K Alur | Last Updated : Aug 9, 2022, 01:28 PM IST
  • ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ಅಪ್ರಭುದ್ಧತೆಯ ಪ್ರತೀಕ ಮತ್ತು ಪರಮ ಬಾಲಿಶ
  • ಮಾಡಿದ ಪಾಪಕ್ಕೆ ಇವತ್ತಿನ ಕಾಂಗ್ರೆಸ್ ಶಾಸ್ತಿ ಅನುಭವಿಸುತ್ತಿದೆ ಎಂದ ಎಚ್.ಡಿ.ಕುಮಾರಸ್ವಾಮಿ
  • ಕಾಂಗ್ರೆಸ್ ಸ್ವಾತಂತ್ರ್ಯ ಹೋರಾಟ ಮಾಡಿದ್ದೇ ಕುಮಾರಸ್ವಾಮಿ ಸಿಎಂ ಆಗಲಿ ಅಂತಾ ಎಂದು ಹೇಳಿದ್ದ ಡಿಕೆಶಿ
ಡಿ.ಕೆ.ಶಿವಕುಮಾರ್ ಹೇಳಿಕೆ ಅಪ್ರಭುದ್ಧತೆಯ ಪ್ರತೀಕ & ಪರಮ ಬಾಲಿಶ: ಎಚ್‌ಡಿಕೆ title=
ಡಿಕೆಶಿ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಹೋರಾಟ ಮಾಡಿದ್ದೇ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಲಿ ಎಂದು ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ಅಪ್ರಭುದ್ಧತೆಯ ಪ್ರತೀಕ ಮತ್ತು ಪರಮ ಬಾಲಿಶವೆಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ಡಿಕೆಶಿಗೆ ಗೊತ್ತಿರಲಿ 1947ರ ಹಿಂದಿನ ಕಾಂಗ್ರೆಸ್ ಬೇರೆ, ಈಗಿನ ಸೋಗಲಾಡಿ ಸಿದ್ಧಹಸ್ತರು ಇರುವ ಕಾಂಗ್ರೆಸ್ಸೇ ಬೇರೆ. ಸಮಸ್ತ ಭಾರತೀಯರಿಗೆ ಸ್ವಾತಂತ್ರ್ಯ ತಂದುಕೊಡಲು ಮಹಾತ್ಮಗಾಂಧಿ ನೇತೃತ್ವದ ಕಾಂಗ್ರೆಸ್ ಹೋರಾಟ ಮಾಡಿತ್ತು. ನಂತರದ ಕಾಂಗ್ರೆಸ್ ಮಾಡಿದ್ದೇ ಸ್ವಾತಂತ್ರ್ಯದ ಮಾರಣಹೋಮ’ವೆಂದು ಎಚ್‍ಡಿಕೆ ಕುಟುಕಿದ್ದಾರೆ.

ಇದನ್ನೂ ಓದಿ: ಸುರಿದ ಭಾರೀ ಮಳೆಗೆ ಒಂದೇ ರಾತ್ರಿ 45 ಸಾವಿರ ಕೋಳಿಗಳ ಮಾರಣಹೋಮ

‘ಮಾಡಿದ ಪಾಪಕ್ಕೆ ಇವತ್ತಿನ ಕಾಂಗ್ರೆಸ್ ಶಾಸ್ತಿ ಅನುಭವಿಸುತ್ತಿದೆ. ನಾನು ಮುಖ್ಯಮಂತ್ರಿ ಆಗಿದ್ದು ಅಂದು ರಾಷ್ಟ್ರಪಿತರು ತಂದುಕೊಟ್ಟ ಸ್ವಾತಂತ್ರ್ಯ ಹಾಗೂ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಕೊಟ್ಟ ಜಗತ್ ಮಾನ್ಯ ಸಂವಿಧಾನದ ಕಾರುಣ್ಯದಿಂದ. ಇದರಲ್ಲಿ ಕಾಂಗ್ರೆಸ್ ಪಾತ್ರ ಶೂನ್ಯ. ನಾನು ಪಂಡಿತ್ ಜವಾಹರ‌ಲಾಲ್ ನೆಹರು, ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಬಗ್ಗೆ ಹಗುರವಾಗಿ ಮಾತನಾಡಲಾರೆ. ಅವರ ನಂತರ ಕಾಂಗ್ರೆಸ್ ಹೇಗೆಲ್ಲಾ ಹಾದಿತಪ್ಪಿ ಜನರ ಸ್ವಾತಂತ್ರ್ಯ ಹರಣ ಮಾಡಿತು ಎನ್ನುವದನ್ನು ಡಿಕೆಶಿಯವರು ಇತಿಹಾಸ ಓದಿದರೆ ಸತ್ಯ ಅರಿವಾಗುತ್ತದೆ’ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

‘ಸಂವಿಧಾನ ಕೊಟ್ಟವರು, ದೇಶದ ಮೊದಲನೇ ಸಂಪುಟದಲ್ಲಿ ಸಚಿವರಾಗಿದ್ದವರು ಡಾ.ಬಿ.ಆರ್.ಅಂಬೇಡ್ಕರ್ ಅವರು. ಅಂಥ ಮಹನೀಯರನ್ನು ಸಂಸತ್ತಿಗೇ ಮತ್ತೆ ಬಾರದಂತೆ ತಡೆದು, ಭಾರತದ ದೀನದಲಿತರ ದನಿಯನ್ನು ನಿರ್ದಯವಾಗಿ ಅಡಗಿಸಿದ ಪಕ್ಷದ ನಾಯಕರು ಇವತ್ತು ಸ್ವಾತಂತ್ಯದ ಭಜನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಕೋಳಿ ಕೂಗಿದರೆ ಭಾರತದಲ್ಲಿ ಬೆಳಕು ಹರಿಯುತ್ತದೆ ಎನ್ನುವ ಕಾಲ ಹೋಯಿತು. ಡಿಕೆಶಿಯವರು ಇದನ್ನು ಅರ್ಥ ಮಾಡಿಕೊಳ್ಳುತ್ತಾರೆಂಬ ನಂಬಿಕೆ ನನ್ನದು. ಅಲ್ಲದೆ, ಪಕ್ಷದಲ್ಲಿ ನಿಮ್ಮ ಸ್ವಾತಂತ್ರ್ಯಹರಣ ಮಾಡುತ್ತಿರುವವರ ಕಡೆ ಗಮನ ಹರಿಸಿ’ ಎಂದು ಎಚ್‍ಡಿಕೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಮಳೆ ಹಾನಿ.. ರಾಜ್ಯ ನಕ್ಷೆಯಿಂದ ಕಲ್ಯಾಣ ಕರ್ನಾಟಕವನ್ನು ಅಳಿಸಲಾಗಿದೆಯೇ?- ಪ್ರಿಯಾಂಕ್ ಖರ್ಗೆ

‘ಈಗ ಸ್ವಾತಂತ್ರೋತ್ಸವದ ನಡಿಗೆ ಎಂದು ಹೊರಟಿದ್ದೀರಿ. ಯಾರ ಸ್ವಾತಂತ್ರ್ಯಕ್ಕಾಗಿ ಎಂದು ಸ್ವಲ್ಪ ಬಿಡಿಸಿ ಹೇಳುವಿರಾ? ಇದುವರೆಗೂ ಕಾಂಗ್ರೆಸ್ ನಡೆಸಿದ ಸ್ವಾತಂತ್ರ್ಯ ವಿರೋಧಿ ಕೃತ್ಯಗಳಿಗೆ ಉತ್ತರ ಕೊಡುವಿರಾ?’ ಎಂದು ಕುಮಾರಸ್ವಾಮಿ ಡಿಕೆಶಿಗೆ ಪ್ರಶ್ನಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News