ಕುದುರೆ ವ್ಯಾಪಾರಕ್ಕೆ ಕಾಂಗ್ರೆಸ್ ಅನ್ವರ್ಥ ನಾಮ: ಕಾಂಗ್ರೆಸ್ನ ಪ್ರಜಾಪ್ರಭುತ್ವ ನಡೆ ಪ್ರಶ್ನಿಸಿದ ಎಚ್‍ಡಿಕೆ

2004ರ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಇದೇ ಕಾಂಗ್ರೆಸ್ ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿತ್ತು. ಇದನ್ನು ಮನಗಂಡೇ ನಾನು ಕ್ಷಿಪ್ರ ರಾಜಕೀಯ ಕ್ರಾಂತಿ ಮಾಡಬೇಕಾಯಿತು- ಎಚ್.ಡಿ.‌ ಕುಮಾರಸ್ವಾಮಿ  

Last Updated : Jul 28, 2020, 01:32 PM IST
ಕುದುರೆ ವ್ಯಾಪಾರಕ್ಕೆ ಕಾಂಗ್ರೆಸ್ ಅನ್ವರ್ಥ ನಾಮ: ಕಾಂಗ್ರೆಸ್ನ ಪ್ರಜಾಪ್ರಭುತ್ವ ನಡೆ ಪ್ರಶ್ನಿಸಿದ ಎಚ್‍ಡಿಕೆ  title=

ಬೆಂಗಳೂರು: ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ (BJP) ವಿರುದ್ಧ ಕಾಂಗ್ರೆಸ್ ದೇಶಾದ್ಯಂತ "ಪ್ರಜಾಪ್ರಭುತ್ವ ಉಳಿಸಿ"  (Save democracy) ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ (Congress) ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು ಬೆಂಬಲ ನೀಡಿದ BSPಯ ಎಲ್ಲ ಶಾಸಕರನ್ನೂ ಕಾಂಗ್ರೆಸ್ ಸೆಳೆದಿಲ್ಲವೇ? ಇದು ಖರೀದಿಯಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.‌ ಕುಮಾರಸ್ವಾಮಿ (HD Kumaraswamy) ಪ್ರಶ್ನಿಸಿದ್ದಾರೆ.

ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕುಮಾರಸ್ವಾಮಿ, ಅಚ್ಚರಿಯ ರೀತಿಯಲ್ಲಿ ಆಡಳಿತರೂಢ ಬಿಜೆಪಿಯನ್ನು ಬಿಟ್ಟು ಕಾಂಗ್ರೆಸ್ ಮೇಲೆ ಹರಿಹಾಯ್ದಿದ್ದಾರೆ. ಸರ್ಕಾರ ರಚಿಸಲು ಬೆಂಬಲ ಕೊಟ್ಟವರನ್ನೇ ಕುತಂತ್ರದಿಂದ ಸೆಳೆದುಕೊಳ್ಳುವುದು, ಇಡೀ ಪಕ್ಷವನ್ನೇ ವಿಲೀನ ಮಾಡಿಸಿಕೊಳ್ಳುವುದು ಪ್ರಜಾಪ್ರಭುತ್ವ ನಡೆಯೇ? ಸಮಾನ ಮನಸ್ಕ ಪಕ್ಷಗಳನ್ನು ಒಡೆದು ಶಾಸಕರನ್ನು ಸೆಳೆಯುತ್ತಿದ್ದರೆ ನಿಮಗೆ ಯಾರು ಬೆಂಬಲ ಕೊಟ್ಟಾರು. ಈ ತಪ್ಪುಗಳು ನಿಮಗೆ ಕಾಣುತ್ತಿಲ್ಲವೇ? ಎಂದಿದ್ದಾರೆ.

MSMEಗಳಿಗೆ ಕೇಂದ್ರದ ರೀತಿ ವಿನಾಯಿತಿ ನೀಡಲು ಕ್ರಮ ಕೈಗೊಳ್ಳುವಂತೆ ಎಚ್.ಡಿ. ಕುಮಾರಸ್ವಾಮಿ ಒತ್ತಾಯ

ಶಾಸಕರ ಖರೀದಿ ವಿಚಾರವಾಗಿ ದೊಡ್ಡ ಗಂಟಲು ಮಾಡುತ್ತಿರುವ ಕಾಂಗ್ರೆಸ್ ಹಿಂದೆ ಜೆಡಿಎಸ್ (JDS) ಅನ್ನು ಒಡೆದಿಲ್ಲವೇ? ಒಡೆಯಲು ಪ್ರಯತ್ನಗಳನ್ನು ಮಾಡಲಿಲ್ಲವೇ? ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಂಟು ಮಂದಿಯನ್ನು ಕೇವಲ ರಾಜ್ಯಸಭೆ ಚುನಾವಣೆಗಾಗಿ ಖರೀದಿಸಲಿಲ್ಲವೇ? ಇದು ಪ್ರಜಾಸತ್ತಾತ್ಮಕವೇ? ಖರೀದಿ ವಿಚಾರದಲ್ಲಿ ಎರಡೂ ಪಕ್ಷಗಳೂ 'ಅಪರಾಧಿ'ಗಳೇ? ಎಂದು ತಮ್ಮ ಸಿಟ್ಟನ್ನು ಕಾರಿಕೊಂಡಿದ್ದಾರೆ.

ಎಸ್.ಎಂ. ಕೃಷ್ಣ (SM Krishna) ಅವರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ನಮ್ಮ ಶಾಸಕರನ್ನು ಖರೀದಿ ಮಾಡಿರಲಿಲ್ಲವೇ? 2018ರ ವಿಧಾನಸಭೆ ಚುನಾವಣೆ ನಂತರ ನಮ್ಮ ಶಾಸಕರನ್ನು ಖರೀದಿಸಿ ಸ್ವತಂತ್ರವಾಗಿ ಸರ್ಕಾರ ರಚಿಸಲು ಹೊಂಚು ಹಾಕಿರಲಿಲ್ಲವೇ? ಕಾಂಗ್ರೆಸ್ ಬಳಿ ಈ ಪ್ರಶ್ನೆಗಳಿಗೆ ಉತ್ತರಿಸಲು ನೈತಿಕತೆ ಇದೆಯೇ? ಎಂದಿದ್ದಾರೆ.

#COVID19 ಸೋಂಕಿತರ ಮನೆಗಳ ಎದುರಿನ ಎಚ್ಚರಿಕೆ ಫಲಕ ನವಯುಗದ ಸಾಮಾಜಿಕ ತಾರಮ್ಯ

2004ರ ಕಾಂಗ್ರೆಸ್-ಜೆಡಿಎಸ್ (Congress-JDS) ಸರ್ಕಾರದ ಅವಧಿಯಲ್ಲಿ ಇದೇ ಕಾಂಗ್ರೆಸ್ ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿತ್ತು. ಇದನ್ನು ಮನಗಂಡೇ ನಾನು ಕ್ಷಿಪ್ರ ರಾಜಕೀಯ ಕ್ರಾಂತಿ ಮಾಡಬೇಕಾಯಿತು. ಪಕ್ಷಗಳನ್ನು ಒಡೆಯುವ, ಶಾಸಕರನ್ನು ಖರೀದಿಸುವ ವ್ಯವಾಹರದಲ್ಲಿ ಕಾಂಗ್ರೆಸ್ ನಿಪುಣ. 'ಕುದುರೆ ವ್ಯಾಪಾರ' ಎಂಬ ಭಾಷೆ ಹುಟ್ಟಿದ್ದೇ ಕಾಂಗ್ರೆಸ್ ಪಕ್ಷದಿಂದ ಎಂದು ಹೇಳಿದ್ದಾರೆ.

ಪಕ್ಷಾಂತರ ನಿಷೇಧ ಕಾಯ್ದೆ ಪರಿಣಾಮಕಾರಿಯಾಗಿಲ್ಲ.‌ ಆದ್ದರಿಂದಲೇ ಈ ಪ್ರಜಾಪ್ರಭುತ್ವ ವಿರೋಧಿ ಪ್ರಹಸನಗಳು ನಡೆಯುತ್ತಿವೆ. ಹಾಗಾಗಿ ಪಕ್ಷಾಂತರ ಮಾಡಿದ ವ್ಯಕ್ತಿ, ಆತನ ಕುಟುಂಬಕ್ಕೆ 2 ಅವಧಿಗೆ ಚುನಾವಣೆ ನಿರ್ಬಂಧಿಸುವ ಮತ್ತು ಈ ಅವಧಿಯಲ್ಲಿ ಯಾವುದೇ ಅಧಿಕಾರ ಹೊಂದದಂತೆ ಮಾಡುವುದು ಸೂಕ್ತ. ಇದರತ್ತ ಚರ್ಚೆಗಳಾದರೂ ನಡೆಯಲಿ. ಪ್ರಜಾಪ್ರಭುತ್ವ ಉಳಿಯಲಿ ಎಂಬ ಸಲಹೆ ನೀಡಿದ್ದಾರೆ.

ಜನರ ಪ್ರಾಣದ ಜೊತೆ ಚೆಲ್ಲಾಟ ಆಡುವುದನ್ನು ನಿಲ್ಲಿಸಿ: ರಾಜ್ಯ ಸರ್ಕಾರಕ್ಕೆ ಎಚ್.ಡಿ. ಕುಮಾರಸ್ವಾಮಿ ಒತ್ತಾಯ

ಪ್ರಜಾಪ್ರಭುತ್ವ ಉಳಿಸಲು ಪ್ರಾಣ ನೀಡುವುದಾಗಿ ಕಾಂಗ್ರೆಸ್‌ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಹೇಳುತ್ತಿದ್ದರು. ಸ್ವಾಮಿ, ಜೀವ ಅಮೂಲ್ಯ. ನೀವು ಪ್ರಾಣ ಕೊಡುವುದು ಬೇಡ. ಕಾಂಗ್ರೆಸ್‌ ನಡೆದು ಬಂದ ದಾರಿಯನ್ನು ಒಂದು ಬಾರಿ ನೆನಪಿಸಿಕೊಳ್ಳಿ. ನಂತರ ಪಕ್ಷಾಂತರ ನಿಷೇಧ ಕಾಯ್ದೆಯನ್ನು ಸದೃಢಗೊಳಿಸುವತ್ತ ಚಿಂತನೆ ಮಾಡಿ. ಪ್ರಜಾಪ್ರಭುತ್ವ ತಂತಾನೆ ಉಳಿಯುತ್ತದೆ ಎಂದಿದ್ದಾರೆ.

Trending News