ಹುಬ್ಬಳ್ಳಿ: ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ರಾಜ್ಯ ಸಂಪುಟ ವಿಸ್ತರಣೆ ಸದ್ಯದಲ್ಲೇ ನಡೆಯಲಿದೆ ಎಂದು ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ವಿಳಂಬವಾಗಿದ್ದು, ಶೀಘ್ರವೇ ವಿಸ್ತರಣೆ ಆಗಲಿದೆ. ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಈಗಾಗಲೇ  ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ. ಸಿ. ವೇಣುಗೋಪಾಲ್  ಅವರೊಂದಿಗೆ ಚರ್ಚಿಸಲಾಗಿದೆ. ಐದು ರಾಜ್ಯಗಳ ಚುನಾವಣಾ ಪ್ರಚಾರದಲ್ಲಿ  ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತೊಡಗಿಸಿಕೊಂಡಿರುವುದರಿಂದ  ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಸಮಯ ಸಿಗುತ್ತಿಲ್ಲ. ಅವರ ಭೇಟಿಗೆ ಸಮಯ ದೊರೆತ ಕೂಡಲೇ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಪಡಿಸಲಾಗುವುದು ಎಂದು ತಿಳಿಸಿದರು.


ಇದೇ ಸಂದರ್ಭದಲ್ಲಿ ಪರಮೇಶ್ವರ್ ಅವರ ಹೇಳಿಕೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಮುಖ್ಯಮಂತ್ರಿ ಸ್ಥಾನ ನಿಭಾಯಿಸಲು ಕಾಂಗ್ರೆಸ್‌ನಲ್ಲಿ ಸಾಕಷ್ಟು ಜನರಿದ್ದಾರೆ. ಉಪ ಮುಖ್ಯಮಂತ್ರಿ ಪರಮೇಶ್ವರ್‌ ತಮ್ಮ ಆಸೆ ಹೇಳಿಕೊಂಡಿದ್ದಾರೆ ಅಷ್ಟೆ. ಹಾಗೆಂದ ಮಾತ್ರಕ್ಕೆ ಅವರೆಲ್ಲ ಸಿಎಂ ಸ್ಥಾನದ ಆಕಾಂಕ್ಷಿಗಳೆಂದು ಅರ್ಥವಲ್ಲ. ಸದ್ಯ ಆ ಸ್ಥಾನ ಖಾಲಿ ಇಲ್ಲ ಎಂದಿದ್ದಾರೆ.