ಬೆಂಗಳೂರು: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜುಲೈ 9ರಂದು ರಾಜ್ಯಾದ್ಯಂತ ಶಾಲೆಗಳನ್ನು ಬಂದ್ ಮಾಡುವ ಮೂಲಕ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಿದೆ.
ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರತ್ಯೇಕ ವೇತನ ಶ್ರೇಣಿ ನಿಗದಿಗೊಳಿಸಬೇಕು ಹಾಗೂ 2014ಕ್ಕಿಂತ ಮೊದಲು ನೇಮಕವಾದ ಪ್ರಾಥಮಿಕ ಶಾಲಾ ಶಿಕ್ಷಕರನ್ನು 1ರಿಂದ 5ನೇ ತರಗತಿಗೆ ಬೋಧನೆಗೆ ಸೀಮಿತಗೊಳಿಸಿರುವ ಆದೇಶ ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ಈ ಹಿಂದೆ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ಜೂ.30ರವರೆಗೆ ಗಡುವು ನೀಡಲಾಗಿತ್ತು. ಆದರೆ, ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸದಿರುವುದರಿಂದ ಜು.9ರಂದು ಬೃಹತ್ ಹೋರಾಟ ಮಾಡಲಾಗುವುದೆಂದು ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ. ನಾರಾಯಣ ಸ್ವಾಮಿ ತಿಳಿಸಿದ್ದಾರೆ.
ಪ್ರಾಥಮಿಕ ಶಾಲಾ ಶಿಕ್ಷಕರ ಪ್ರಮುಖ ಬೇಡಿಕೆಗಳೇನು?
* ಆರನೇ ವೇತನ ಆಯೋಗದ ಅಂತಿಮ ವರದಿ ಶಿಫಾರಸಿನ ಮೇರೆಗೆ ಮುಖ್ಯ ಶಿಕ್ಷಕರಿಗೆ 10, 15, 20, 25 ಮತ್ತು 30 ವರ್ಷದ ಬಡ್ತಿ ನೀಡಬೇಕು.
* ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಉಪ ನಿರ್ದೇಶಕ ಹುದ್ದೆವರೆಗೂ ಬಡ್ತಿ ನೀಡಬೇಕು.
* ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಮುಂದುವರಿಸಬೇಕು.
* ಹಾಲಿ ಪದವೀಧರ ಶಿಕ್ಷಕರನ್ನು ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳಲ್ಲೂ ಕಾರ್ಯ ನಿರ್ವಹಿಸಲು ಪದವೀಧರ ಶಿಕ್ಷಕರ ವೇತನ ಶ್ರೇಣಿ ನಿಗದಿಗೊಳಿಸಬೇಕು.
* ಶಿಕ್ಷಕ-ವಿದ್ಯಾರ್ಥಿ ಅನುಪಾತ ಗುರುತಿಸುವ ವೇಳೆ ಮುಖ್ಯ ಶಿಕ್ಷಕ, ದೈಹಿಕ ಶಿಕ್ಷಕರನ್ನು ಹೊರತುಪಡಿಸಿ ಮಾಧ್ಯಮವಾರು, ಪ್ರಾದೇಶಿಕವಾರು ವಿಶೇಷ ನಿಯಮ ರೂಪಿಸಿ ಪ್ರಕ್ರಿಯೆ ನಡೆಸಬೇಕು.