ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ: ಪರಿಶೀಲಿಸಿ ತೀರ್ಮಾನ ಎಂದ ಸಿಎಂ ಕುಮಾರಸ್ವಾಮಿ
ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಪಾರಂಪರಿಕ ಸ್ಥಳಗಳ ಅಭಿವೃದ್ಧಿಗಾಗಿ 134.55 ಕೋಟಿ ರೂ.ಗಳ ಕ್ರಿಯಾಯೋಜನೆ ಈಗಾಗಲೇ ತಯಾರಿಸಲಾಗಿದ್ದು ಬಿಡುಗಡೆ ಮಾಡಿರುವ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಿ.
ಬೆಳಗಾವಿ: ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ಒದಗಿಸುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.
ಸುವರ್ಣ ವಿಧಾನಸೌಧದಲ್ಲಿ ಬುಧವಾರ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಪಾರಂಪರಿಕ ಸ್ಥಳಗಳ ಅಭಿವೃದ್ಧಿಗಾಗಿ 134.55 ಕೋಟಿ ರೂ.ಗಳ ಕ್ರಿಯಾಯೋಜನೆ ಈಗಾಗಲೇ ತಯಾರಿಸಲಾಗಿದ್ದು ಬಿಡುಗಡೆ ಮಾಡಿರುವ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಿ, ಬಳಿಕ ಅಗತ್ಯ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಕಿತ್ತೂರು ಹಾಗೂ ಸುತ್ತಮುತ್ತಲಿನ ಪಾರಂಪರಿಕ ಸ್ಥಳಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು 200 ಕೋಟಿ ರೂ. ಅನುದಾನ ಬಿಡುಗಡೆಗೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಕಿತ್ತೂರು ಚೆನ್ನಮ್ಮ ಉತ್ಸವವನ್ನು ರಾಜ್ಯಮಟ್ಟದ ಉತ್ಸವವೆಂದು ಪರಿಗಣಿಸಲು ಈ ಸಂದರ್ಭದಲ್ಲಿ ಶಾಸಕ ಮಹಾಂತೇಶ ಬ ದೊಡ್ಡಗೌಡರ ವಿನಂತಿಸಿದರು. ಮಡಿವಾಳ ರಾಜಯೋಗೀಂದ್ರ ಸ್ವಾಮಿಗಳು ಪ್ರಾಧಿಕಾರದ ವತಿಯಿಂದ ಆಗಲೇಬೇಕಾದ ಅಭಿವೃದ್ಧಿ ಕಾರ್ಯ ಮತ್ತು ಯೋಜನೆಗಳ ಪಟ್ಟಿಯನ್ನು ನೀಡಿದರು.