ರಾಜ್ಯದ ನೆರೆ-ಬರ: 2,000 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮೋದಿಗೆ ಮೊರೆ

ಕೊಡಗು ಹಾಗೂ ನೆರೆಯ ಜಿಲ್ಲೆಗಳಿಗೆ ಪುನರ್ವಸತಿ ಹಾಗೂ ಪರಿಹಾರ  ಕಾರ್ಯಗಳಿಗಾಗಿ  2,000 ಕೋಟಿ ರೂ. ಗಳ ಪ್ಯಾಕೇಜ್ ಘೋಷಿಸಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ ನಿಯೋಗ.

Last Updated : Sep 10, 2018, 01:15 PM IST
ರಾಜ್ಯದ ನೆರೆ-ಬರ: 2,000 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮೋದಿಗೆ ಮೊರೆ title=

ನವದೆಹಲಿ: ರಾಜ್ಯದ ನೆರೆ-ಬರ ವಿಚಾರದ ಕುರಿತು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಿಯೋಗ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ 2,000 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಕೊಡಗು ಮತ್ತು ನೆರೆಯ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಸತತ ಭಾರಿ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಉಂಟಾಗಿ ಜನ-ಜಾನುವಾರುಗಳು  ಜೀವ ಕಳೆದುಕೊಂಡಿದ್ದು, ಸಾವಿರಾರು ಜನ  ನಿರಾಶ್ರಿತರಾಗಿದ್ದಾರೆ.  ಆಗಸ್ಟ್ 2 ನೇ  ವಾರದಲ್ಲಿ ಕಳೆದ 118 ವರ್ಷಗಳಲ್ಲೇ ದಾಖಲೆ ಮಳೆ ಸುರಿದಿದ್ದರಿಂದ ಅಪಾರ ನಷ್ಟ ಸಂಭವಿಸಿದ್ದು, ಕೃಷಿ, ತೋಟಗಾರಿಕೆ ಹಾಗೂ ವಾಣಿಜ್ಯಬೆಳೆಗಳಿಗೆ, ಮೂಲಸೌಕರ್ಯ, ಮನೆಗಳಿಗೆ ತೀವ್ರ ಹಾನಿಯುಂಟಾಗಿದೆ. 

ಅತಿವೃಷ್ಟಿಯಿಂದಾಗಿ ಈ ಜಿಲ್ಲೆಗಳಲ್ಲಿ ಒಟ್ಟು 3705.87 ಕೋಟಿ  ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಪುನರ್ವಸತಿ ಮತ್ತು ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕೊಡಗು ಮತ್ತಿತರ ಜಿಲ್ಲೆಗಳಿಗೆ 2,000 ರೂಪಾಯಿಗಳ ಪ್ಯಾಕೇಜ್ ಘೋಷಿಸಿ ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ನಿಯೋಗದ ಇತರ  ಸದಸ್ಯರೊಂದಿಗೆ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಅಂತೆಯೇ ಕರ್ನಾಟಕದ ಒಳನಾಡಿನಲ್ಲಿ 17 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, ಈ ಕುರಿತೂ ಸಹ ನಷ್ಟದ ಪ್ರಮಾಣ ಅಂದಾಜು ಮಾಡಲಾಗುತ್ತಿದ್ದು, ಈ ಕುರಿತು ನಾಳೆ ಸಂಪುಟ ಉಪಸಮಿತಿ ಸಭೆ ನಡೆಸಿ ಪ್ರಸ್ತಾವನೆಯನ್ನು ಅಂತಿಮಗೊಳಿಸಲಿದೆ. ಅದರಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ನಿಯೋಗವು ಪ್ರಧಾನಿಯವರಿಗೆ ಮಾಹಿತಿ ನೀಡಿತು.

ಕೊಡಗು ಮತ್ತು ನೆರೆಯ ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಸಂಭವಿಸಿದ ಹಾನಿಯನ್ನು ಸಮೀಕ್ಷೆ ಮಾಡಲು ಕೂಡಲೇ ಕೇಂದ್ರ ಸರ್ಕಾರವು ಅಧಿಕಾರಿಗಳ ಎರಡು ತಂಡಗಳನ್ನು ಕಳುಹಿಸುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ನೇತೃತ್ವದ ನಿಯೋಗಕ್ಕೆ ಭರವಸೆ ನೀಡಿದರು.

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ನಿಯೋಗವು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅತಿವೃಷ್ಟಿ ಹಾಗೂ ಒಳನಾಡಿನಲ್ಲಿ ಬರ ಪರಿಸ್ಥಿತಿ ತಲೆದೋರಿರುವ ಬಗ್ಗೆ ಮನವರಿಕೆ ಮಾಡಿ, ಕೊಡಗು ಹಾಗೂ ನೆರೆಯ ಜಿಲ್ಲೆಗಳಿಗೆ ಪುನರ್ವಸತಿ ಹಾಗೂ ಪರಿಹಾರ  ಕಾರ್ಯಗಳಿಗಾಗಿ  2,000 ಕೋಟಿ ರೂ. ಗಳ ಪ್ಯಾಕೇಜ್ ಘೋಷಿಸಿ ಅನುದಾನ ಬಿಡುಗಡೆ ಮಾಡುವಂತೆ ಮಾಡಿದ ಮನವಿಗೆ ಪ್ರಧಾನ ಮಂತ್ರಿಯವರು ಸಕಾರಾತ್ಮಕವಾಗಿ ಸ್ಪಂದಿಸಿದರು.

ಮಾಜಿ ಪ್ರಧಾನಿ ಹಾಗೂ ಹಾಸನ ಸಂಸದ ಹೆಚ್.ಡಿ.ದೇವೇಗೌಡ, ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್,  ಕಂದಾಯ ಸಚಿವ ಆರ್. ವಿ.ದೇಶಪಾಂಡೆ, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಲೋಕೋಪಯೋಗಿ ಸಚಿವ  ಹೆಚ್.ಡಿ.ರೇವಣ್ಣ, ಗ್ರಾಮೀಣಾಭಿ ವೃದ್ಧಿ ಸಚಿವ ಕೃಷ್ಣ ಬೈರೇಗೌಡ  ಅವರು ಮುಖ್ಯಮಂತ್ರಿಗಳೊಂದಿಗೆ ನಿಯೋಗದಲ್ಲಿ ಇದ್ದರು.

Trending News