ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇದರಿಂದಾಗಿ ಸಾವಿರಾರು ಮಂದಿ ತಮ್ಮ ಸೂರು ಕಳೆದುಕೊಂಡು ಶಿಬಿರಗಳಲ್ಲಿ ವಾಸ್ತವ್ಯ ಹೂಡಿದ್ದಾರೆ. ಉತ್ತರ ಕರ್ನಾಟಕ ಭಾಗದ ಪ್ರವಾಹ ಸಂತ್ರಸ್ತರನ್ನು ಕಂಡು ಮನಸ್ಸು ಮರುಗುತ್ತಿದೆ. ಕ್ಷೇತ್ರದ ಜನತೆಗೆ ಯಾವ ತೊಂದರೆಯೂ ಆಗದ ರೀತಿಯಲ್ಲಿ ಸುವ್ಯವಸ್ಥೆ ಕಲ್ಪಿಸುವ ಹೊಣೆ ನಮ್ಮದು ಎಂದು ಬಾದಾಮಿ ಕ್ಷೇತ್ರದ ಜನತೆಗೆ ಅಲ್ಲಿನ ಶಾಸಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಉತ್ತರ ಕರ್ನಾಟಕ ಭಾಗದ ಪ್ರವಾಹ ಸಂತ್ರಸ್ತರನ್ನು ಕಂಡು ಮನಸ್ಸು ಮರುಗುತ್ತಿದೆ. ಇಂಥ ಸಂದರ್ಭದಲ್ಲಿ ಅವರೊಂದಿಗೆ ಇರಬೇಕಿತ್ತು ಎನಿಸದರೂ ವೈದ್ಯರ ಸಲಹೆ ಮೇರೆಗೆ ಕೆಲವು ದಿನಗಳ‌ ಕಾಲದ ವಿಶ್ರಾಂತಿ ಪಡೆಬೇಕಾಗಿದೆ. ನನ್ನ ಕ್ಷೇತ್ರ ಬಾದಾಮಿಯಲ್ಲಿ ಸಹ ಪ್ರವಾಹ ಭೀತಿ ಎದುರಾಗಿದ್ದು, ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ.


ನವಿಲುತೀರ್ಥ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುವುದರಿಂದ ಮಲಪ್ರಭಾ ನದಿ ದಡದ ಗ್ರಾಮಗಳಲ್ಲಿ ಪ್ರವಾಹ ಉಂಟಾಗಲಿದೆ. ಆದ್ದರಿಂದ ಗ್ರಾಮಸ್ಥರು ಸುರಕ್ಷಿತ ತಾಣಕ್ಕೆ ತೆರಳಬೇಕೆಂದು ಈ ಮೂಲಕ ಮನವಿ ಮಾಡುತ್ತಿದ್ದೇನೆ. ಉಂಟಾಗಬಹುದಾದ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಹಾಗೂ ಸಂತ್ರಸ್ತರಿಗೆ ಪರಿಹಾರ ಕಾರ್ಯ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಸ್ಥಳ ಪರಿಶೀಲನೆ ನಡೆಸಿರುವ ಅಧಿಕಾರಿಗಳು ಈಗಾಗಲೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.


ಸುರಕ್ಷಿತ ತಾಣಕ್ಕೆ ತೆರಳುವವರಿಗೆ ಅಗತ್ಯ ಸೌಕರ್ಯ ಕಲ್ಪಿಸಲು ಅಧಿಕಾರಿಗಳ ತಂಡ ಸಜ್ಜಾಗಿದೆ. ಈ ಸಂಬಂಧ ಬಾದಾಮಿ ತಹಶಿಲ್ದಾರ್, ಬಾಗಲಕೋಟೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಕ್ಷೇತ್ರದ ಜನತೆಗೆ ಯಾವ ತೊಂದರೆಯೂ ಆಗದ ರೀತಿಯಲ್ಲಿ ಸುವ್ಯವಸ್ಥೆ ಕಲ್ಪಿಸುವ ಹೊಣೆ ನಮ್ಮದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.