ಬೆಂಗಳೂರಿನಲ್ಲಿ ಭಾರಿ ಮಳೆ: ಬಿಬಿಎಂಪಿ ಆಯುಕ್ತರಿಂದ ಮಾಹಿತಿ ಪಡೆದ ಮುಖ್ಯಮಂತ್ರಿ
ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು ಹಲವೆಡೆ ಮರಗಳು ಧರೆಗುರುಳಿವೆ.
ಬೆಂಗಳೂರು: ಬೆಂಗಳೂರಿನಲ್ಲಿ ಶನಿವಾರ ಮತ್ತು ಭಾನುವಾರ ಬಿರುಗಾಳಿ ಸಹಿತ ಭಾರಿ ಮಳೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಬಿಎಂಪಿ ಆಯುಕ್ತರೊಂದಿಗೆ ಮಾತನಾಡಿ ಸೂಕ್ತ ಮುನ್ನೆಚ್ಚರಿಕೆ ಕ್ರಮ ವಹಿಸಿರುವ ಬಗ್ಗೆ ಮಾಹಿತಿ ಪಡೆದರು.
ಶನಿವಾರ ರಾತ್ರಿ ಸುರಿದ ಬಿರುಗಾಳಿ ಮಳೆಗೆ ಬಹಳಷ್ಟು ಮರಗಳು ಉರುಳಿದ್ದವು. ಅವುಗಳನ್ನು ಭಾನುವಾರ ತೆರವುಗೊಳಿಸಲಾಗಿದೆ. ಯಾವುದೇ ಅನಾಹುತ ಸಂಭವಿಸದಂತೆ ಹಾಗೂ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾದರೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ.
ಬಿಬಿಎಂಪಿ ನಿಯಂತ್ರಣ ಕೊಠಡಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದ್ದು, ಎಲ್ಲ ಅಧಿಕಾರಿ , ಸಿಬ್ಬಂದಿ ಜಾಗೃತರಾಗಿದ್ದಾರೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.