)
Karnataka Weather: ಅಕ್ಟೋಬರ್ 15ರವರೆಗೆಗೆ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಧ್ಯಮದಿಂದ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ ಇಂದು (ಅ.13) 9 ಜಿಲ್ಲೆಗಳಿಗೆ ಹಾಗೂ ಅಕ್ಟೋಬರ್ 15ರವರೆಗೆ ಮೈಸೂರು ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಕರಾವಳಿ ಭಾಗಗಳಲ್ಲಿ ಮಳೆ ತಗ್ಗುವ ನಿರೀಕ್ಷೆಯಿದ್ದು, ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದರೂ ಮಳೆಯ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ.
ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್:
ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಅಕ್ಟೋಬರ್ 15ರವರೆಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ 9 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ:
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದು, ಈ ಹಿನ್ನೆಲೆ ಸೋಮವಾರ (ಅಕ್ಟೋಬರ್ 13) ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉಳಿದಂತೆ ಇಂದು ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಹಗುರದಿಂದ ಸಾಧರಣ ಮಳೆ ಸಾಧ್ಯತೆ ಇದೆ ಎಂದು
ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ.
ಯಾವ್ಯಾವ ಜಿಲ್ಲೆಗಳಲ್ಲಿ ಮಳೆ?
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಗುಡುಗು, ಮಿಂಚು ಸಹಿತ ಮಳೆಯನ್ನು ನಿರೀಕ್ಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಾತ್ರ ನಾಳೆ (ಅ.14) ಮಳೆಯನ್ನು ನಿರೀಕ್ಷಿಸಲಾಗಿದೆ. ಕಲಬುರಗಿ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದ್ದು, ಮಳೆಯ ನಿರೀಕ್ಷೆ ಬಹಳ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಐಎಂಡಿ ಮೂಲವನ್ನು ಉಲ್ಲೇಖಿಸಿ ಈ ಕುರಿತಂತೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮುಂದಿನ 7 ದಿನಗಳವರೆಗೆ ರಾಜ್ಯದಾದ್ಯಂತ ಗುಡುಗು ಸಹಿತ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆ ಆಗಲಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 14 ರವರೆಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.