ಮಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥತಿ ಎದುರಾಗಿದೆ. ಕರ್ನಾಟಕದ ಕರಾವಳಿ, ಮಲೆನಾಡಿನಲ್ಲೂ ಭಾರಿ ಮಳೆಯಾಗುತ್ತಿರುವ ಪರಿಣಾಮ ಕಾವೇರಿ, ಲಕ್ಷ್ಮಣತೀರ್ಥ, ಶರಾವತಿ, ರಾಮತೀರ್ಥ, ಕುಮಾರಧಾರಾ ಮತ್ತು ತುಂಗಭದ್ರಾ ನದಿಗಳು ತುಂಬಿ ಹರಿಯುತ್ತಿದ್ದು, ಸಾವಿರಾರು ಹೆಕ್ಟೇರ್ ಬೆಳೆ ನೀರುಪಾಲಾಗಿದೆ.
ಮಳೆ ಮತ್ತು ಪ್ರವಾಹದಿಂದಾಗಿ ಕೊಡಗು ತತ್ತರಿಸಿದ್ದು, ರಸ್ತೆ-ಸೇತುವೆಗಳು ಪ್ರವಾಹಕ್ಕೆ ಸಿಲುಕಿ ಕೊಚ್ಚಿಹೋಗಿವೆಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ಹಾವೇರಿ, ದಾವಣಗೆರೆ, ಕೊಪ್ಪಳ, ಬಳ್ಳಾರಿ, ರಾಯಚೂರು ಮತ್ತು ಬಾಗಲಕೋಟೆಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ.
ಕುಕ್ಕೆ ಸುಬ್ರಹಮಣ್ಯ ರಸ್ತೆ ಮುಳುಗಡೆ
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಯಾತ್ರಾ ಹಾಗೂ ಪ್ರವಾಸಿ ಸ್ಥಳ ಕುಕ್ಕೆ ಸುಬ್ರಹ್ಮಣ್ಯ ಸಂಪೂರ್ಣ ದ್ವೀಪದಂತಾಗಿದ್ದು, ಕುಮಾರಧಾರ ನದಿ ನೀರು ರಾಜ್ಯ ಹೆದ್ದಾರಿವರೆಗೂ ತುಂಬಿ ಹರಿಯುತ್ತಿದೆ. ನದಿ ತೀರದ ಕುಲ್ಕುಂದ, ನೂಜಿ ಬಾಳ್ತಿಲ ಗ್ರಾಮದ 100ಕ್ಕೂ ಹೆಚ್ಚು ಮನೆ ಮುಳುಗಡೆಯಾಗಿದೆ. ಸುಳ್ಯ, ಬೆಳ್ತಂಗಡಿ ಸೇರಿದಂತೆ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ರಸ್ತೆ ಕಡಿತಗೊಂಡಿದೆ. ಸಂತ್ರಸ್ತರನ್ನು ಸುರಕ್ಷಿತ ಪ್ರದೇಶಗಳಿಗೆ ರವಾನೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ
ದಕ್ಷಿಣಕನ್ನಡದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನೀರಿನ ಮಟ್ಟ 8.6 ಮೀಟರ್ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ಹಲವು ಪ್ರದೇಶಗಳು ಮುಳುಗಡೆ ಆಗುವ ಭೀತಿ ಎದುರಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಿಸಲಾಗಿದೆ.